ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳ ಮೇಲೆ ಸವಾರಿ ಬೇಡ: ಸಿಎಂ

Last Updated 18 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅಧಿಕಾರಿಗಳ ಮೇಲೆ ಯಾವುದೇ ಕಾರಣಕ್ಕೂ ಸವಾರಿ ಮಾಡಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮಂಗಳವಾರ ಇಲ್ಲಿ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.ಜನಪ್ರತಿನಿಧಿಗಳ ಕಿರುಕುಳದಿಂದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ.

ಇದು ಒಂದು ರೀತಿ ಸರ್ಕಾರಕ್ಕೂ ಮುಜುಗರ. ಅಧಿಕಾರಿಗಳ ಜತೆ ಜಿಲ್ಲಾ ಪಂಚಾಯಿತಿ ಜನಪ್ರತಿನಿಧಿಗಳು ಸೌಜನ್ಯದಿಂದ ವರ್ತಿಸಬೇಕು. ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಹೇಳಿದರು.

ಇದಕ್ಕೂ ಮುನ್ನ ರಾಜ್ಯ ಜಿಲ್ಲಾ ಪಂಚಾಯಿತಿ ಅಧ್ಯಕ್ಷ/ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಈರಪ್ಪ ಕಡಾಡಿ  ಬೇಡಿಕೆಗಳ ಬಗ್ಗೆ ವಿವರಿಸಿದರು.ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಬೇಕು. ಅವರಿಗೆ ಉತ್ತಮ ಕಾರು ಮತ್ತು ಅದಕ್ಕೆ ಕೆಂಪು ದೀಪ ಅಳವಡಿಸಲು ಅವಕಾಶ ನೀಡಬೇಕು.

ಗೌರವಧನ ಹೆಚ್ಚಿಸಬೇಕು. ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.ಇದಕ್ಕೆ ಸ್ಪಂದಿಸಿದ ಸದಾನಂದ ಗೌಡ ಅವರು, ರಾಜ್ಯ ಸಚಿವರ ಸ್ಥಾನಮಾನ ನೀಡುವುದರ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ, ನಿರ್ಧರಿಸಲಾಗುವುದು.

3ನೇ ಹಣಕಾಸು ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆಯೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.ಪ್ರಕೃತಿ ವಿಕೋಪ ನಿಧಿಯನ್ನು ರೂ 1 ಲಕ್ಷದಿಂದ 50 ಲಕ್ಷಕ್ಕೆ ಏರಿಸಬೇಕು ಎಂಬ ಬೇಡಿಕೆ ಬಗ್ಗೆ ಈಗಲೇ ಏನನ್ನೂ ಹೇಳಲು ಸಾಧ್ಯ ಇಲ್ಲ.ಮುಂದಿನ ದಿನಗಳಲ್ಲಿ ಈ ಕುರಿತು ಪರಿಶೀಲಿಸಲಾಗುವುದು ಎಂದು ಹೇಳಿದರು.
ಟೆಂಡರ್ ಇಲ್ಲದೆ ಐದು ಲಕ್ಷ ರೂಪಾಯಿವರೆಗೆ ಕಾಮಗಾರಿ ಗುತ್ತಿಗೆ ನೀಡಲು ಒಪ್ಪಿಗೆ ಸೂಚಿಸಿದರು. ಗೌರವಧನ ಹೆಚ್ಚಳ ಮತ್ತು ಉತ್ತಮ ಕಾರು ನೀಡುವುದಕ್ಕೂ ಒಪ್ಪಿದರು.

ಗುಂಡಿ ಇಲ್ಲದ ರಸ್ತೆ: ರಾಜ್ಯದ ರಸ್ತೆಗಳಲ್ಲಿನ ಗುಂಡಿಗಳನ್ನು ಎರಡು ತಿಂಗಳಲ್ಲಿ ಮುಚ್ಚಬೇಕು. ಈ ಕೆಲಸಕ್ಕೆ ತಕ್ಷಣ ಚಾಲನೆ ನೀಡಬೇಕು ಎಂದು ಸೂಚನೆ ನೀಡಿದರು. ಇದಕ್ಕೆ ಹಣಕಾಸಿನ ಕೊರತೆ ಇಲ್ಲ. ಎರಡು ತಿಂಗಳಲ್ಲಿ ಈ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟದ ಕಡೆಗೂ ಗಮನ ಕೊಡಬೇಕು ಎಂದೂ ಸಲಹೆ ನೀಡಿದರು.

ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮಿತಾ ಪ್ರಸಾದ್, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಕೆ.ಜೈರಾಜ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT