ಮಂಗಳವಾರ, ಮೇ 17, 2022
26 °C

ಹಾಸ್ಟೆಲ್ ಅವ್ಯವಸ್ಥೆ: ಜಿ.ಪಂ. ಅಧ್ಯಕ್ಷ ಗರಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸದುರ್ಗ: ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ  ವಿವಿಧ ಸಂಸ್ಥೆಗಳ ಅಧೀನದಲ್ಲಿ ಜಿಲ್ಲೆಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿ ನಿಲಯಗಳು ಅವ್ಯವಸ್ಥೆಯಿಂದ ಕೂಡಿವೆ ಎಂದು ಜಿ.ಪಂ. ಅಧ್ಯಕ್ಷ ಸಿ. ಮಹಾಲಿಂಗಪ್ಪ ಅಸಮಾಧಾನ ವ್ಯಕ್ತಪಡಿಸಿದರು.ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಪಟ್ಟಣದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಗುರುವಾರ ಭೇಟಿ  ನೀಡಿದ್ದ ಅವರು ಅಲ್ಲಿನ ವ್ಯವಸ್ಥೆಯನ್ನು ಖುದ್ದು ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಪರಿಶಿಷ್ಟ ಜಾತಿ, ವರ್ಗ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಸರ್ಕಾರ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಿ ಅಗತ್ಯ ಅನುದಾನ ಬಿಡುಗಡೆ ಮಾಡಿದರೂ ಅಧಿಕಾರಿಗಳು ಸರ್ಕಾರದ ಸವಲತ್ತುಗಳನ್ನು ತಲುಪಿಸಲು ವಿಫಲರಾಗಿದ್ದಾರೆ. ಜಿಲ್ಲೆಯಾದ್ಯಂತ ಇದೇ ಸಮಸ್ಯೆ ಇದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ನೀಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲು ಶಿಫಾರಸು  ಮಾಡಲಾಗುವುದು ಎಂದು ಹೇಳಿದರು.ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಕಾಲೇಜು ವಿದ್ಯಾರ್ಥಿಗಳು ಕಲಿಯುತ್ತಿರುವ ಪಟ್ಟಣದ ವಿದ್ಯಾರ್ಥಿ ನಿಲಯ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಸ್ವಚ್ಚತೆಯೂ ಸೇರಿದಂತೆ ವಿದ್ಯಾರ್ಥಿಗಳಿಗೆ ನೀಡುವ ಆಹಾರದ ಗುಣಮಟ್ಟವೂ ನಿರೀಕ್ಷಿತಮಟ್ಟದಲ್ಲಿ ಇಲ್ಲ. ಸಮಸ್ಯೆಗಳನ್ನು ವಿದ್ಯಾರ್ಥಿಗಳು ಚುನಾಯಿತ ಪ್ರತಿನಿಧಿಗಳ ಗಮನಕ್ಕೆ ತಂದು ಎಲ್ಲವನ್ನೂ ಸಹಿಸಿಕೊಂಡು ಹೋಗುತ್ತಿದ್ದರೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಪಡುತ್ತಿಲ್ಲ. ಮುಂದಿನ ದಿನಗಳಲ್ಲಿ ಇದೇ ಪರಿಸ್ಥಿತಿ ಮುಂದುವರಿದಲ್ಲಿ ಹಾಸ್ಟೆಲ್‌ಗೆ ಭೇಟಿ ನೀಡುವ ಯಾವುದೇ ಚುನಾಯಿತ ಪ್ರತಿನಿಧಿ ಅಥವಾ ಅಧಿಕಾರಿಗೆ ದಿಗ್ಭಂಧನ ಹಾಕುವುದು ವಿದ್ಯಾರ್ಥಿಗಳಿಗೆ ಅನಿವಾರ್ಯವಾಗುತ್ತದೆ ಎಂದರು.ಬಿಆರ್‌ಜಿಎಫ್ ಯೋಜನೆಯಡಿ ವಿದ್ಯಾರ್ಥಿ ನಿಲಯಗಳಿಗೆ ಪೂರೈಸಿರುವ ವಿವಿಧ ಪರಿಕರಗಳು ಕಳಪೆ ಗುಣಮಟ್ಟದ್ದಾಗಿವೆ. ಇದರ ಜತೆಗೆ,  ಯೋಜನೆಯಡಿ ಪೂರೈಕೆಯಾದ ಅಗತ್ಯ ಪರಿಕರಗಳನ್ನು ಯಾವುದೇ ಉಪಯೋಗಕ್ಕೆ ಬಾರದಂತೆ ಕೋಣೆಯಲ್ಲಿ ಹಾಕಿರುವುದ ನಮ್ಮ ವ್ಯವಸ್ಥೆಯ ದುಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.ವಿದ್ಯಾರ್ಥಿನಿಲಯದ ಸಮಸ್ಯೆ ಪರಿಹರಿಸುವಂತೆ ಇಲಾಖೆಯ ಅಧಿಕಾರಿಗಳು ಹಾಗೂ ವ್ಯವಸ್ಥಾಪಕರಿಗೆ ಮನವಿ ಮಾಡಿದರೆ ದೌರ್ಜನ್ಯದ  ಮಾತು ಆಡುತ್ತಾರೆ. ಪ್ರತಿಭಟನೆ ಮಾಡಲು ಮುಂದಾದರೆ ಬೆದರಿಕೆ ಹಾಕುತ್ತಾರೆ ಎಂದು ವಿದ್ಯಾರ್ಥಿಗಳು ಅಧ್ಯಕ್ಷರ ಮುಂದೆ ತಮ್ಮ ಅಳಲು ತೋಡಿಕೊಂಡರು.ಪಟ್ಟಣದ ವಿವಿಧ ವಿದ್ಯಾರ್ಥಿ ನಿಲಯಗಳು ಸೇರಿದಂತೆ ನಾಗೇನಹಳ್ಳಿ ಸಮೀಪದ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ ವಸತಿಶಾಲೆಗೆ ಭೇಟಿ ನೀಡಿದ್ದ ಜಿ.ಪಂ. ಅಧ್ಯಕ್ಷ ಅಲ್ಲಿನ ವ್ಯವಸ್ಥೆಯನ್ನು ಪರಿಶೀಲಿಸಿದರು.ಪರಿಶೀಲನೆ ಸಂದರ್ಭದಲ್ಲಿ ಜಿ.ಪಂ. ಸದಸ್ಯರಾದ ಡಿ. ಪರಶುರಾಮಪ್ಪ, ಎಂ. ಲಕ್ಷ್ಮಣ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.