ಮಂಗಳವಾರ, ನವೆಂಬರ್ 19, 2019
28 °C
ಚುನಾವಣಾ ಆಯೋಗಕ್ಕೆ ಬಿಜೆಪಿ ಮನವಿ

ಸ್ಫೋಟ: ಬಂದೋಬಸ್ತ್‌ಗೆ ಆಗ್ರಹ

Published:
Updated:

ಬೆಂಗಳೂರು: ಬಾಂಬ್ ಸ್ಫೋಟ ಸಂಭವಿಸಿರುವ ಕಾರಣ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಬೇಕು. ಜನರಲ್ಲಿ ಭೀತಿ ಉಂಟಾಗದಂತೆ ಚುನಾವಣಾ ಆಯೋಗ ಕಠಿಣ ಕ್ರಮಗಳನ್ನು ತೆಗದುಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಪಡಿಸಿದೆ.ಈ ಸಂಬಂಧ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ  ಪ್ರಹ್ಲಾದ ಜೋಶಿ ಅವರು ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಒತ್ತು ನೀಡಬೇಕು. ಸ್ಫೋಟದ ಹಿನ್ನೆಲೆಯಲ್ಲಿ ಜನರಲ್ಲಿ ಭೀತಿ ಹುಟ್ಟಿಸುವ ಪ್ರಯತ್ನ ನಡೆದಿದ್ದು, ಅದಕ್ಕೆ ಅವಕಾಶ ನೀಡಬಾರದು ಎಂದು ಅವರು ಮನವಿ ಮಾಡಿದ್ದಾರೆ.ವಿಶೇಷ ಚುನಾವಣಾ ವೀಕ್ಷಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ಮಲ್ಲೇಶ್ವರ ಕ್ಷೇತ್ರದಲ್ಲಿ ನಿಯೋಜಿಸಬೇಕು. ಚುನಾವಣೆ ಮುಗಿಯುವವರೆಗೂ ಇಡೀ ಕ್ಷೇತ್ರದ ಪ್ರಮುಖ ಭಾಗಗಳಲ್ಲಿ ಸಿ.ಸಿ. ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಚಲನವಲನಗಳನ್ನು ಕ್ಯಾಮೆರಾದಲ್ಲಿ ದಾಖಲಿಸಬೇಕು. ಕ್ಷೇತ್ರದಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಲ್ಲೇಶ್ವರ ಕ್ಷೇತ್ರದ ಹಲವು ಕಡೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಬೇಕು ಎಂದೂ ಮನವಿ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)