ಮಂಗಳವಾರ, ಜೂನ್ 15, 2021
23 °C
ಸುಣ್ಣಾರಿ–ಸರ್ಕಾರಿ ಇಲಾಖೆಗಳ ಸವಲತ್ತು ವಿತರಣೆ

‘ಜನರಿಗೆ ಸ್ಪಂದಿಸಲು ಸರ್ಕಾರ ಬದ್ಧ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಂದಾಪುರ: ಸರ್ಕಾರಿ ಕಚೇರಿಗಳಲ್ಲಿ ಕುಳಿತು ಕೆಲಸ ನಿರ್ವಹಿಸುವುದರಿಂದ ಜನರ ಸಮಸ್ಯೆಗಳಿಗೆ ಸಂಪೂರ್ಣವಾಗಿ ಸ್ಪಂದಿಸಲು ಸಾಧ್ಯವಾಗುವುದಿಲ್ಲ ಎನ್ನುವ ಚಿಂತನೆಯಲ್ಲಿ ಅಧಿಕಾರಿಗಳು ಗ್ರಾಮ ಮಟ್ಟಕ್ಕೆ ತೆರಳಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸರ್ಕಾರದಿಂದ ದೊರಕಬೇಕಾದ ಸವಲತ್ತುಗಳನ್ನು ನೀಡಲು ತ್ವರಿತಗತಿಯ ಕ್ರಮ ಕೈಗೊಳ್ಳಲು ಅನೂಕೂಲವಾ­ಗುವಂತೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸರ್ಕಾರಿ ಸವಲತ್ತು ವಿತರಣಾ ಕಾರ್ಯಕ್ರಮಗಳನ್ನು ಸಂಯೋಜಿ­ಸಲಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ ಸೊರಕೆ ಹೇಳಿದರು.ಶುಕ್ರವಾರ ಇಲ್ಲಿಗೆ ಸಮೀಪದ ಹೊಂಬಾಡಿ–ಮಂಡಾಡಿ ಗ್ರಾ.ಪಂ. ವ್ಯಾಪ್ತಿಯ ಸುಣ್ಣಾರಿಯ ವೆಂಕಟೇಶ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಹೊಂಬಾಡಿ–-ಮಂಡಾಡಿ, ಮೊಳಹಳ್ಳಿ, ಹಾರ್ದಳ–್ಳಿ-ಮಂಡಳ್ಳಿ, ಕಾಳಾವರ, ಬೇಳೂರು, ಕೆದೂರು, ಬಸ್ರೂರು, ಬಳ್ಕೂರು, ಕೋಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.ಮುಂಬರುವ ಬೇಸಿಗೆ ದಿನಗಳಲ್ಲಿ ರಾಜ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡಬಾರದು ಎನ್ನುವ ದಿಸೆಯಲ್ಲಿ ಸರ್ಕಾರ ಗಮನಾರ್ಹ ಚಿಂತನೆ ನಡೆಸಿದೆ. ಎಲ್ಲಿ ನೀರಿನ ಸಮಸ್ಯೆಗಳಿದೆ ಎನ್ನುವ ಕುರಿತು ಪರಿಶೀಲನೆ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳುವ ಕುರಿತು ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.ಗ್ರಾ.ಪಂ.ಅಧ್ಯಕ್ಷೆ ಶಾಂತಾ ಎ.ಎನ್‌ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯರಾದ ಸದಾನಂದ ಶೆಟ್ಟಿ ಕೆದೂರು, ದೀಪಕ್ ಕುಮಾರ್ ಶೆಟ್ಟಿ ಕಾಳಾವರ, ಕಾಳಾವರ ಗ್ರಾ.ಪಂ. ಅಧ್ಯಕ್ಷ ಸತೀಶ್ ಪೂಜಾರಿ, ಶಾಂತಿಕುಮಾರ್ ಹೆಗಡೆ, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ  ಎಸ್‌.ದಿನಕರ ಶೆಟ್ಟಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಡಾಲ್ಪಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.ಕುಂದಾಪುರ ತಹಶೀಲ್ದಾರ್ ಗಾಯತ್ರಿ ನಾಯಕ್ ಸ್ವಾಗತಿಸಿದರು, ಅಕ್ಷರ ದಾಸೋಹ ಯೋಜನೆಯ ತಾಲ್ಲೂಕು ಅಧಿಕಾರಿ ಕೆದೂರು ಸೀತಾರಾಮ ಶೆಟ್ಟಿ ನಿರೂಪಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.