ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧ್ಯಕ್ಷೆ ನಾಗಶ್ರೀ, ಉಪಾಧ್ಯಕ್ಷ ಮಹದೇವಪ್ಪ

Last Updated 10 ಅಕ್ಟೋಬರ್ 2012, 8:20 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಎರಡನೇ ಅವಧಿಗೆ ನೂತನ ಅಧ್ಯಕ್ಷರಾಗಿ ಮಾದಾಪುರ ಕ್ಷೇತ್ರದ ಜಿ. ನಾಗಶ್ರೀ ಹಾಗೂ ಉಪಾಧ್ಯಕ್ಷರಾಗಿ ತೆರಕಣಾಂಬಿ ಕ್ಷೇತ್ರದ ಪಿ. ಮಹದೇವಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಗರದ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಜಿಲ್ಲಾ ಪಂಚಾಯಿತಿಯಲ್ಲಿ ಒಟ್ಟು 21 ಸ್ಥಾನಗಳಿದ್ದು, ಇದರಲ್ಲಿ ಕಾಂಗ್ರೆಸ್- 15 ಮತ್ತು ಬಿಜೆಪಿಯ 6 ಮಂದಿ ಸದಸ್ಯರಿದ್ದಾರೆ. ಸಹಜವಾಗಿ ಅಧಿಕಾರ ಕಾಂಗ್ರೆಸ್ ಪಾಲಾಗಿದೆ.

ಅಧ್ಯಕ್ಷ ಸ್ಥಾನ ಸಾಮಾನ್ಯ(ಮಹಿಳೆ) ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಕಾಂಗ್ರೆಸ್‌ನಲ್ಲಿ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿತ್ತು. ಹೀಗಾಗಿ, ಪಕ್ಷದ ವರಿಷ್ಠರು ಅಧಿಕಾರ ಹಂಚಿಕೆ ಸೂತ್ರ ಪಾಲಿಸಿದ್ದಾರೆ. ಮೊದಲ 10 ತಿಂಗಳ ಅವಧಿಗೆ ಅಧ್ಯಕ್ಷ ಸ್ಥಾನ ನಿಗದಿಯಾಗಿದೆ. ಆದರೆ, ಉಪಾಧ್ಯಕ್ಷ ಸ್ಥಾನದ  ಅಧಿಕಾರ ಹಂಚಿಕೆ ಸೂತ್ರದ ಗುಟ್ಟು ಬಿಟ್ಟುಕೊಟ್ಟಿಲ್ಲ.

ಚುನಾವಣಾಧಿಕಾರಿಯಾಗಿ ಮೈಸೂರಿನ ಪ್ರಾದೇಶಿಕ ವಿಭಾಗದ ಆಯುಕ್ತೆ ಎಂ.ವಿ. ಜಯಂತಿ ಕರ್ತವ್ಯ ನಿರ್ವಹಿಸಿದರು. ಪ್ರತಿಪಕ್ಷದ ಯಾವುದೇ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿ ನಾಮಪತ್ರ ಸಲ್ಲಿಸಲಿಲ್ಲ. ಹೀಗಾಗಿ, ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಿಸಿದರು.

ನೂತನ ಅಧ್ಯಕ್ಷೆ ನಾಗಶ್ರೀ ಮತ್ತು ಉಪಾಧ್ಯಕ್ಷ ಮಹದೇವಪ್ಪ ಅವರನ್ನು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ಸೋಮಶೇಖರಪ್ಪ, ಜಿಲ್ಲಾಧಿಕಾರಿ ಎನ್. ಜಯರಾಂ, ಶಾಸಕ ಎಚ್.ಎಸ್. ಮಹದೇವಪ್ರಸಾದ್, ಮಾಜಿ ಅಧ್ಯಕ್ಷೆ ಕೆ. ರಾಜೇಶ್ವರಿ, ಕೆ. ಈಶ್ವರ್ ಸೇರಿದಂತೆ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರು ಅಭಿನಂದಿಸಿದರು.

ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ಆಯ್ಕೆಯ ಘೋಷಣೆ ಮೊಳಗುತ್ತಿದ್ದಂತೆಯೇ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕುಡಿಯುವ ನೀರಿಗೆ ಒತ್ತು: ನಾಗಶ್ರೀ
ಚಾಮರಾಜನಗರ: `ಪ್ರಸ್ತುತ ಜಿಲ್ಲೆಯಲ್ಲಿ ಬರಗಾಲವಿದೆ. ಈಗ ಮಳೆ ಬರುತ್ತಿರುವುದರಿಂದ ಕೊಂಚ ಸಮಾಧಾನ ತಂದಿದೆ. ಆದರೆ, ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಈ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಪ್ರಥಮ ಆದ್ಯತೆ ನೀಡುತ್ತೇನೆ~ ಎಂದು ಅಧ್ಯಕ್ಷೆ ನಾಗಶ್ರೀ ತಿಳಿಸಿದರು.

ಪಕ್ಷದ ವರಿಷ್ಠರು ನನ್ನ ಮೇಲೆ ನಂಬಿಕೆ ಇಟ್ಟು ಉನ್ನತ ಹುದ್ದೆ ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕರ್ತವ್ಯ ನಿರ್ವಹಿಸುತ್ತೇನೆ. ಸದಸ್ಯರು ಹಾಗೂ ಅಧಿಕಾರಿಗಳ ವಿಶ್ವಾಸ ಪಡೆದು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದರು.

`ಅಧಿಕಾರ ಹಂಚಿಕೆ ಸೂತ್ರದ ಅನ್ವಯ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದೇನೆ. ಮೊದಲ 10 ತಿಂಗಳ ಅವಧಿಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ~ ಎಂದು ಹೇಳಿದರು.

ಉಪಾಧ್ಯಕ್ಷ ಮಹದೇವಪ್ಪ ಮಾತನಾಡಿ, `ನನಗೆ ಉಪಾಧ್ಯಕ್ಷ ಸ್ಥಾನ ನೀಡಿದ ಪಕ್ಷದ ವರಿಷ್ಠರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯ ಅಭಿವೃದ್ಧಿ ಗೆ ಸಂಪೂರ್ಣ ಸಹಕಾರ ನೀಡುತ್ತೇನೆ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT