ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಡ್ಡಮತದ ಶಾಸಕರಿಗೆ ಕಾಂಗ್ರೆಸ್ ಟಿಕೆಟ್ ಇಲ್ಲ

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯ ಈ ಅವಧಿಯಲ್ಲಿ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆಗಳಲ್ಲಿ ಅಡ್ಡ ಮತದಾನ ಮಾಡಿರುವ ಶಾಸಕರಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ನೀಡುವುದಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್, ಕೆಪಿಸಿಸಿಗೆ ಸ್ಪಷ್ಟವಾದ ಸಂದೇಶ ರವಾನಿಸಿದೆ.

ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ 8 ಮಾನದಂಡಗಳನ್ನೊಳಗೊಂಡ ಮಾರ್ಗಸೂಚಿಯನ್ನು ಎಐಸಿಸಿ ಮಂಗಳವಾರ ಕಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ತಲುಪಿದೆ. ರಾಜ್ಯಸಭೆ ಮತ್ತು ಪರಿಷತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಮತ ಚಲಾಯಿಸಿರುವ ಶಾಸಕರಿಗೆ ಮತ್ತೆ ಅವಕಾಶ ನೀಡುವುದಿಲ್ಲ ಎಂದು ಪತ್ರದಲ್ಲಿ ವರಿಷ್ಠರು ಸ್ಪಷ್ಟಪಡಿಸಿದ್ದಾಗಿ, ಕೆಪಿಸಿಸಿ ಉನ್ನತ ಮೂಲಗಳು ತಿಳಿಸಿವೆ.

ವಿಧಾನಸಭೆಯಿಂದ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಈ ವರ್ಷದ ಜೂನ್‌ನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಆರು ಶಾಸಕರು ಅಡ್ಡಮತ ಚಲಾಯಿಸಿದ್ದರು. ಪರಿಣಾಮವಾಗಿ ಪಕ್ಷದ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮ್ಮದ್ ಸರಡಗಿ ಸೋಲು ಕಂಡಿದ್ದರು. ಅಡ್ಡ ಮತದಾನ ಕುರಿತು ಆಂತರಿಕ ತನಿಖೆ ನಡೆಸಲು ವಿಧಾನ ಪರಿಷತ್‌ನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಗೋಪ್ಯ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದೆ.

ವಿಧಾನಸಭೆಗೆ ನಡೆದ ಹಿಂದಿನ ಎರಡು ಚುನಾವಣೆಗಳಲ್ಲಿ ಸತತ ಸೋಲು ಕಂಡವರಿಗೆ ಟಿಕೆಟ್ ನೀಡುವುದಿಲ್ಲ. ಒಂದೇ ಕುಟುಂಬದ ಇಬ್ಬರು ಸದಸ್ಯರಿಗೆ ಪಕ್ಷದಿಂದ ಕಣಕ್ಕಿಳಿಯಲು ಅವಕಾಶ ಕಲ್ಪಿಸುವುದಿಲ್ಲ. 2008ರ ವಿಧಾನಸಭಾ ಚುನಾವಣೆಯಲ್ಲಿ ಮೂರನೇ ಸ್ಥಾನ ಪಡೆದವರು ಮತ್ತು ಠೇವಣಿ ಕಳೆದುಕೊಂಡ ಯಾವುದೇ ಅಭ್ಯರ್ಥಿಗೆ ಪಕ್ಷ ಮತ್ತೆ ಟಿಕೆಟ್ ನೀಡುವುದಿಲ್ಲ ಎಂಬ ವಿಷಯವನ್ನು ಹೈಕಮಾಂಡ್ ಈ ಪತ್ರದಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ಕಳೆದ ಚುನಾವಣೆಯಲ್ಲಿ 15,000 ಮತಗಳ ಅಂತರದಿಂದ ಸೋಲು ಕಂಡವರಿಗೂ ಟಿಕೆಟ್ ನೀಡದಿರಲು ಹೈಕಮಾಂಡ್ ನಿರ್ಧರಿಸಿದೆ. 2008ರ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧವೇ ಬಂಡಾಯವಾಗಿ ಸ್ಪರ್ಧಿಸಿದ್ದವರಿಗೆ ಮತ್ತೆ ಮಣೆ ಹಾಕದಿರುವ ತೀರ್ಮಾನಕ್ಕೆ ಎಐಸಿಸಿ ಬಂದಿದೆ ಎನ್ನಲಾಗಿದೆ.

ಕ್ರಿಮಿನಲ್ ಹಿನ್ನೆಲೆಯುಳ್ಳವರು ಹಾಗೂ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವವರನ್ನೂ ಅಭ್ಯರ್ಥಿಗಳ ಆಯ್ಕೆಯಲ್ಲಿ ಪರಿಗಣಿಸಬಾರದು ಎಂಬ ಸೂಚನೆಯನ್ನು ನೀಡಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಮುಖಂಡರ ಸಭೆ

ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ ಮಿಸ್ತ್ರಿ ಉಪಸ್ಥಿತಿಯಲ್ಲಿ ಬುಧವಾರ ಸಭೆ ನಡೆಸಿದ ರಾಜ್ಯ ಕಾಂಗ್ರೆಸ್‌ನ ನಾಯಕರು, ವಿಧಾನಸಭಾ ಚುನಾವಣಾ ಸಿದ್ಧತೆ ಕುರಿತು ಚರ್ಚಿಸಿದರು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ವಿಧಾನಸಭೆ ಮಾಜಿ ಅಧ್ಯಕ್ಷ ರಮೇಶ್‌ಕುಮಾರ್, ವಿಧಾನ ಪರಿಷತ್ ಸದಸ್ಯ ವೀರಣ್ಣ ಮತ್ತಿಕಟ್ಟಿ, ಶಾಸಕ ಡಿ.ಕೆ.ಶಿವಕುಮಾರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT