ಭಾನುವಾರ, ಜುಲೈ 25, 2021
22 °C

ಸ್ವಾಸ್ಥ್ಯ ಬಿಮಾ ಯೋಜನೆ: ರಾಜ್ಯ ವಿಫಲ- ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬರುವ ಕೂಲಿ ಕಾರ್ಮಿಕರಿಗೆ ಅನುಕೂಲಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಸ್ವಾಸ್ಥ್ಯ ಬಿಮಾ ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸುವಲ್ಲಿ ವಿಫಲವಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.ಕಾರ್ಮಿಕರ ದಿನಾಚರಣೆ ಅಂಗವಾಗಿ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 24 ರಾಜ್ಯಗಳಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಅತ್ಯಂತ ಕಡುಬಡವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಯೋಜನೆಯನ್ನು ಕೇಂದ್ರ ಜಾರಿಗೊಳಿಸಿದೆ. ಆದರೆ ರಾಜ್ಯದಲ್ಲಿನ ಬಿಜೆಪಿ ಸರ್ಕಾರ ಮಾತ್ರ ಕಾರ್ಮಿಕರ ಹಿತ ಕಾಯುವಲ್ಲಿ ಮೌನ ತಾಳಿದೆ. ಇದು ದುರದೃಷ್ಟಕರ ಎಂದರು.ಈ ಯೋಜನೆಗೆ ಕೇಂದ್ರ ಸರ್ಕಾರ 350 ಕೋಟಿ ರೂಪಾಯಿ ಮೀಸಲಿರಿಸಿದೆ. ಮುಂದಿನ ವರ್ಷ 700 ಕೋಟಿ ರೂಪಾಯಿ ನೀಡಲು ಚಿಂತನೆ ನಡೆದಿದೆ. ಯೋಜನೆಯ ಒಟ್ಟು ವೆಚ್ಚದಲ್ಲಿ ಶೇ 75ರಷ್ಟನ್ನು ಕೇಂದ್ರವೇ ಭರಿಸಲಿದ್ದು, ಶೇ 25ರಷ್ಟನ್ನು ಮಾತ್ರ ರಾಜ್ಯ ಸರ್ಕಾರ ಭರಿಸಬೇಕಿದೆ. ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಎರಡು ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಲಾಗುವುದು. 30 ಸಾವಿರ ರೂಪಾಯಿವರೆಗೆ ವೈದ್ಯಕೀಯ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ. ಇಂತಹ ಯೋಜನೆ ಪ್ರಪಂಚದಲ್ಲಿಯೇ ಎಲ್ಲಿಯೂ ಇಲ್ಲ ಎಂದು ಖರ್ಗೆ ನುಡಿದರು.ಕಾಯ್ದೆಗೆ ತಿದ್ದುಪಡಿ: ‘ಗಣಿಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಹಿತರಕ್ಷಣೆಗಾಗಿ ಈಗಿರುವ ಗಣಿ ಸುರಕ್ಷತಾ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಇಚ್ಛಿಸಿದೆ. ಇಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಬದುಕು ದುಸ್ತರವಾಗಿದೆ. ಅನೇಕ ರೋಗ ರುಜಿನಗಳಿಗೆ ಬಲಿಯಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ಇವರಿಗೆ ಈಗಿನ ಕಾಯ್ದೆಯ ಅಡಿ ಯಾವೊಂದು ರಕ್ಷಣೆಯೂ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾಯ್ದೆ ತಿದ್ದುಪಡಿಗೆ ಚಿಂತನೆ ನಡೆದಿದೆ.ಕಾರ್ಮಿಕರನ್ನು ಕನಿಷ್ಠವಾಗಿ ನಡೆಸಿಕೊಳ್ಳುವ ಗಣಿ ಮಾಲೀಕರು, ಏಜೆಂಟ್ ಸೇರಿದಂತೆ ಸಂಬಂಧಿತ ಎಲ್ಲರ ವಿರುದ್ಧವೂ ಕಾನೂನು ಕ್ರಮ ಜರುಗಿಸಿ ಕನಿಷ್ಠ ಏಳು ವರ್ಷ ಜೈಲು ಶಿಕ್ಷೆಗೆ ಗುರಿ ಪಡಿಸುವಂತೆ ಮಾಡಲಾಗುವುದು’ ಎಂದರು.ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷವು ಕಾರ್ಮಿಕರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದರೂ ಅವು ಜನ ಸಾಮಾನ್ಯರನ್ನು ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯೋಜನೆಗಳನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಿ ಜನರಿಗೆ ನೀಡುವುದು ಅಗತ್ಯವಾಗಿದೆ ಎಂದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕಿ ಮೋಟಮ್ಮ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್, ಶಾಸಕ ಎಂ.ವಿ.ರಾಜಶೇಖರನ್ ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.