‘ಜನಪರ ಬಜೆಟ್ ಮಂಡಿಸಲು ಸಿದ್ಧತೆ’

ಬೆಂಗಳೂರು: ಈ ಬಾರಿ ಜನಪರ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡುವ ಬಜೆಟ್ ಮಂಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಜಿಮುಖ್ಯಮಂತ್ರಿ ದಿವಂಗತ ಕೆಂಗಲ್ ಹನುಮಂತಯ್ಯ ಅವರ 106ನೇ ಜನ್ಮದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಕೆಂಗಲ್ ಹನುಮಂತಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ದಲಿತ ಮುಖಂಡರ ಜತೆ ಬಜೆಟ್ ಪೂರ್ವಭಾವಿ ಸಭೆ ನಡೆಸದ ಕುರಿತು ಪ್ರತಿಕ್ರಿಯಿಸಿದ ಅವರು, ‘ಕೆಲಸದ ಒತ್ತಡಗಳಿಂದ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರಿಗೆ ದಲಿತ ಮುಖಂಡರ ಜತೆ ಸಭೆ ನಡೆಸುವಂತೆ ಸೂಚಿಸಿದ್ದೆ. ಸಭೆ ನಡೆಸಿದ ಆಂಜನೇಯ ಅವರಿಂದ ಎಲ್ಲ ಮಾಹಿತಿ ಪಡೆಯಲಾಗಿದೆ’ ಎಂದು ತಿಳಿಸಿದರು.
‘ಹಿರಿಯ ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪು ಅಲ್ಲ. ಅದು ಅವರ ಹಕ್ಕು. ಇದನ್ನು ಭಿನ್ನಮತೀಯ ಚಟುವಟಿಕೆ ಎಂದು ಪರಿಗಣಿಸುವಂತಿಲ್ಲ.
ಶಾಸಕರಾದವರು ಸಚಿವರಾಗಬೇಕು ಎಂದು ಆಸೆಪಡುವುದು ತಪ್ಪಲ್ಲ. ಎಲ್ಲರಿಗೂ ಅವರ ಭಾವನೆಗಳನ್ನು ವ್ಯಕ್ತಪಡಿಸುವ ಹಕ್ಕಿದೆ. ಆದರೆ, ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಶಾಸಕರ ಬೇಡಿಕೆಗಳನ್ನು ಹೈಕಮಾಂಡ್ಗೆ ತಿಳಿಸುತ್ತೇನೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.