ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಅತ್ಯಾಚಾರಿಗೆ ಗಲ್ಲು ಶಿಕ್ಷೆ ಕೊಡಿ'

Last Updated 27 ಡಿಸೆಂಬರ್ 2012, 9:52 IST
ಅಕ್ಷರ ಗಾತ್ರ

ಬೆಳಗಾವಿ: ಮಹಿಳೆ ಮೇಲೆ ಅತ್ಯಾಚಾರ ಮಾಡುವ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತಹ ಕಾಯ್ದೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬೆಳಗಾವಿಯ ಸ್ತ್ರೀ ಶಕ್ತಿ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಯನ್ನು ಖಂಡಿಸಿ ಸ್ತ್ರೀಶಕ್ತಿ ಸಂಘಟ ನೆಗಳ ಕಾರ್ಯಕರ್ತರು, ನಗರದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಣಿ ಮಾಡಿ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದರು. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಬಳಿಕ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿಸಿದರು. ಮಹಿಳೆಯ ಮೇಲೆ ದಿನನಿತ್ಯ ನಡೆಯುತ್ತಿರುವ ದೌಜನ್ಯ ಪ್ರಕರಣಗಳನ್ನು ಬಿಂಬಿಸುವ ಹಲವು ನಾಮಫಲಕಗಳನ್ನು ಹಿಡಿದುಕೊಂಡು ಹಲವು ಮಹಿಳೆಯರು ಬಾಯಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಮೆರವಣಿಗೆಯಲ್ಲಿ ಸಾಗಿದರು. ಬಳಿಕ ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

`ದೇಶದ ರಾಜಧಾನಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ಸಂಚಲನ ಮೂಡಿಸಿದೆ. ದೇಶದ ವಿವಿಧ ಸಣ್ಣಪುಟ್ಟ ನಗರಗಳಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿಲ್ಲ. ಮಹಿಳೆಯರು ಮರ್ಯಾದೆಗೆ ಅಂಜಿ ನೋವನ್ನು ನುಂಗಿಕೊಳ್ಳುತ್ತಿದ್ದಾರೆ. ಹೀಗಾಗಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತಾಗಬೇಕು' ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮರಾಠಾ ಮಂಡಳದ ಅಧ್ಯಕ್ಷೆ ರಾಜಶ್ರೀ ಹಲಗೇಕರ ಒತ್ತಾಯಿಸಿದರು.

ಅತ್ಯಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಲು ತ್ವರಿತಗತಿಯ ವಿಶೇಷ ನ್ಯಾಯಾಲಯವನ್ನು ನಿರ್ಮಿಸಬೇಕು. ತ್ವರಿತವಾಗಿ ವಿಚಾರಣೆ ನಡೆಸಿ ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಅತ್ಯಾಚಾರಕ್ಕೆ ಒಳಗಾದವರಿಗೆ ನ್ಯಾಯ ಒದಗಿಸಿಕೊಡಬೇಕು. ಅತ್ಯಾಚಾರಿಗಳಿಗೆ ಮರಣದಂಡನೆಗಿಂತಲೂ ಕಡಿಮೆ ಶಿಕ್ಷೆಯನ್ನು ವಿಧಿಸದಂತೆ ಕಾನೂನು ರೂಪಿಸಬೇಕು ಎಂದು ಸ್ತ್ರೀಶಕ್ತಿ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದರು.

ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಇರುವ ಕಾನೂನಿನ ಕುರಿತು ಸರ್ಕಾರವು ಸಣ್ಣಪುಟ್ಟ ಪಟ್ಟಣ ಹಾಗೂ ಹಳ್ಳಿಗಳಲ್ಲಿ ಜನಜಾಗೃತಿ ಮೂಡಿಸಬೇಕು. ದೌರ್ಜನ್ಯಕ್ಕೊಳಗಾದ ಮಹಿಳೆಯರನ್ನು ಪೊಲೀಸ್ ಠಾಣೆಗೆ ಕರೆತರುವ ಕೆಲಸವನ್ನು ಸಂಘಟನೆಗಳು ಮಾಡಲಿದೆ. ಅವರಿಗೆ ಸೂಕ್ತ ನ್ಯಾಯವನ್ನು ಒದಗಿಸಿಕೊಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT