ಭಾನುವಾರ, ಮೇ 16, 2021
28 °C

6 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ನೀರಿನ ಸಮಸ್ಯೆ ತೀವ್ರವಾಗಿರುವ ತಾಲ್ಲೂಕಿನ ಆರು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, ಉಳಿದಂತೆ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಶಾಸಕ ಜೆ.ನರಸಿಂಹಸ್ವಾಮಿ ಹೇಳಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಶುಕ್ರವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಕೊರತೆ ಉಂಟಾಗಿರುವ ಗ್ರಾಮಗಳಲ್ಲಿ ಕೊಳವೆಬಾವಿ ಕೊರೆಸಲು ಹಣದ ಕೊರತೆ ಇಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ವರದಿ ನೀಡಿದಂತೆ ಕೊಳವೆ ಬಾವಿಗಳನ್ನು ಕೊರೆಸಲಾಗುತ್ತಿದೆ.

 

ಸಮಸ್ಯೆ ಕುರಿತು ಚರ್ಚಿಸಿ ತಕ್ಷಣ ಕ್ರಮ ಕೈಗೊಳ್ಳಲೆಂದೇ ವಾರಕ್ಕೊಮ್ಮೆ ಸಭೆ ನಡೆಸಲಾಗುತ್ತಿದೆ. ಕುಡಿಯುವ ನೀರು ಪೂರೈಕೆಗೆ ಸಮಸ್ಯೆ ಬಾರದಂತೆ ವಿದ್ಯುತ್ ಸರಬರಾಜು ಹಾಗೂ ವಿದ್ಯುತ್ ಪರಿವರ್ತಕಗಳ ದುರಸ್ತಿಗೆ ಬೆಸ್ಕಾಂ ಸಿಬ್ಬಂದಿ ಸನ್ನದ್ಧರಾಗಿದ್ದಾರೆ ಎಂದರು.ಸಭೆಯಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ತಾ.ಪಂ. ಅಧ್ಯಕ್ಷೆ ಪ್ರಸನ್ನಕುಮಾರ್, ಉಪಾಧ್ಯಕ್ಷೆ ಅನ್ನಪೂರ್ಣ ಚಂದ್ರಶೇಖರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಇಇಒ ಎಚ್.ಎಂ.ದ್ಯಾಮಪ್ಪ ಇತರರು ಇದ್ದರು.

ಎತ್ತಿನಹೊಳೆಗೆ 400 ಕೋಟಿ ರೂಪಾಯಿ ಮೀಸಲು

ಎತ್ತಿಹೊಳೆ ನೀರಾವರಿ ಯೋಜನೆ ಜಾರಿಗೆ ರಾಜ್ಯ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ 400 ಕೋಟಿ ರೂಪಾಯಿಯನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರವು ಕೂಡಲೇ ತನ್ನ ಪಾಲಿನ ಹಣವನ್ನು ಬಿಡುಗಡೆ ಮಾಡಲು ಮುಂದಾಗಬೇಕು ಎಂದು ಶಾಸಕ ಜೆ.ನರಸಿಂಹಸ್ವಾಮಿ ಒತ್ತಾಯಿಸಿದರು.ಮೂರು ದಿನಗಳ ಹಿಂದೆ ಕಸಬಾ ಹೋಬಳಿಯ ದರ್ಗಾ ಜೋಗಿಹಳ್ಳಿ ಗ್ರಾಮದಲ್ಲಿ 1,200 ಅಡಿಗಳವರೆಗೆ ಕೊಳವೆ ಬಾವಿ ಕೊರೆದಿದ್ದರೂ ನೀರು ದೊರೆತಿಲ್ಲ. ತಾಲ್ಲೂಕಿನ ಬಹುತೇಕ ಕೊಳವೆ ಬಾವಿಗಳಲ್ಲಿ ನೀರಿನ ಮಟ್ಟ 800 ಅಡಿಗೆ ಕುಸಿದಿದೆ. ಈ ವರ್ಷ ಕೊರೆಸಲಾಗಿರುವ ಕೊಳವೆಬಾವಿಗಳ ಪೈಕಿ ಶೇ.40 ರಷ್ಟು ವಿಫಲವಾಗಿವೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಯೋಜನೆ ಆದಷ್ಟು ಬೇಗನೇ ಜಾರಿಯಾಗಬೇಕಿದೆ ಎಂದು ಅವರು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.