ಬುಧವಾರ, ಜೂನ್ 23, 2021
22 °C

60 ಸಾವಿರ ಗ್ರಾಮಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ 60 ಸಾವಿರ ಗ್ರಾಮಗಳಲ್ಲಿ ಈ ವರ್ಷ ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವ ಗುರಿ ಹೊಂದಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಅಮಿತಾ ಪ್ರಸಾದ್ ಗುರುವಾರ ಇಲ್ಲಿ ಹೇಳಿದರು.ವಿಶ್ವಜಲ ದಿನಾಚರಣೆ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಏರ್ಪಡಿಸಿದ್ದ ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕುರಿತ ಸಂಚಿಕೆ ಹಾಗೂ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕುಡಿಯುವ ನೀರಿನ ಪೂರೈಕೆಯಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ಮೊದಲ ಸ್ಥಾನಕ್ಕೆ ತರಲು ಪ್ರಯತ್ನಿಸಬೇಕು ಎಂದರು.ಮುಂದಿನ ವರ್ಷದಿಂದ ಉತ್ತಮವಾದ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಪಂಚಾಯತ್‌ರಾಜ್ ಇಲಾಖೆಯ ಎಂಜಿನಿಯರಿಂಗ್ ವಿಭಾಗ ಮತ್ತು ಸರ್ಕಾರೇತರ ಸಂಸ್ಥೆಗಳಿಗೆ ಬಹುಮಾನ ನೀಡಲಾಗುವುದು. ಕುಡಿಯುವ ನೀರಿನ ಯೋಜನೆಗಳಿಗೆ ಬಜೆಟ್‌ನಲ್ಲಿ 1500 ಕೋಟಿ ರೂಪಾಯಿ ನೀಡಲಾಗಿದೆ. ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ನೀಡಲಿದೆ ಎಂದರು.ಅಧಿಕಾರಿಗಳಿಗೆ, ಸಮುದಾಯದ ಸದಸ್ಯರಿಗೆ, ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಚ್ಛತೆ ಬಗ್ಗೆ ತರಬೇತಿ ನೀಡಲು ಹತ್ತು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳನ್ನು ನೇಮಕ ಮಾಡಲಾಗುವುದು.ನೀರು ಪೂರೈಕೆಯ ಮಾಹಿತಿ ಸಂಗ್ರಹಕ್ಕೆ ಜಿಪಿಎಸ್ ವ್ಯವಸ್ಥೆ ಅಳವಡಿಸಲು ಹತ್ತು ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದರು.ಇಲಾಖೆಯ ನಿರ್ದೇಶಕ ರವಿಶಂಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.