ಮಂಗಳವಾರ, ಜನವರಿ 21, 2020
27 °C

371ನೇ ಕಲಂ ತಿದ್ದುಪಡಿ: ಬೀದರ್ ಬಂದ್ ಯಶಸ್ವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವುದಕ್ಕಾಗಿ ಸಂವಿಧಾನದ 371ನೇ ಕಲಂ ತಿದ್ದುಪಡಿಗೆ ಆಗ್ರಹಿಸಿ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಕರೆ ನೀಡಿದ್ದ ಬೀದರ್ ಬಂದ್ ಸಂಪೂರ್ಣ ಯಶಸ್ವಿಯಾಯಿತು.ನಗರದಲ್ಲಿ ಬೆಳಿಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಬಸ್ ಸಂಚಾರ ಸ್ಥಗಿತಗೊಂಡಿತ್ತು. ರಜೆ ಘೋಷಿಸದಿದ್ದರೂ ಬಹುತೇಕ ಶಾಲಾ ಕಾಲೇಜುಗಳು ಮುಚ್ಚಿದ್ದವು.ಮುಂಚಿತವಾಗಿಯೇ ಬಂದ್‌ಗೆ ಕರೆ ನೀಡಿದ್ದರಿಂದ ಬಹುತೇಕ ಅಂಗಡಿಗಳು ಬಾಗಿಲು ತೆರೆಯಲಿಲ್ಲ. ಹೀಗಾಗಿ ವ್ಯಾಪಾರ -ವಹಿವಾಟು ಸಂಪೂರ್ಣ ಸ್ಥಗಿತವಾಗಿತ್ತು. ಶಿವನಗರ, ಹೊಸ ಬಸ್ ನಿಲ್ದಾಣ, ಜಿಲ್ಲಾ ಆಸ್ಪತ್ರೆ, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಬಿ.ವಿ.ಬಿ. ಕಾಲೇಜು, ಚಿದ್ರಿ, ಗಾಂಧಿಗಂಜ್, ಕೆ.ಇ.ಬಿ., ಜನವಾಡ ರಸ್ತೆ ಸೇರಿದಂತೆ ಬಹುತೇಕ ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ನಗರದ ಹಳೆಯ ಭಾಗದಲ್ಲಿ ಕೆಲ ಅಂಗಡಿಗಳು ತೆರೆದಿದ್ದರೆ ಇನ್ನು ಕೆಲ ಅಂಗಡಿಗಳು ಬಾಗಿಲು ಮುಚ್ಚಿದ್ದವು.ಬಸ್ ಸಂಚಾರ ಸ್ಥಗಿತಗೊಳಿಸಿದ್ದರಿಂದ ನಗರದ ಬಸ್‌ನಿಲ್ದಾಣ ಬಿಕೋ ಎನ್ನುತ್ತಿತ್ತು. ವಿವಿಧೆಡೆಗೆ ತೆರಳಬೇಕಾಗಿದ್ದ ಪ್ರಯಾಣಿಕರು ತೀವ್ರ ಪರದಾಡುವಂತಾಯಿತು.ತುರ್ತು ಸೇವೆಗಳಾದ ಆಸ್ಪತ್ರೆ, ಮೆಡಿಕಲ್ ಹಾಗೂ ಅಂಬ್ಯುಲೆನ್ಸ್‌ಗಳಿಗೆ ಬಂದ್‌ನಿಂದ ವಿನಾಯಿತಿ ನೀಡಲಾಗಿತ್ತು. ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಹಾಗೂ ಬಂದ್‌ಗೆ ಬೆಂಬಲಿಸಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೆಳಿಗ್ಗೆ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ‌್ಯಾಲಿ ನಡೆಸಿದರು. ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು. ಅನಂತರ ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ಹಿಂದುಳಿದ ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸವಲತ್ತುಗಳನ್ನು ಒದಗಿಸುವುದಕ್ಕಾಗಿ ಸಂವಿಧಾನದ 371ನೇ ಕಲಂಗೆ ತಿದ್ದುಪಡಿ ತರುವಂತೆ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಪ್ರತಿಕ್ರಿಯಿಸಿ (+)