ಶನಿವಾರ, ಮೇ 21, 2022
26 °C

ಹಲವು ಪ್ರಸ್ತಾವಕ್ಕೆ ಸಂಪುಟ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೇಂದ್ರ ಸರ್ಕಾರ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ `ಅಕ್ರಮ ಒಳನುಸುಳುವಿಕೆ ತಡೆ ಮತ್ತು ಭಯೋತ್ಪಾದನಾ ನಿಗ್ರಹ ತರಬೇತಿ ಶಾಲೆ~ಗೆ 408 ಎಕರೆ ಜಮೀನು ನೀಡುವುದೂ ಸೇರಿದಂತೆ ಹಲವು ಪ್ರಸ್ತಾವಗಳಿಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ.ಸಂಪುಟ ಸಭೆಯ ತೀರ್ಮಾನಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಪುಟದ ಪ್ರಮುಖ ನಿರ್ಣಯದ ವಿವರಗಳು ಹೀಗಿವೆ.*ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ಕೇಂದ್ರಗಳನ್ನು ಬೆಂಗಳೂರು ಮತ್ತು ಧಾರವಾಡದಲ್ಲಿ ಕ್ರಮವಾಗಿ ರೂ 40 ಕೋಟಿ ಹಾಗೂ ರೂ 36 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಸಂಪುಟ ಸಭೆಯ ಒಪ್ಪಿಗೆ*ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ವ್ಯಾಪ್ತಿಯ ಕಾಲೇಜು ಮತ್ತು ಆಸ್ಪತ್ರೆಗಳ ಅಭಿವೃದ್ಧಿ ಕಾಮಗಾರಿ ಮತ್ತು ಉಪಕರಣಗಳ ಖರೀದಿ ಸಲುವಾಗಿ ರೂ 15 ಕೋಟಿ ಮೊತ್ತದ ಅಂದಾಜು ವೆಚ್ಚಕ್ಕೆ ಆಡಳಿತಾತ್ಮಕ ಅನುಮೋದನೆ*ಪಾವಗಡ ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಫ್ಲೋರೈಡ್ ಬಾಧಿತ 26 ಗ್ರಾಮಗಳಿಗೆ `ಸಚೇತನ~ ಯೋಜನೆಯಡಿ ನೈಸರ್ಗಿಕ ವಿಧಾನದಲ್ಲಿ ಶಾಶ್ವತ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಕಲ್ಪಿಸುವ ರೂ 11 ಕೋಟಿ ಅಂದಾಜು ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ*ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಎರಡು ವರ್ಷ ಅವಧಿಯ ಡಿಪ್ಲೊಮಾ ಮತ್ತು ಆರು ತಿಂಗಳ ಅವಧಿಯ ಸರ್ಟಿಫಿಕೇಟ್ ಕೋರ್ಸ್ ಆರಂಭಿಸಲು ಒಪ್ಪಿಗೆ*ಜಾಗತಿಕ ಕೃಷಿ ಬಂಡವಾಳ ಹೂಡಿಕೆ ಸಮಾವೇಶದ ಸಿದ್ಧತೆಗಳಿಗೆ ವೇಗ ತುಂಬಲು ಕೃಷಿ ಸಚಿವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಅಧಿಕಾರಯುಕ್ತ ಸಮಿತಿ ರಚನೆಗೆ ತೀರ್ಮಾನ*ರಾಜ್ಯ ಮೂರನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ಪ್ರತಿ ಜಿಲ್ಲಾ ಪಂಚಾಯ್ತಿಗೆ ಹೆಚ್ಚುವರಿಯಾಗಿ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ಒದಗಿಸಲು ಒಪ್ಪಿಗೆ*ಪುಷ್ಪ ಉದ್ಯಮಕ್ಕೆ ಪ್ರೋತ್ಸಾಹ ನೀಡಲು ಆರು ಕೋಟಿ ರೂಪಾಯಿ ಅನುದಾನ*ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಯು ರೂ 25 ಕೋಟಿ ಸಾಲ ಪಡೆಯಲು ಅನುಮತಿ*ಕರ್ನಾಟಕ ಬಾಲವಿಕಾಸ ಅಕಾಡೆಮಿಗೆ ಧಾರವಾಡದಲ್ಲಿ ಸ್ವಂತ ಕಟ್ಟಡ ನಿರ್ಮಿಸಲು ರೂ 5.33 ಕೋಟಿ ವೆಚ್ಚದ ಯೋಜನೆಗೆ ಅನುಮತಿ* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ 6.95 ಕೋಟಿ ವೆಚ್ಚದಲ್ಲಿ ವಾಲ್ಮೀಕಿ ಭವನ ನಿರ್ಮಿಸಲು ಅನುಮೋದನೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.