ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

14ರಂದು ಅವಳಿ ಜಿಲ್ಲೆ ಬಂದ್‌ಗೆ ಕರೆ

Last Updated 9 ಫೆಬ್ರುವರಿ 2011, 9:25 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಹೋರಾಟದ ಪ್ರಥಮ ಹಂತವಾಗಿ ಫೆ.14ರಂದು ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಬಂದ್ ಆಚರಿಸುವಂತೆ ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಮಂಗಳವಾರ ಕರೆ ನೀಡಿತು.ಫೆ.14ರಂದು ಬಂದ್ ನಡೆಸುವ ಜೊತೆಯಲ್ಲೇ ಈ ಎರಡೂ ಜಿಲ್ಲೆಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರತಿಭಟನೆಗಳನ್ನು ನಿರಂತರವಾಗಿ ನಡೆಸಲು ಮತ್ತು ಫೆ.24ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲು ಸಭೆ ತೀರ್ಮಾನಿಸಿತು.

ನಗರದ ಒಕ್ಕಲಿಗರ ಭವನದಲ್ಲಿ ಮಂಗಳವಾರ ನಡೆದ ಶಾಶ್ವತ ನೀರಾವರಿ ಹೋರಾಟ ಸಮಿತಿ ಮತ್ತು ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳ ಸಭೆಯಲ್ಲಿ ಬಂದ್ ಆಚರಿಸುವ ಮತ್ತು ನಿರಂತರ ಪ್ರತಿಭಟನೆ ನಡೆಸುವ ಬಗ್ಗೆ ಒಮ್ಮತ ವ್ಯಕ್ತವಾಯಿತು. ಜಿಲ್ಲೆಯ ಶಾಸಕರು ಮತ್ತು ವಿವಿಧ ಸಂಘಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದ ಈ ಸಭೆಯಲ್ಲಿ ನೀರಿಗಾಗಿ ಚಳವಳಿಯನ್ನು ತೀವ್ರಗೊಳಿಸಲು ನಿರಂತರ ಒತ್ತಡ ಹೇರಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ.ಪಿ.ಬಚ್ಚೇಗೌಡ ಮಾತನಾಡಿ, ‘ಹತ್ತಾರು ವರ್ಷಗಳಿಂದ ಸಭೆ-ಪ್ರತಿಭಟನೆಗಳನ್ನು ನಡೆಸಲಾಗುತ್ತಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಬಂದ್ ಆಗಬೇಕಿತ್ತು.ಆದರೆ ನೀರಾವರಿ ತಜ್ಞ ಡಾ. ಪರಮಶಿವಯ್ಯ ಅವರ ಮನವಿ ಮತ್ತು ಸರ್ಕಾರ ಮೇಲೆ ಭರವಸೆಯಿಟ್ಟ ಕಾರಣ ಪ್ರತಿಭಟನೆ-ಬಂದ್ ಹಿಂಪಡೆಯಲಾಯಿತು. ಆದರೆ ಮುಂದಿನ ದಿನಗಳಲ್ಲಿ ಸರ್ಕಾರ ಮೇಲೆ ತೀವ್ರ ಒತ್ತಡ ಹೇರಲಾಗುವುದು. ಫೆ.14ರಂದು ಬಂದ್ ಆಚರಿಸುವ ಮೂಲಕ ಚಳವಳಿಗೆ ಚಾಲನೆ ನೀಡಲಾಗುವುದು’ ಎಂದರು.

ಪಶ್ಚಿಮ ಘಟ್ಟದಿಂದ ಸಮುದ್ರಕ್ಕೆ ವ್ಯರ್ಥವಾಗಿ ಹರಿದು ಹೋಗುತ್ತಿರುವ ನೇತ್ರಾವತಿ ನದಿ ನೀರನ್ನು ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ ಹರಿಸಬಹುದು ಎಂದು ನೀರಾವರಿ ತಜ್ಞ ಡಾ. ಪರಮಶಿವಯ್ಯ ಅವರು ಸಲ್ಲಿಸಿರುವ ವರದಿಯನ್ನು ಆಧರಿಸಿ ಹೈದರಾಬಾದನ ಸಂಸ್ಥೆಯೊಂದು ಉಪಗ್ರಹದ ನೆರವಿನಿಂದ ಸಮೀಕ್ಷೆ ನಡೆಸಿ ವರದಿಯನ್ನು ಸಿದ್ಧಪಡಿಸಿದೆ.ವರದಿ ಸಿದ್ಧಪಡಿಸುವಿಕೆಗೆ ಸುಮಾರು 8 ಕೋಟಿ ರೂಪಾಯಿ ವೆಚ್ಚವಾಗಿದ್ದು, ವೆಚ್ಚದ ಹಣವನ್ನು ಪಾವತಿಸಿ ವರದಿಯನ್ನು ತರಿಸಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ.ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಡಾ. ಪರಮಶಿವಯ್ಯ ಅವರೊಂದಿಗೆ ಚರ್ಚಿಸುತ್ತಿಲ್ಲ’ ಎಂದು ಅವರು ಆರೋಪಿಸಿದರು.

ನೀರಾವರಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಹಚ್ಚಿನ ಗಮನವನ್ನು ಹರಿಸಿ, ಅನುದಾನ ಬಿಡುಗಡೆ ಮಾಡಿದಲ್ಲಿ ನೀರಾವರಿ ಸಮಸ್ಯೆ ಬಗೆಹರಿಯುತ್ತದೆ. ಪಶ್ಚಿಮ ಘಟ್ಟದಿಂದ ನೀರು ಪಡೆದುಕೊಳ್ಳಲು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮತ್ತು ಪಶ್ಚಿಮ ಘಟ್ಟದ ನಿವಾಸಿಗಳ ವಿರೋಧವಿಲ್ಲ. ಹೀಗಿದ್ದರೂ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ನೀರಾವರಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಯಾಕೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅವರು ಆರೋಪಿಸಿದರು. ಶಾಸಕ ಎನ್. ಸಂಪಂಗಿ ಮಾತನಾಡಿ, ‘ನೀರಾವರಿ ಯೋಜನಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲೆಯ ಐವರು ಶಾಸಕರು ವಿಧಾನಸಭೆ ಅಧಿವೇಶನಗಳಲ್ಲಿ ನಿರಂತರವಾಗಿ ಪ್ರಶ್ನೆಗಳನ್ನು ಕೇಳಿದ್ದೇವೆ. ಸರ್ಕಾರದ ಮೇಲೆ ಒತ್ತಡ ಹೇರಿದ್ದೇವೆ. ಮುಖ್ಯಮಂತ್ರಿಯವರಿಗೆ ಹಲವು ಬಾರಿ ಒತ್ತಾಯಿಸಿದ್ದೇವೆ’ ಎಂದರು.

ಶಾಸಕ ವಿ.ಮುನಿಯಪ್ಪ, ಮಾಜಿ ಶಾಸಕರಾದ ಅಶ್ವತ್ಥ್‌ನಾರಾಯಣ ರೆಡ್ಡಿ, ಎಂ.ಶಿವಾನಂದ, ಎಸ್.ಎಂ.ಮುನಿಯಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಎನ್.ಕೇಶವರೆಡ್ಡಿ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಜಣ್ಣ, ಜಿಲ್ಲಾ ಆಟೊರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ಡಾಂಬೂ ಶ್ರೀನಿವಾಸ್, ದೊಡ್ಡಮರಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಳವನಹಳ್ಳಿ ಮುನಿರಾಜು, ಕರ್ನಾಟಕ ಹಾಲು ಮಹಾಮಂಡಳಿ ನಿರ್ದೇಶಕ ಕೆ.ವಿ.ನಾಗರಾಜ, ಸಿಪಿಎಂ ಮುಖಂಡ ಲಕ್ಷ್ಮಯ್ಯ, ಜೆಡಿಎಸ್ ಮುಖಂಡರಾದ ಕೆ.ಆರ್.ರೆಡ್ಡಿ, ಪಿ.ಶ್ರೀನಿವಾಸ್, ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಬಿ.ಎನ್.ಮುನಿಕೃಷ್ಣಪ್ಪ, ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯ ಆಂಜನೇಯರೆಡ್ಡಿ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಇತರ ಕನ್ನಡಪರ ಸಂಘಟನೆಗಳ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT