ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

60 ಸಾವಿರ ಜನರಿಗೆ 1 ಅಂಬುಲೆನ್ಸ್‌

ರಕ್ತನಿಧಿ ನೆಟ್‌ವರ್ಕ್‌ ಸ್ಥಾಪನೆ: ಆರೋಗ್ಯ ಸಚಿವ ಯು.ಟಿ. ಖಾದರ್‌
Last Updated 24 ಸೆಪ್ಟೆಂಬರ್ 2013, 7:00 IST
ಅಕ್ಷರ ಗಾತ್ರ

ಚಾಮರಾಜನಗರ: ‘ರಾಜ್ಯದಲ್ಲಿ 2011ರ ಜನಗಣತಿ ಅನ್ವಯ 60 ಸಾವಿರ ಜನಸಂಖ್ಯೆಗೆ ಒಂದರಂತೆ ‘108 ಆರೋಗ್ಯ ಕವಚ’ ಅಂಬುಲೆನ್ಸ್‌ ಸೇವೆ ಒದಗಿಸಲು ಸರ್ಕಾರ ನಿರ್ಧರಿಸಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್‌ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಕೆಡಿಪಿ ಸಭಾಂಗಣದಲ್ಲಿ ಸೋಮವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಪ್ರಸ್ತುತ 80ರಿಂದ 1.10 ಲಕ್ಷ ಜನರಿಗೆ ಒಂದು ಅಂಬುಲೆನ್ಸ್ ಸೇವೆ ಇದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುವ ದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ರಾಜ್ಯದ ಎಲ್ಲ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಗಳಲ್ಲಿ ರಕ್ತನಿಧಿ ಘಟಕಗಳಿವೆ. ಇವುಗಳ ನೆಟ್‌ವರ್ಕ್‌ ಸ್ಥಾಪಿಸಲಾಗುವುದು. ಈ ಘಟಕಗಳಲ್ಲಿರುವ ರಕ್ತದ ಗುಂಪುಗಳ ಮಾಹಿತಿಯನ್ನು ಆನ್‌ಲೈನ್‌ ವ್ಯವಸ್ಥೆಗೆ ಅಳವಡಿಸಲಾಗುವುದು. ಹೀಗಾಗಿ, ಯಾವ ಜಿಲ್ಲೆಯಲ್ಲಿ ರೋಗಿಗೆ ಅಗತ್ಯವಿರುವ ರಕ್ತವಿದೆ ಎಂಬುದು ತಿಳಿದುಬರಲಿದೆ. ತ್ವರಿತವಾಗಿ ಈ ಸೌಲಭ್ಯದ ಮೂಲಕ ರೋಗಿಯ ಪ್ರಾಣ ಉಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್‌ ಹುದ್ದೆ ಖಾಲಿ ಇರುವುದು ಗಮನಕ್ಕೆ ಬಂದಿದೆ. ತ್ವರಿತವಾಗಿ ಈ ಹುದ್ದೆ ಭರ್ತಿಗೆ ಕ್ರಮವಹಿಸಲಾಗುವುದು ಎಂದ ಅವರು, ತಾಲ್ಲೂಕು ವೈದ್ಯಾಧಿಕಾರಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಅಲ್ಲಿರುವ ತೊಂದರೆ ಪರಿಹರಿಸಬೇಕು. ರೋಗಿಗಳ ನೋವಿಗೆ ಸ್ಪಂದಿಸಬೇಕು ಎಂದು ಸೂಚಿಸಿದರು.

ಪ್ರಸ್ತುತ ರಾಜ್ಯದಲ್ಲಿ ವೈದ್ಯರ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಅಕ್ಕಪಕ್ಕದಲ್ಲಿ ಜಿಲ್ಲೆಗಳಲ್ಲಿರುವ ವೈದ್ಯರ ಸೇವೆಯನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿ ಪೂರೈಸಲು ಸರ್ಕಾರ ಕ್ರಮವಹಿಸಲಿದೆ. ರೋಗಿಗಳಿಗೆ ಸರ್ಕಾರ ಕಲ್ಪಿಸಿರುವ ಯೋಜನೆಗಳ ಸೌಲಭ್ಯ ತಲುಪಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದರು.

ಹೈದರಾಬಾದ್‌ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂಬಂಧ ಇನ್ನೂ ಕೇಂದ್ರ ಸರ್ಕಾರದಿಂದ ಅಧಿಕೃತ ಅಧಿಸೂಚನೆ ಹೊರಬಿದ್ದಿಲ್ಲ. ಈ ಅಧಿಸೂಚನೆ ಹೊರಬೀಳುವವರೆಗೂ ರಾಜ್ಯದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವಂತಿಲ್ಲ. ಇನ್ನೊಂದು ವರ್ಷದೊಳಗೆ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಸಭೆಯಲ್ಲಿ ಸಂಸದ ಆರ್‌. ಧ್ರುವನಾರಾಯಣ, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಆರ್‌. ನರೇಂದ್ರ, ಎಸ್‌. ಜಯಣ್ಣ, ಜಿಲ್ಲಾಧಿಕಾರಿ ಎ.ಎಂ. ಕುಂಜಪ್ಪ ಹಾಜರಿದ್ದರು. ಸಭೆಯ ನಂತರ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT