ಸೋಮವಾರ, ಜೂನ್ 21, 2021
23 °C

‘ಪರಿಸರ ನಿಯಂತ್ರಣ ಆಂದೋಲನವಾಗಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ಪರಿಸರ ಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಜಾಗೃತರಾಗಬೇಕು. ಪರಿಸರ ಮಾಲಿನ್ಯ ನಿಯಂತ್ರಣವು ಸಾಮಾಜಿಕ ಆಂದೋಲನವಾಗಿ ಹೊರಹೊಮ್ಮಬೇಕು’ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಡಾ. ವಾಮನ್‌ ಆಚಾರ್ಯ ಅಭಿಪ್ರಾಯಪಟ್ಟರು.ಡಾ. ಎಂ.ಎಸ್‌.ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಆಶ್ರಯದಲ್ಲಿ ಇಲ್ಲಿನ ನೆಹರೂ ನಗರದ ಎಂಜಿನಿಯರ್‍ಸ್‌ ಸಭಾಭವನದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ತ್ಯಾಜ್ಯ ನಿರ್ವಹಣೆ ಮತ್ತು ಮಾಲಿನ್ಯ ನಿಯಂತ್ರಣ ಎಂಬ ವಿಷಯ ಕುರಿತು ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಅವರು ಮಾತನಾಡಿದರು.‘ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಕೈಗಾರಿಕೀಕರಣ ಬೆಳೆದಿಲ್ಲ. ಈ ನಿಟ್ಟಿನಲ್ಲಿ ಜನರಿಗೆ ಹೆಚ್ಚಿನ ತಿಳಿವಳಿಕೆ ನೀಡಬೇಕು. ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವ ಮೂಲಕ ಪ್ರತಿಯೊಬ್ಬರು ಮಾಲಿನ್ಯಮುಕ್ತ ಪರಿಸರ ನಿರ್ಮಿಸಲು ಶ್ರಮಿಸಬೇಕು. ಈ ದಿಸೆಯಲ್ಲಿ ಮಂಡಳಿಯೊಂದಿಗೆ ಸ್ವಯಂ ಸೇವಾ ಸಂಸ್ಥೆಗಳು ಕೈಜೋಡಿಸಬೇಕು’ ಎಂದರು.‘ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 220 ಸ್ಥಳೀಯ ಆಡಳಿತ ಸಂಸ್ಥೆಗಳು ಹಾಗೂ 9 ಮಹಾನಗರ ಪಾಲಿಕೆಗಳಲ್ಲಿ ಒಂದೇ ಒಂದೂ ಕಲುಷಿತ ನೀರು ನಿರ್ವಹಣಾ ಘಟಕಗಳಿಲ್ಲ. ಇದರಿಂದಾಗಿ ನೀರಿನ ಮೂಲಗಳಾದ ನದಿ, ಬಾವಿ ಹಾಗೂ ಕೊಳವೆಬಾವಿಗಳು ಕಲುಷಿತಗೊಳ್ಳುತ್ತಿದ್ದು, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆಡಳಿತ ಸಂಸ್ಥೆಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು’ ಎಂದು ತಿಳಿಸಿದರು.‘ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದ್ದು, ಕಡ್ಡಾಯವಾಗಿ ಇದನ್ನು ಪಾಲಿಸಬೇಕು. ಪ್ರತಿಯೊಬ್ಬರು ತಮ್ಮ ಸುತ್ತಲಿನ ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಕ್ಕೆ 1ರಂತೆ ತಮ್ಮ ಜೀವಮಾನದಲ್ಲಿ ಕನಿಷ್ಠ 15 ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಬೇಕು. ಈ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಶ್ರಮಿಸಬೇಕು’ ಎಂದರು.‘ಮೀತಿಮೀರಿದ ವಾಹನಗಳ ಬಳಕೆಯಿಂದ ವಾತಾವರಣ ಕಲ್ಮಶವಾಗುತ್ತಿದೆ. ಪ್ರತಿ ಮಧ್ಯಮ ವರ್ಗದ ಕುಟುಂಬಗಳಲ್ಲಿ 3ರಿಂದ 4 ವಾಹನಗಳನ್ನು ಖರೀದಿಸಲಾಗುತ್ತಿದ್ದು, ಮಾಲಿನ್ಯ ಪ್ರಮಾಣವನ್ನು ನಿಯಂತ್ರಿಸುವುದು ಕಷ್ಟಸಾಧ್ಯವಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು 15 ವರ್ಷದ ಅವಧಿ ಮೀರಿದ ವಾಹನಗಳನ್ನು ಬಳಸಲು ನಿರ್ಬಂಧ ಹೇರಿದ್ದು, ಪ್ರತಿಯೊಬ್ಬರು ಕಡ್ಡಾಯವಾಗಿ ಇದನ್ನು ಪಾಲಿಸಬೇಕು’ ಎಂದು ತಿಳಿಸಿದರು.ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಸಂಸದ ಡಾ. ಪ್ರಭಾಕರ ಕೋರೆ ಉದ್ಘಾಟಿಸಿ, ‘ಹೆಚ್ಚುತ್ತಿರುವ ಪರಿಸರ ಮಾಲಿನ್ಯದಿಂದಾಗಿ ನದಿಗಳು, ಬಾವಿಗಳು ಹಾಗೂ ಕೊಳವೆಬಾವಿಗಳು ಮಲೀನವಾಗುತ್ತಿವೆ. ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಜನರಿಗೆ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರಿದರೆ ಮುಂದಿನ 50 ವರ್ಷಗಳಲ್ಲಿ ಜನರಿಗೆ ಕುಡಿಯುವ ನೀರಿನ ಭೀತಿ ಎದುರಾಗಲಿದೆ’ ಎಂದರು.‘ಬೆಳಗಾವಿಯ ಹಲವು ಪ್ರದೇಶಗಳಲ್ಲಿ ತ್ಯಾಜ್ಯ ನರ್ತನವಾಡುತ್ತಿದ್ದು, ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಕಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಮನ ಹರಿಸಬೇಕು. ತ್ಯಾಜ್ಯ ವಿಲೇವಾರಿಗೆ ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ಆರೋಗ್ಯಕರ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಸಲಹೆ ನೀಡಿದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡೀನ್‌ ಡಾ. ಡಿ.ಎಚ್‌.ರಾವ್‌ ಮಾತನಾಡಿ. ‘ಆಧುನಿಕ ಜೀವನಶೈಲಿಯು ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಅನವಶ್ಯಕವಾಗಿ ಮೊಬೈಲ್‌, ಟಿ.ವಿ, ಕಂಪ್ಯೂಟರ್ ಸೇರಿದಂತೆ ವಿದ್ಯುತ್‌ ಉಪಕರಣಗಳನ್ನು ಬಳಕೆ ಮಾಡುತ್ತಿರುವದರಿಂದ ಯುವಕರು ಬಾಲ್ಯದಲ್ಲೇ ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇ–ತ್ಯಾಜ್ಯದಿಂದ (ಇ–ವೇಸ್ಟ್‌) ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕು. ಪ್ರತಿಯೊಬ್ಬರು ಆರೋಗ್ಯಕರ ಹವ್ಯಾಸಗಳನ್ನು ಮೈಗೂಡಿಸಿಕೊಳ್ಳುವ ಮೂಲಕ ಜೀವನಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.ಡಾ. ಎಂ.ಎಸ್‌. ಶೇಷಗಿರಿ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ. ಶರಣಬಸವ ಪಿಳ್ಳಿ, ಡಾ. ಎಸ್‌.ವಿ.ಈಟಿ, ಸಿ.ಬಿ.ಹಿರೇಮಠ, ಬಿ.ಡಿ.ಜಾಧವ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.