ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಮರಳು ಸಾಗಾಟ: ಅಧಿಕಾರಿ ಕುಮ್ಮಕ್ಕು

Last Updated 8 ಆಗಸ್ಟ್ 2012, 6:05 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಣಿಕೆಗೆ ಅಧಿಕಾರಿಗಳೇ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ವಿವಿಧ ಗ್ರಾಮಗಳ ಗ್ರಾಮಸ್ಥರು ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರಿಗೆ ದೂರು ಸಲ್ಲಿಸಿದರು.

ಹಿರಿಯೂರು ತಾಲ್ಲೂಕಿನ ಹರಿಯಬ್ಬೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಚಿವರು ಆಗಮಿಸಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ಮನವಿ ಸಲ್ಲಿಸಿದರು.
ಸಾಲಹುಣಿಸೆ, ಗೂಳ್ಯ, ಹೊಸಹಳ್ಳಿ, ಸಿಡ್ಲಯ್ಯನಕೋಡೆ ಹತ್ತಿರದ ವೇದಾವತಿ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ಮಾಡಿ ನೂರಾರು ಲಾರಿ, ಟ್ರ್ಯಾಕ್ಟರ್‌ಗಳಲ್ಲಿ ಹಗಲು, ರಾತ್ರಿ ಸಾಗಿಸಿ ಸುಮಾರು 20, 25 ಅಡಿ ಅಳವಾಗಿ ಗುಂಡಿ ತೋಡಿರುವುದರಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಬತ್ತಿ  ಕುಡಿಯುವ ನೀರಿಗೂ ತೊಂದರೆಯಾಗಿದೆ.

ಇಂತಹ ಅಕ್ರಮ ತಡೆಯುವಲ್ಲಿ ತಹಶೀಲ್ದಾರ್, ಅಬ್ಬಿನಹೊಳೆ ಠಾಣೆ ಪೊಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ ಮತ್ತು ಇದಕ್ಕೆ ಅವರು ಉತ್ತೇಜನ ನೀಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಉಸ್ತುವಾರಿ ಸಚಿವರು ಭರವಸೆ ನೀಡಿದರು.
ರಾಜ್ಯದಲ್ಲಿ ತೀವ್ರ ಬರಗಾಲವಿರುವುದರಿಂದ ರೈತರಿಗೆ ನೆರವಾಗಲು ರಾಜ್ಯ ಸರ್ಕಾರವು ್ಙ 3,500 ಕೋಟಿ ಸಹಕಾರಿ ಸಾಲ ಮನ್ನಾ ಮಾಡಿದೆ. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಬೆಳೆ ಸಾಲವಾಗಿ ಪಡೆದಿರುವ ರಾಜ್ಯದಲ್ಲಿನ ್ಙ 19,135 ಕೋಟಿ ಸಾಲ ಮನ್ನಾ ಮಾಡಲು ಪ್ರಧಾನಮಂತ್ರಿ ಅವರಿಗೆ  ಮುಖ್ಯಮಂತ್ರಿ ಅವರು ಮನವಿ ಮಾಡಲಿದ್ದಾರೆ ಎಂದು ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಇಂದು ಪ್ರತಿಭಟನೆ
ಹೊಳಲ್ಕೆರೆ:
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ತಿರಸ್ಕರಿಸಲು ಆಗ್ರಹಿಸಿ ಆ. 8ರಂದು ಬಂಜಾರ ಸಂಘದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನಾ ರ‌್ಯಾಲಿ ಹಮ್ಮಿಕೊಳ್ಳಲಾಗಿದ್ದು, ಸಮಾಜ ಬಾಂಧವರು ಭಾಗವಹಿಸಬೇಕು ಎಂದು ವಿದ್ಯಾರ್ಥಿ ಮುಖಂಡರಾದ ಸತೀಶ್ ನಾಯ್ಕ, ಚೇತನ ನಾಯ್ಕ, ಲಿಂಗರಾಜು, ಪ್ರಶಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT