ಬುಧವಾರ, ಮೇ 18, 2022
28 °C

ಹೊಂದಾಣಿಕೆ ಕೊರತೆಯಿಂದ ಸಂಘರ್ಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸ್ತುತ ಹಣಗಳಿಕೆಯೇ ಪ್ರಧಾನವಾಗಿದ್ದು, ಹುಣ್ಣಿಮೆ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಆಗಮಿಸುವ ಮೂಲಕ ಆಧ್ಯಾತ್ಮಿಕ ವಿಚಾರಗಳ ಕಡೆಗೂ ಗಮನ ಹರಿಸುತ್ತಾರೆ ಎಂಬುದನ್ನು ಸಾಬೀತು ಪಡಿಸಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. ಬೆಂಗಳೂರಿನ ಅರಮನೆ ಆವರಣದಲ್ಲಿ ಹಮ್ಮಿಕೊಂಡಿರುವ ತರಳಬಾಳು ಹುಣ್ಣಿಮೆ ಮಹೋತ್ಸವದ ಎಂಟನೇ ದಿನವಾದ ಗುರುವಾರದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ಗುರು ಪರಂಪರೆಯನ್ನು ಇನ್ನಷ್ಟು ಶಕ್ತಿಶಾಲಿಯಾಗಿ ಬೆಳೆಸಬೇಕು. ಈ ದಿಸೆಯಲ್ಲಿ ರಾಜ್ಯ ಸರ್ಕಾರ ಧಾರ್ಮಿಕ, ಸಾಂಸ್ಕತಿಕ ಕಾರ್ಯಗಳಿಗೆ ಬೆಂಬಲ ವ್ಯಕ್ತಪಡಿಸುತ್ತಾ ಬರುತ್ತಿದೆ. ಸಿರಿಗೆರೆ ಮಠದಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಂಸ್ಥೆಗಳನ್ನು ಶ್ರೀಗಳು ಗ್ರಾಮೀಣಪ್ರದೇಶಗಳಲ್ಲಿ ಸ್ಥಾಪಿಸಿರುವುದು ಅಭಿನಂದನೀಯ ಎಂದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಮಾತನಾಡಿ, ಸಮಾಜದಲ್ಲಿ ಹೊಂದಾಣಿಕೆ ಕೊರತೆಯಿಂದ ಜಾತಿ ಸಂಘರ್ಷ ಹೆಚ್ಚಾಗುತ್ತಿದೆ. ಇದಕ್ಕೆ ಮನುಷ್ಯನಲ್ಲಿ ಮಾನವೀಯ ಗುಣಗಳು ಮಾಯವಾಗಿರುವುದೇ ಕಾರಣ ಎಂದು ಹೇಳಿದರು. ಇಂತಹ ಸಂಕೀರ್ಣ ವ್ಯವಸ್ಥೆಯನ್ನು ರಾಜಕಾರಣ ಅಥವಾ ವ್ಯಕ್ತಿಯಿಂದ ಬದಲಾಯಿಸಲು ಸಾಧ್ಯವಿಲ್ಲ. ಆದರೆ, ಧರ್ಮ ಗುರುಗಳಿಂದ ಈ ಕಾರ್ಯ ಸಾಧ್ಯ. ಈ ನಿಟ್ಟಿನಲ್ಲಿ ಸಿರಿಗೆರೆ ಮಠ ತರಳಬಾಳು ಹುಣ್ಣಿಮೆ ಕಾರ್ಯಕ್ರಮದ ಮೂಲಕ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಲೇಖಕ ಚಕ್ರವರ್ತಿ ಸೂಲಿಬೆಲೆ ಮಾತನಾಡಿದರು.ದಕ್ಷಿಣ ಭಾರತದ ಚರ್ಚುಗಳ ಮುಖ್ಯಸ್ಥ ಆರ್ಚ್‌ಬಿಷಪ್ ವಸಂತ್‌ಕುಮಾರ್, ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ಎಸ್.ಕೆ. ಬಸವರಾಜನ್, ಎಂ. ಚಂದ್ರಪ್ಪ, ನಂದಿ ಇನ್‌ಫ್ರಾಸ್ಟ್ರಕ್ಚರ್ (ನೈಸ್) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಖೇಣಿ, ಸಾಗರದ ಸಿಗಂದೂರೇಶ್ವರಿ ಶಿಕ್ಷಣ ಸಂಸ್ಥೆ ನಿರ್ದೇಶಕಿ ಸುಧಾ ಬರಗೂರು ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.