ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3 ಬಾರಿ ಅಪಘಾತ ಮಾಡಿದರೆ ಡಿಎಲ್ ರದ್ದು

Last Updated 7 ಜನವರಿ 2012, 19:45 IST
ಅಕ್ಷರ ಗಾತ್ರ

ಬೆಂಗಳೂರು: `ಮೂರಕ್ಕಿಂತ ಹೆಚ್ಚು ಬಾರಿ ಅಪಘಾತ ಮಾಡುವ ವಾಹನ ಚಾಲಕರ ಚಾಲನಾ ಪರವಾನಗಿಯನ್ನು (ಡಿ.ಎಲ್) ರದ್ದುಪಡಿಸಲಾಗುವುದು~ ಎಂದು ಗೃಹ ಸಚಿವ ಆರ್.ಅಶೋಕ ಹೇಳಿದರು.

ನಗರದ ಮಗರತ್ ರಸ್ತೆಯ ಸುಲೈವಾನ್ ಪೊಲೀಸ್ ಮೈದಾನದಲ್ಲಿ ಶನಿವಾರ 23ನೇರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಅವರು, `ನಗರದಲ್ಲಿ ಒಬ್ಬನೇ ವಾಹನ ಚಾಲಕ ಮೂರಕ್ಕೂ ಹೆಚ್ಚು ಬಾರಿ ಅಪಘಾತ ಮಾಡಿರುವಂತಹ ಪ್ರಕರಣಗಳ ಸಂಖ್ಯೆ ಸುಮಾರು 800ರಷ್ಟಿದೆ. ಈ ಬಗ್ಗೆ ಪರಿಶೀಲನೆ ನಡೆಸುವಂತೆ ಹಾಗೂ ಅಂತಹ ವಾಹನ ಚಾಲಕರ ಡಿ.ಎಲ್‌ಗಳನ್ನು ರದ್ದುಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ~ ಎಂದರು.

ದೇಶದಲ್ಲಿ ಪ್ರತಿ ವರ್ಷ ಸುಮಾರು 1.20 ಲಕ್ಷದಷ್ಟು ಜನರು ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ. ಅನಾರೋಗ್ಯದಿಂದ ಸಾವನ್ನಪ್ಪುವವರ ಸಂಖ್ಯೆಗಿಂತ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಗರದಲ್ಲಿ ಪಾನಮತ್ತ ಚಾಲನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ. 2011ರಲ್ಲಿ ಸುಮಾರು 60 ಸಾವಿರ ಪಾನಮತ್ತ ಚಾಲನೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ವಾಹನ ಚಾಲಕರು ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡುವುದರಿಂದಲೂ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿವೆ.

ವ್ಹೀಲಿಂಗ್, ಡ್ರ್ಯಾಗ್ ರೇಸ್‌ನಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಪೋಷಕರು ಮಕ್ಕಳ ಬಗ್ಗೆ ಎಚ್ಚರ ವಹಿಸಬೇಕು. ವ್ಹೀಲಿಂಗ್, ಡ್ರ್ಯಾಗ್ ರೇಸ್ ಮಾಡದಂತೆ ಮಕ್ಕಳಿಗೆ ಬುದ್ಧಿ ಮಾತು ಹೇಳಬೇಕು ಎಂದು ಸಲಹೆ ನೀಡಿದರು.

ನಗರದ 20ಕ್ಕೂ ಹೆಚ್ಚು ಸ್ಥಳಗಳಲ್ಲಿ ಸದ್ಯದಲ್ಲೇ ಸಿ.ಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದ್ದು, ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಅಪಘಾತಗಳು ಸಂಭವಿಸಿದಾಗ ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಪ್ರಯತ್ನವನ್ನು ಸಾರ್ವಜನಿಕರು ಮಾಡುತ್ತಿಲ್ಲ. ಮತ್ತೊಂದೆಡೆ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿವೆ.

ಇದರಿಂದ ಹೆಚ್ಚಿನ ಸಾವು ನೋವು ಸಂಭವಿಸುತ್ತಿವೆ. ಖಾಸಗಿ ಆಸ್ಪತ್ರೆಗಳು ಗಾಯಾಳುಗಳನ್ನು ಬಗ್ಗೆ ನಿರ್ಲಕ್ಷ್ಯ ತೋರದೆ ಕೂಡಲೇ ಚಿಕಿತ್ಸೆ ನೀಡಬೇಕು. ವಿಮಾ ಕಂಪೆನಿಗಳು ಗಾಯಾಳುಗಳ ವೈದ್ಯಕೀಯ ವೆಚ್ಚವನ್ನು ಶೀಘ್ರವೇ ಪಾವತಿಮಾಡಬೇಕು ಎಂದರು.

ಡಿಜಿಟಲ್ ಮೀಟರ್: ಆಟೊ ಚಾಲಕರು ಸಮರ್ಪಕ ಮೀಟರ್‌ಗಳನ್ನು ಅಳವಡಿಸದಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ಹೊರೆ ಬೀಳುತ್ತಿದೆ. ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಎಲ್ಲ ಆಟೊಗಳಿಗೂ ಒಂದು ವಾರದೊಳಗೆ ಕಡ್ಡಾಯವಾಗಿ ಡಿಜಿಟಲ್ ಮೀಟರ್ ಅಳವಡಿಸಬೇಕು ಎಂದು ಅಶೋಕ ಹೇಳಿದರು.

ಸಾರ್ವಜನಿಕರು ಸಹಕರಿಸಬೇಕು: `ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂತೆಯೇ ಸಾವು-ನೋವು ಪ್ರಮಾಣವೂ ಅಧಿಕವಾಗುತ್ತಿದೆ. ಅಪಘಾತಗಳ ತಡೆಗೆ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಅಪಘಾತಗಳ ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು~ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಶಂಕರ ಬಿದರಿ ಮನವಿ ಮಾಡಿದರು.

ಸಂಚಾರ ನಿಯಮಗಳ ಪಾಲನೆ ಮತ್ತು ಅಪಘಾತಗಳ ಬಗ್ಗೆ ಜಾಗೃತಿ ಮೂಡಿಸುವ ವಸ್ತು ಪ್ರದರ್ಶನಕ್ಕೆ ಅಶೋಕ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು. ಅಲ್ಲದೇ ಸಂಚಾರ ನಿಯಮಗಳ ಕುರಿತಾದ ಪುಸ್ತಕಗಳನ್ನು ಅವರು ಬಿಡುಗಡೆಗೊಳಿಸಿದರು. ಸಪ್ತಾಹದ ಅಂಗವಾಗಿ ಸಂಚಾರ ಪೊಲೀಸ್ ಸಿಬ್ಬಂದಿ ನಗರದ ವಿವಿಧೆಡೆ ಬೈಕ್ ರ‌್ಯಾಲಿ ನಡೆಸಿದರು.

ಶಾಸಕ ಎನ್.ಎ.ಹ್ಯಾರಿಸ್, ನಗರ ಪೊಲೀಸ್ ಕಮಿಷನರ್ ಜ್ಯೋತಿಪ್ರಕಾಶ್ ಮಿರ್ಜಿ, ಹೆಚ್ಚುವರಿ ಪೊಲೀಸ್ ಕಮಿಷನರ್‌ಗಳಾದ ಡಾ.ಎಂ.ಎ.ಸಲೀಂ, ಎಂ.ಸಿ.ನಾರಾಯಣಗೌಡ, ಟಿ.ಸುನಿಲ್‌ಕುಮಾರ್ ಇತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT