ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಯೋಜನೆ:ಭಾರಿ ಅವ್ಯವಹಾರ

ಶುಕ್ರವಾರ, ಮೇ 24, 2019
28 °C

ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ನಗರೋತ್ಥಾನ ಯೋಜನೆ:ಭಾರಿ ಅವ್ಯವಹಾರ

Published:
Updated:

ಬೆಂಗಳೂರು: ರಾಜ್ಯದ ಕೆಲವು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯ ಅನುದಾನ ದುರುಪಯೋಗ, ಕಳಪೆ ಕಾಮಗಾರಿ ಸೇರಿದಂತೆ ಭಾರಿ ಅವ್ಯವಹಾರ ನಡೆದಿದೆ.ಈ ಅವ್ಯವಹಾರಗಳ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲಾಗುವುದು ಎಂದು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ಗುರುವಾರ ಇಲ್ಲಿ ತಿಳಿಸಿದರು.ಬೆಳಗಾವಿ ಜಿಲ್ಲೆಯ ರಾಯಬಾಗ ಸೇರಿದಂತೆ 5-6 ಸ್ಥಳೀಯ ಸಂಸ್ಥೆಗಳಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಮುಖ್ಯಮಂತ್ರಿಗಳ ನಗರೋತ್ಥಾನ ಯೋಜನೆಯಡಿ ಇದುವರೆಗೆ 840 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ಆದರೆ ಕಾಮಗಾರಿಗಳ ಗುಣಮಟ್ಟ ಕಳಪೆಯಾಗಿದ್ದು, ಅನುದಾನವೂ ದುರುಪಯೋಗ ಆಗಿದೆ. ಹೀಗಾಗಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.ನಗರೋತ್ಥಾನ ಯೋಜನೆಯಡಿ 211 ನಗರ ಸ್ಥಳೀಯ ಸಂಸ್ಥೆಗಳಿಗೆ ಇದುವರೆಗೆ 1,068 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಅನುಮೋದನೆ ನೀಡಿದ್ದ 8,152 ಕಾಮಗಾರಿಗಳ ಪೈಕಿ 5,000 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 169 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದರು.ಕೋಟ್ಯಂತರ ರೂಪಾಯಿ ವೆಚ್ಚ ಮಾಡಿದ್ದರೂ ನಿರೀಕ್ಷೆಗೆ ತಕ್ಕಂತೆ ಕೆಲಸ ಆಗಿಲ್ಲ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಎಷ್ಟು ಕಿ.ಮೀ. ರಸ್ತೆ ಇದೆ ಎಂಬ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಆ ಮಾಹಿತಿ ಬಂದ ನಂತರ ಎಷ್ಟು ಕಿ.ಮೀ. ರಸ್ತೆ ಇದೆ, ಅವುಗಳ ದುರಸ್ತಿಗೆ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.ಕೆಲವು ಕಡೆ ಸ್ಥಳೀಯ ಸಂಸ್ಥೆಗಳ ಸದಸ್ಯರ ಸಂಬಂಧಿಕರಿಗೆ ಟೆಂಡರ್ ನೀಡಲಾಗಿದೆ. ಅವರು ಕಾಮಗಾರಿಗಳ ಗುಣಮಟ್ಟ ಕಾಪಾಡಿಲ್ಲ. ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಆದ್ದರಿಂದ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಆಗಬೇಕಾದ ಯೋಜನೆಗಳ ಪಟ್ಟಿ ಮಾಡಿ ಜಿಲ್ಲಾಧಿಕಾರಿಗಳ ಮೂಲಕವೇ ಟೆಂಡರ್ ಕರೆಯಲು ವ್ಯವಸ್ಥೆ ಮಾಡಲಾಗುವುದು. ಇದರ ಸಾಧಕ- ಬಾಧಕಗಳ ಬಗ್ಗೆ ಒಂದು ತಿಂಗಳಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.ಲೋಕಾಯುಕ್ತ ತನಿಖೆಯಿಂದ ಯಾವ್ಯಾವ ಅಧಿಕಾರಿಗಳು ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಲಿದೆ. ಹಿಂದಿನ ಅಧಿಕಾರಿಗಳು ಕಾರಣರಾಗಿದ್ದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಬೇರೆಯವರಿಗೆ ಇದು ಎಚ್ಚರಿಕೆಯಾಗಬೇಕು ಎಂಬ ಉದ್ದೇಶದಿಂದ ತನಿಖೆಗೆ ನಿರ್ಧರಿಸಲಾಗಿದೆ ಎಂದರು.ನಗರ ಪ್ರದೇಶಗಳ ಅಭಿವೃದ್ಧಿ ಕಾರ್ಯಗಳಿಗೆ ರಾಜ್ಯ ಹಣಕಾಸು ಆಯೋಗದ ಮುಕ್ತನಿಧಿ ಯೋಜನೆಯಡಿ ಈ ವರ್ಷ 940 ಕೋಟಿ ರೂಪಾಯಿ ಅನುದಾನ ಹಂಚಿಕೆಯಾಗಿದೆ. ಇದುವರೆಗೆ 166 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.13ನೇ ಹಣಕಾಸು ಯೋಜನೆಯಡಿ ಮೂಲಸೌಕರ್ಯ ಕಾಮಗಾರಿಗಳಿಗಾಗಿ ರಾಜ್ಯಕ್ಕೆ 1,303 ಕೋಟಿ ರೂಪಾಯಿ ಹಂಚಿಕೆಯಾಗಿದ್ದು, 2010-11ರಿಂದ ಐದು ವರ್ಷಗಳ ಕಾಲ ವೆಚ್ಚ ಮಾಡಲು ಅವಕಾಶವಿದೆ. ಇದುವರೆಗೆ 185 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಅವರು ವಿವರಿಸಿದರು.

 

100 ಗ್ರಾ.ಪಂ ಮೇಲ್ದರ್ಜೆಗೆ

ಬೆಂಗಳೂರು: ಹತ್ತು ಸಾವಿರಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ರಾಜ್ಯದಲ್ಲಿನ 100 ಗ್ರಾಮ ಪಂಚಾಯಿತಿಗಳನ್ನು ಮಾರ್ಚ್ ಒಳಗೆ ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಪೌರಾಡಳಿತ ಸಚಿವ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.400 ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಗಳನ್ನಾಗಿ ಮೇಲ್ದರ್ಜೆಗೇರಿಸುವಂತೆ ಪ್ರಸ್ತಾವಗಳು ಬಂದಿವೆ. ಆದರೆ ಸದ್ಯಕ್ಕೆ ನೂರನ್ನು ಮಾತ್ರ ಪರಿಗಣಿಸಲಾಗುವುದು. 2011ರ ಜನಗಣತಿಯನ್ನು ಆಧರಿಸಿ 20 ಸಾವಿರಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ 10ರಿಂದ 15 ಪಟ್ಟಣ ಪಂಚಾಯಿತಿಗಳನ್ನು ಪುರಸಭೆಗಳನ್ನಾಗಿ ಮತ್ತು ಹತ್ತು ಪುರಸಭೆಗಳನ್ನು ನಗರಸಭೆಗಳನ್ನಾಗಿ ಪರಿವರ್ತಿಸಬೇಕಾಗಿ ಬರಬಹುದು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry