ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು: ಕಠಿಣ ಕ್ರಮ ಭರವಸೆ

ಸಂಪುಟ ಉಪಸಮಿತಿ ವರದಿ ನಿರೀಕ್ಷೆಯಲ್ಲಿ ಸರ್ಕಾರ
Last Updated 15 ಜುಲೈ 2013, 19:59 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮ ಮರಳು ಗಣಿಗಾರಿಕೆ ತಡೆಗೆ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಅದು ವರದಿ ಕೊಟ್ಟ ನಂತರ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ವಿಧಾನಸಭೆಗೆ ತಿಳಿಸಿದರು.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ, ಮದ್ದೂರು ಮತ್ತು ಮಳವಳ್ಳಿ ತಾಲ್ಲೂಕುಗಳಲ್ಲಿ ಹೆಚ್ಚಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು ಎಂದು ಜೆಡಿಎಸ್‌ನ ಎನ್. ಚೆಲುವರಾಯಸ್ವಾಮಿ ಸರ್ಕಾರದ ಗಮನ ಸೆಳೆದರು.

`ಮಂಡ್ಯ ಜಿಲ್ಲೆಯಲ್ಲಿ ಭೂಗತ ಚಟುವಟಿಕೆ ರೀತಿಯಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಇದರಿಂದ ಜನಸಾಮಾನ್ಯರು ಸ್ವಂತ ಮನೆ ನಿರ್ಮಾಣಕ್ಕೆ ಮರಳು ತರಲು ಹೋದರೂ ಸಾವಿರಾರು ರೂಪಾಯಿ ದಂಡ ವಿಧಿಸುವ ಅಧಿಕಾರಿಗಳು, ಅಕ್ರಮ ಮರಳು ಗಣಿಗಾರಿಕೆ ನಡೆಸುವವರ ವಿರುದ್ಧ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ' ಎಂದು ದೂರಿದರು.

ಇದಕ್ಕೆ ಸುದೀರ್ಘ ಉತ್ತರ ನೀಡಿದ ಮುಖ್ಯಮಂತ್ರಿಯವರು, ಸಂಪುಟ ಉಪ ಸಮಿತಿ ಕೊಡುವ ವರದಿ ಆಧಾರದ ಮೇಲೆ ನೀತಿ ರೂಪಿಸಲಾಗುವುದು. ಆ ಮೂಲಕ ಅಕ್ರಮಕ್ಕೆ ಕಡಿವಾಣ ಹಾಕಲಾಗುವುದು. ಸಾರ್ವಜನಿಕರಿಗೆ ಇದರಿಂದ ತೊಂದರೆ ಆಗದಂತೆ ನಿಗಾ ವಹಿಸಲಾಗುವುದು ಎಂದು ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮರಳು ಉಸ್ತುವಾರಿ ಸಮಿತಿ ಇದ್ದು, ಅದು ತೀವ್ರ ನಿಗಾ ಇಟ್ಟಿದೆ. ಇದರ ನಡುವೆಯೂ ಅಕ್ರಮ ಎಸಗಿದವರಿಂದ ಕಳೆದ ವರ್ಷ  ರೂ 1.61 ಕೋಟಿ ದಂಡ ವಸೂಲು ಮಾಡಲಾಗಿದೆ.

ಈ ವರ್ಷದಲ್ಲಿ ಜೂನ್‌ವರೆಗೆ ಮದ್ದೂರು ತಾಲ್ಲೂಕಿನಲ್ಲಿ  ರೂ 24.27 ಲಕ್ಷ, ಮಳವಳ್ಳಿಯಲ್ಲಿ  ರೂ 6.15 ಲಕ್ಷ ಹಾಗೂ ಕೆ.ಆರ್.ಪೇಟೆಯಲ್ಲಿ  ರೂ 9.96 ಲಕ್ಷ ದಂಡ ವಸೂಲು ಮಾಡಲಾಗಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT