ಭಾನುವಾರ, ಏಪ್ರಿಲ್ 18, 2021
32 °C

ಹಾಸ್ಟೆಲ್‌ಗಳಲ್ಲೇ ಉಳಿಯಲು ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸ್ಟೆಲ್‌ಗಳಲ್ಲೇ ಉಳಿಯಲು ವ್ಯವಸ್ಥೆ

ಬೆಂಗಳೂರು: ನಗರದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳಿಗೆ ಆಯಾ ಕಾಲೇಜುಗಳ ವಿದ್ಯಾರ್ಥಿ ನಿಲಯಗಳಲ್ಲಿಯೇ ಉಳಿಯಲು ವ್ಯವಸ್ಥೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಶುಕ್ರವಾರ ಇಲ್ಲಿ ತಿಳಿಸಿದರು.ಈಶಾನ್ಯ ರಾಜ್ಯಗಳಿಗೆ ಸೇರಿದ 365 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸೇರಿದಂತೆ 2,000 ವಿದ್ಯಾರ್ಥಿಗಳು ನಗರದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದಲ್ಲದೆ, ಬೆಂಗಳೂರಿನಿಂದ ಹೊರಗೆ ರಾಜ್ಯದ ಬೇರೆ ಬೇರೆ ಕಾಲೇಜುಗಳಲ್ಲಿ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳು ಇದ್ದಾರೆ. ಅವರಿಗೆಲ್ಲ ಸೂಕ್ತ ಭದ್ರತೆ ಕಲ್ಪಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಭಯದ ವಾತಾವರಣದಿಂದ ಹೊರ ಬರಲು ಅನುವಾಗುವಂತೆ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಹಾಸ್ಟೆಲ್‌ನಲ್ಲಿ ಉಳಿಯಲು ವ್ಯವಸ್ಥೆ ಮಾಡುವಂತೆ ಸಂಬಂಧಪಟ್ಟ ಕಾಲೇಜುಗಳ ಆಡಳಿತ ಮಂಡಳಿಗೆ ಸೂಚಿಸಲಾಗಿದೆ.ಅಲ್ಲದೆ ವಿದ್ಯಾರ್ಥಿಗಳ ಪೋಷಕರೊಂದಿಗೂ ಮಾತನಾಡಿ, ಅವರ ಸುರಕ್ಷತೆ ಬಗ್ಗೆ ಮನವರಿಕೆ ಮಾಡಿಕೊಡುವಂತೆ ಸೂಚಿಸಲಾಗಿದೆ ಎಂದರು.ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ 12 ವಿದ್ಯಾರ್ಥಿಗಳು ಅಸ್ಸಾಂಗೆ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ಇದೆ. ಉಳಿದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಷ್ಟು ವಿದ್ಯಾರ್ಥಿಗಳು ನಿರ್ಗಮಿಸಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಕೆಲವರು ವಾಪಸ್ ಹೋಗಿದ್ದಾರೆ. ಅವರ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಮಾಡಲಾಗುವುದುಎಂದು ಭರವಸೆ ನೀಡಿದರು.ವಾಪಸ್ ಹೋಗಿರುವ ವಿದ್ಯಾರ್ಥಿಗಳು 15 ದಿನಗಳ ನಂತರ ಹಿಂತಿರುಗುವ ನಿರೀಕ್ಷೆ ಇದೆ. ಅಲ್ಲಿಯವರೆಗೆ ಆಂತರಿಕ ಪರೀಕ್ಷೆಗಳನ್ನು ಮುಂದೂಡುವ ಅಥವಾ ಹಿಂತಿರುಗಿದ ನಂತರ ಅವರಿಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಹಾಯವಾಣಿ ಆರಂಭಿಸಲಾಗುವುದು ಎಂದರು.ನಗರದಲ್ಲಿರುವ ಈಶಾನ್ಯ ರಾಜ್ಯಗಳ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ಆ ರಾಜ್ಯಗಳಲ್ಲಿನ ಪ್ರಾದೇಶಿಕ ವಾಹಿನಿಗಳಲ್ಲಿ ಸುದ್ದಿ ಬಿತ್ತರಿಸಲು ಕ್ರಮ ಕೈಗೊಳ್ಳಲಾಗಿದೆ. ಕಾಲೇಜುಗಳಲ್ಲಿ ಯಾವುದೇ ತೊಂದರೆ ಇಲ್ಲ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳೇ ನೀಡಿದ್ದಾರೆ ಎಂದು ಆಡಳಿತ ಮಂಡಳಿಗಳು ತಿಳಿಸಿವೆ. ಎರಡು ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಟೊರಿಕ್ಷಾ ಚಾಲಕರು ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ ಎಂದು ಅವರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.