ಭಾನುವಾರ, ಏಪ್ರಿಲ್ 18, 2021
24 °C

ಹುದ್ದೆಗಳಿಗೆ ಸ್ಥಳೀಯ ಮಟ್ಟದಲ್ಲಿ ನೇಮಕ: ವೈಜನಾಥ ಪಾಟೀಲ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಸಂವಿಧಾನದ 371ನೇ ಕಲಂ ತಿದ್ದುಪಡಿಯಾಗುತ್ತಿರುವ ಹಿನ್ನೆಲೆಯಲ್ಲಿ, ಸ್ಥಳೀಯ ಮಟ್ಟದಲ್ಲಿ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ ಒತ್ತಾಯಿಸಿದ್ದಾರೆ.

ಇಲ್ಲಿನ ಕನ್ನಡ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಮಿತಿಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರ ಮಾತನಾಡಿದರು. ಮುಂದಿನ ಕೆಲವು ದಿನಗಳಲ್ಲಿ 5,000 ಶಿಕ್ಷಕರು ಹಾಗೂ 8,000 ಪೊಲೀಸ್ ಪೇದೆ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ನಿಯಮಾವಳಿ ಪ್ರಕಾರ ನೇಮಕಾತಿ ನಡೆದರೆ ಹೈ-ಕ ವ್ಯಾಪ್ತಿಯ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ನಿರುದ್ಯೋಗಿಗಳು ನೇಮಕಾತಿಯಿಂದ ವಂಚಿತರಾಗುವ ಸಾಧ್ಯತೆಯಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

“ಕೇಂದ್ರ ಸರ್ಕಾರ ಕಲಂ ತಿದ್ದುಪಡಿ ಮಾಡುವ ಪ್ರಕ್ರಿಯೆಗೆ ಹಲವು ದಿನಗಳು ಬೇಕಾಗುತ್ತವೆ. ಹೀಗಾಗಿ ಶಿಕ್ಷಕರು ಹಾಗೂ ಪೇದೆ ನೇಮಕಾತಿಯನ್ನು ಸ್ಥಳೀಯ ಮಟ್ಟದಲ್ಲಿ ಮಾಡಿದರೆ ಈ ಭಾಗಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ” ಎಂದು ವೈಜನಾಥ ಪಾಟೀಲ ಹೇಳಿದರು.

ಖಂಡನೆ: ವಿಜಾಪುರ ಜಿಲ್ಲೆಯನ್ನು 371ನೇ ಕಲಂ ವ್ಯಾಪ್ತಿಯಡಿ ಸೇರಿಸಲು ಕೇಂದ್ರದ ಮೇಲೆ ಒತ್ತಡ ಹಾಕುವುದಾಗಿ ಹೇಳಿರುವ ಮುಖ್ಯಮಂತ್ರಿಗಳ ಹೇಳಿಕೆ ಖಂಡನೀಯ ಎಂದೂ ಅವರು ನುಡಿದರು.

ಶಿವರಾಮ ಮೋಘಾ ಅಧ್ಯಕ್ಷತೆ ವಹಿಸಿದ್ದರು. ಸ್ವಾತಂತ್ರ್ಯಯೋಧ ವಿದ್ಯಾಧರ ಗುರೂಜಿ, ಸಮಿತಿಯ ಗುಲ್ಬರ್ಗ ಜಿಲ್ಲಾಧ್ಯಕ್ಷ ಚಂದ್ರಶೇಖರ ಹರಸೂರ, ಯಾದಗಿರಿ ಜಿಲ್ಲಾಧ್ಯಕ್ಷ ಸುರೇಶ ಸಜ್ಜನ, `ಕಾಡಾ~ ಅಧ್ಯಕ್ಷ ಗಿರೀಶ ಮಟ್ಟೆಣ್ಣವರ್, ಎಚ್‌ಕೆಸಿಸಿಐ ಅಧ್ಯಕ್ಷ ಉಮಾಕಾಂತ ನಿಗ್ಗುಡಗಿ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಜಿಲ್ಲೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.