ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ ಆಯೋಗ: ಅನಾಥಾಲಯ ತನಿಖೆಗೆ ಶಿಫಾರಸು

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಡಿಕನ್ಸನ್ ರಸ್ತೆಯ ಮುಸ್ಲಿಂ ಅನಾಥಾಶ್ರಮದಲ್ಲಿ ಅನೈತಿಕ ಹಾಗೂ ಅಕ್ರಮ ಚಟುವಟಿಕೆಗಳು ನಡೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಅದರ ಆಡಳಿತ ಮಂಡಳಿ ವಿರುದ್ಧ ತಕ್ಷಣ ಕ್ರಮ ಜರುಗಿಸಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

2010ರ ಡಿಸೆಂಬರ್ 1ರಂದು ಅನಾಥಾಶ್ರಮದಲ್ಲಿ ಲೈಂಗಿಕ ಕಿರುಕುದಿಂದ ಹಜೀರಾ ಎಂಬ ಬಾಲಕಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕ ಸುರಯ್ಯಾ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಆಯೋಗದ ತಂಡ ಅನಾಥಾಶ್ರಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಅಕ್ರಮ ಹಾಗೂ ಅನೈತಿಕ ಚಟುವಟಿಕೆ ನಡೆದಿರುವುದು ದೃಢಪಟ್ಟಿದೆ.

ಬಾಲಕಿ ಹಜೀರಾಗೆ ಅನಾಥಾಶ್ರಮದ ಹಿರಿಯ ಬಾಲಕಿಯರು ಲೈಂಗಿಕ ಕಿರುಕುಳ ನೀಡಿರುವುದು ದೃಢಪಟ್ಟಿದೆ. ಈ ಘಟನೆಯನ್ನು ನಿಯಂತ್ರಿಸುವಲ್ಲಿ ಆಡಳಿತ ಮಂಡಳಿಯ ವೈಫಲ್ಯ ಎದ್ದು ಕಾಣುತ್ತದೆ ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣದ ಹಿನ್ನೆಲೆಯಲ್ಲಿ ಅನಾಥಾಶ್ರಮದ ವಾರ್ಡನ್‌ಗಳು, ಪಿಆರ್‌ಓ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು. ಸಾವನ್ನಪ್ಪಿದ ಬಾಲಕಿ ಹಜೀರಾ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಆಯೋಗವು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಈ ಅನಾಥಾಶ್ರಮದಲ್ಲಿ ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಪುನರಾವರ್ತನೆಯಾಗುವುದನ್ನು ತಪ್ಪಿಸಲು ಆಡಳಿತಾಧಿಕಾರಿಯನ್ನು ಬದಲಾಯಿಸಿ, ಅದರ ಆಡಳಿತ ನಿರ್ವಹಣೆಯನ್ನು ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಒಪ್ಪಿಸಬೇಕು. ಆದರೆ, 1995ರ ವಕ್ಫ್ ಕಾಯ್ದೆಯನ್ವಯ ಅನಾಥಾಶ್ರಮವನ್ನು ಮುಂದುವರಿಸಬೇಕು ಎಂದು ಸರ್ಕಾರವನ್ನು ಕೋರಲಾಗಿದೆ ಎಂದು ಅವರು ತಿಳಿಸಿದರು.

ಕಿರಿಯ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಹಾಗೂ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ನಾಲ್ವರು ಹಿರಿಯ ಬಾಲಕಿಯರು ಹಾಗೂ ಅವರ ತಂಡವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸುತ್ತಿರುವ ಅನಾಥಾಶ್ರಮಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ ಎಂದು ಮಾಣಿಪ್ಪಾಡಿ ತಿಳಿಸಿದರು.

ಹಜೀರಾ ಸಾವನ್ನಪ್ಪಿದ ಘಟನೆಯನ್ನು ತಡೆಯುವಲ್ಲಿ ವಿಫಲವಾದ ಅನಾಥಾಶ್ರಮದ ಅಧಿಕಾರಿಗಳ ವಿರುದ್ಧ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ತಕ್ಷಣ ಕ್ರಮ ಜರುಗಿಸಬೇಕು ಎಂದು ಆಯೋಗವು ಒತ್ತಾಯಿಸಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಪ್ರಾಥಮಿಕ ವರದಿಯನ್ನು ಜ. 3ರಂದು ಸಲ್ಲಿಸಲಾಗಿದೆ ಎಂದು ಅವರು ತಿಳಿಸಿದರು. ಆಯೋಗದ ಕಾರ್ಯದರ್ಶಿ ಅಥಿಕ್ ರೆಹಮಾನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT