ಭಾನುವಾರ, ಜೂನ್ 7, 2020
22 °C

ಹಜ್‌ಯಾತ್ರೆ ಪ್ರೋತ್ಸಾಹಿಸಿದ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಜ್‌ಯಾತ್ರೆ ಪ್ರೋತ್ಸಾಹಿಸಿದ ಸರ್ಕಾರ

ರಾಮನಗರ: ಹಜ್ ಯಾತ್ರೆಗೆ ತೆರಳುವ ಅಲ್ಪಸಂಖ್ಯಾತರಿಗೆ ಬಿಜೆಪಿ ಸರ್ಕಾರ  ಹೆಚ್ಚು ಹಣ ಬಿಡುಗಡೆ ಮಾಡಿ ಪ್ರೋತ್ಸಾಹಿಸುತ್ತಿದೆ ಎಂದು ಅಲ್ಪಸಂಖ್ಯಾತರ ಮೋರ್ಚಾದ ಅಧ್ಯಕ್ಷ ಡಾ.ಮೌಸೀನ್ ತಿಳಿಸಿದರು.

ನಗರದ ಕೃಷ್ಣ ಸ್ಮತಿ ಕಲ್ಯಾಣಮಂದಿರದಲ್ಲಿ ನಡೆದ ಅಲ್ಪಸಂಖ್ಯಾತರ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ಪಕ್ಷ 55 ವರ್ಷ ಆಡಳಿತ ನಡೆಸಿದೆ. ಅಲ್ಪಸಂಖ್ಯಾತರ ಸ್ಥಿತಿ ಸ್ವಾತಂತ್ರ್ಯದ ಸಂದರ್ಭದಲ್ಲಿ ಇದ್ದಂತೆಯೇ ಈಗಲೂ ಇದೆ. ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಯಾವುದೇ ಪರಿಣಾಮಕಾರಿ ಯೋಜನೆಗಳನ್ನು ರೂಪಿಸದಿರುವುದು ಈ ಪರಿಸ್ಥಿತಿಗೆ ಕಾರಣವಾಗಿದೆ. ಆದರೆ ಕರ್ನಾಟಕದಲ್ಲಿ ಮೂರೂವರೆ ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಹೆಚ್ಚು ಅನುದಾನ ಬಿಡುಗಡೆ ಮಾಡಿದೆ ಎಂದರು.

ಕೇಂದ್ರ ಸರ್ಕಾರದ ಬೇಜವಾಬ್ದಾರಿತನದಿಂದಾಗಿ ದೇಶದಲ್ಲಿ ಬಡತನ, ನಿರುದ್ಯೋಗ, ಭ್ರಷ್ಟಾಚಾರ ತಾಂಡವವಾಡುತ್ತಿವೆ. ಈ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುವವರ ವಿರುದ್ಧ ಷಡ್ಯಂತ್ರ ಎಣೆದು ಅವರನ್ನು ಧಮನ ಮಾಡುತ್ತಿದೆ. ಚುನಾವಣೆಗಳಲ್ಲಿ ಓಟು ಹಾಕಿಸಿಕೊಳ್ಳಲು ಮಾತ್ರ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರನ್ನು ಬಳಸಿಕೊಂಡಿದೆ. ಅಧಿಕಾರ ಪಡೆದ ನಂತರ ಅಲ್ಪಸಂಖ್ಯಾತರನ್ನು ಕಡೆಗಣಿಸಿದೆ ಎಂದು ದೂರಿದರು.

ದೇಶದ ಆಂತರಿಕ ಭದ್ರತೆಗೆ ಧಕ್ಕೆಯನ್ನುಂಟುಮಾಡಿದ ಭಯೋತ್ಪಾದನೆಯನ್ನು ಯಾವ ಧರ್ಮೀಯರು ಮಾಡಿದರು ಎಂಬುದು ಮುಖ್ಯವಲ್ಲ, ಅಂಥ ದುಷ್ಕೃತ್ಯ ಮಾಡಿದವರಿಗೆ ಶೀಘ್ರ ಶಿಕ್ಷೆ ವಿಧಿಸುವುದು ಮುಖ್ಯ. ದೇಶದ ಸಂಸತ್ ಭವನದ ಮೇಲೆ ಭಯೋತ್ಪಾದಕ ಕೃತ್ಯ ಎಸಗಿದ ಅಫ್ಜಲ್ ಗುರು, ಮುಂಬೈ ಮೇಲೆ ಆಕ್ರಮಣ ಮಾಡಿ ನೂರಾರು ಜನರ ಸಾವಿಗೆ ಕಾರಣನಾದ ಕಸಬ್ ಅವರನ್ನು ಕಾನೂನಿನ ಪ್ರಕಾರ ಗಲ್ಲು ಶಿಕ್ಷೆ ವಿಧಿಸಬೇಕು ಎಂದರು. 

ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಾಥರಾವ್ ಮಲ್ಕಾಪುರಿ ಮಾತನಾಡಿ ವಿದೇಶಗಳಲ್ಲಿರುವ ಕಪ್ಪು ಹಣವನ್ನು ವಾಪಸ್ಸು ತರಲು ಕೇಂದ್ರ ಸರ್ಕಾರ ವಿಫಲವಾಗಿದೆ. ಸಾಮಾನ್ಯ ಜನರಿಗೆ ತೊಂದರೆಯಾಗಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಿಲ್ಲ. ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಮಾಡುವವರನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಟೀಕಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿ ಜನಮನ್ನಣೆ ಗಳಿಸಿದ್ದರು. ಬಿಜೆಪಿಯ ರ್ಟ್ರೋಯ ನಾಯಕರ ಆದೇಶಕ್ಕೆ ಮಣಿದು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಅವರ ಮೇಲೆ ಮಾಡಿರುವ ಭೂ ಹಗರಣದ ಆರೋಪಗಳು ಸತ್ಯಕ್ಕೆ ದೂರವಾಗಿವೆ. ಅವರು ಈ ಪ್ರಕರಣಗಳಲ್ಲಿ ಸಂಪೂರ್ಣ ನಿರ್ದೋಯಾಗಿ ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದರು.

ರಾಜ್ಯ ಮೋರ್ಚಾದ ಕಾರ್ಯದರ್ಶಿ ಅಬ್ದುಲ್ ಹಕೀಂ, ಜಿಲ್ಲಾ ಉಪಾಧ್ಯಕ್ಷ ಪಿ.ನಾಗರಾಜು, ರಾ-ಚ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ನಾಗರಾಜು, ಬಿಜೆಪಿ ಮುಖಂಡರುಗಳಾದ ಕೆ. ಶೇಷಾದ್ರಿ, ಪದ್ಮನಾಭ, ನಗರಸಭಾ ಸದಸ್ಯ ಬಿ.ನಾಗೇಶ್ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.