‘ಖಾತ್ರಿ’ ಹಿನ್ನಡೆ: ಕಾರ್ಯದರ್ಶಿ ಅಸಮಾಧಾನ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ನಾಗಲಾಂಬಿಕಾದೇವಿ ಅಸಮಧಾನ ವ್ಯಕ್ತಪಡಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಗೆ ಸಂಬಂಧಿಸಿದಂತೆ ಅಗತ್ ಕೆಲಸಗಳು ನಡೆದಿಲ್ಲ. ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಗೆ ಅಧಿಕಾರಿಗಳು ಒತ್ತು ನೀಡುತ್ತಿಲ್ಲ. ಮುಂದಿನ ದಿನಗಳಲ್ಲಿ ಅಧಿಕಾರಿಗಳು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಗಮನಹರಿಸಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆದ ಅವರು ಹತ್ತನೇ ತರಗತಿಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ನಮ್ಮ ಜಿಲ್ಲೆಯ ಸ್ಥಾನವು 33ರಿಂದ 30ಕ್ಕೆ ಬಂದಿದೆ. ಫಲಿತಾಂಶ ಸುಧಾರಣೆಗೆ ಶಿಕ್ಷಕರು ಇನ್ನಷ್ಟು ಶ್ರಮ ಹಾಕಬೇಕು ಎಂದರು.
ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾ ಕೇಂದ್ರಕ್ಕೆ ಮಾತ್ರವೇ ಸೀಮಿತಗೊಳ್ಳದೆ ತಾಲ್ಲೂಕು ಕೇಂದ್ರಗಳಿಗೂ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳನ್ನು ಅರಿಯಬೇಕು. ಸಮಯ ಮೀರಿದ ಔಷಧಿಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ವಿ.ರಂಗಸ್ವಾಮಿ ಅವರಿಗೆ ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಸತ್ಯಭಾಮ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನೀಲಾ ಮಂಜುನಾಥ್ ಇತರರು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.