ಬುಧವಾರ, ಏಪ್ರಿಲ್ 14, 2021
32 °C

ಸ್ವಾವಲಂಬಿಯಾಗದಿದ್ದರೆ ದಿನಾಚರಣೆಗೆ ಅರ್ಥವಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜಕೀಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಇಂದಿಗೂ ಮಹಿಳೆಯರ ಮೇಲೆ ಶೋಷಣೆ ಮುಂದುವರಿದಿದೆ.ಹಾಗಾಗಿ ಮಹಿಳೆಯರು ಸ್ವಾವಲಂಬಿಗಳಾಗುವತ್ತ ಗಮನ ಹರಿಸಬೇಕಿದೆ’ ಎಂದು ವಿಧಾನಪರಿಷತ್ತಿನ ಉಪ ಸಭಾಪತಿ ವಿಮಲಾಗೌಡ ಹೇಳಿದರು.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಆವರಣದ ಡಾ.ರಾಜ್‌ಕುಮಾರ್ ಗಾಜಿನಮನೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.‘ಇತ್ತೀಚಿನ ವರ್ಷಗಳಲ್ಲಿ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಮಹಿಳೆಯರ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ದೌರ್ಜನ್ಯ ಮುಂದುವರಿದಿದೆ. ಸಮೀಕ್ಷೆಯೊಂದರ ಪ್ರಕಾರ ರಾಜ್ಯದಲ್ಲಿರುವ ಗಾರ್ಮೆಂಟ್‌ಗಳಲ್ಲಿ ಸುಮಾರು 21 ಲಕ್ಷ ಮಂದಿ ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಈ ಮಹಿಳೆಯರಿಗೆ ಸೂಕ್ತ ಭದ್ರತೆ ಇಲ್ಲ’ ಎಂದರು.‘ನ್ಯಾಯಯುತವಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆಯಲು ಮಹಿಳೆಯರು ಹೋರಾಟ ನಡೆಸಬೇಕು.ಆರ್ಥಿಕವಾಗಿ ಸ್ವಾವಲಂಬಿಗಳಾಬೇಕು. ಆಗಮಾತ್ರ ಮಹಿಳಾ ದಿನಾಚರಣೆಗೆ ಅರ್ಥ ಬರುತ್ತದೆ’ ಎಂದು ಹೇಳಿದರು.ಮೇಯರ್ ಎಸ್.ಕೆ. ನಟರಾಜ್ ಮಾತನಾಡಿ, ‘ಮಹಿಳಾ ದಿನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಪಾಲಿಕೆ ವತಿಯಿಂದ ಸಮಾರಂಭ ಆಯೋಜಿಸಲಾಗಿದೆ. ಮುಂದಿನ ವರ್ಷಗಳಲ್ಲಿ ಮಹಿಳಾ ದಿನವನ್ನು ಇನ್ನಷ್ಟು ವೈವಿಧ್ಯಮಯವಾಗಿ ನಡೆಸಲಾಗುವುದು. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು’ ಎಂದರು.ಪಾಲಿಕೆ ಸದಸ್ಯೆ ಶಾಂತಕುಮಾರಿ ಮಾತನಾಡಿ, ‘ಮಹಿಳೆಯರು ಕೀಳರಿಮೆ ಭಾವನೆಯನ್ನು ಮೊದಲು ತೊಡೆದುಹಾಕಬೇಕು. ಹೆಣ್ಣು ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಲು ಆದ್ಯತೆ ನೀಡಬೇಕು’ ಎಂದರು.ಇದೇ ಸಂದರ್ಭದಲ್ಲಿ ಬಿಬಿಎಂಪಿ ಶಾಲೆಯ ಮಕ್ಕಳಿಗೆ ಸ್ವೆಟರ್ ವಿತರಿಸಲಾಯಿತು.ಆಯುಕ್ತ ಸಿದ್ದಯ್ಯ, ಉಪಮೇಯರ್ ಎನ್. ದಯಾನಂದ್, ವಿರೋಧ ಪಕ್ಷದ ನಾಯಕ ಎಂ.ನಾಗರಾಜ್ ಶಿಕ್ಷಣ ಮತ್ತು ಕ್ರೀಡಾ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ವಿ. ಗಣೇಶ್, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಪಿ.ಎನ್. ಸದಾಶಿವ, ಬೃಹತ್ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ರವೀಂದ್ರ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥರೆಡ್ಡಿ, ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷ ಗಂಗಬೈರಯ್ಯ ಇತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.