ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್ ಹಿಂದೇಟು

Last Updated 5 ಡಿಸೆಂಬರ್ 2012, 19:39 IST
ಅಕ್ಷರ ಗಾತ್ರ

ಸುವರ್ಣ ವಿಧಾನಸೌಧ (ಬೆಳಗಾವಿ): ಇದೇ 13ರವರೆಗೂ ನಡೆಯುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸದೇ ಇರಲು ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ತೀರ್ಮಾನಿಸಿದೆ. ಬುಧವಾರ ಬೆಳಿಗ್ಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಸುವರ್ಣ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸೇರಿದಂತೆ ಪಕ್ಷದ ಬಹುತೇಕ ಶಾಸಕರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವಿಶ್ವಾಸ ಗೊತ್ತುವಳಿ ಮಂಡನೆ ಸಾಧ್ಯತೆ, ಕಲಾಪದ ವೇಳೆ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಇರುವ ಅವಕಾಶಗಳು ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ದೀರ್ಘಕಾಲ ಚರ್ಚೆ ನಡೆದಿದೆ.

`ಬಿ.ಎಸ್.ಯಡಿಯೂರಪ್ಪ ಬಿಜೆಪಿಯಿಂದ ಹೊರ ಹೋಗಿದ್ದಾರೆ. ಅವರ ಜೊತೆ ಗುರುತಿಸಿಕೊಂಡಿರುವ ಹಲವು ಶಾಸಕರು ಸರ್ಕಾರದ ಬೆಂಬಲಕ್ಕೆ ನಿಲ್ಲುವ ಸಾಧ್ಯತೆ ಕಡಿಮೆ. ಈ ಸಂದರ್ಭದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಿದರೆ ಸರ್ಕಾರದ ಪತನ ಖಚಿತ. ಈ ಅವಕಾಶ ನಾವು ಬಳಸಿಕೊಳ್ಳಬೇಕು' ಎಂದು ಸಭೆಯಲ್ಲಿ ಭಾಗವಹಿಸಿದ್ದ ಕೆಲ ಶಾಸಕರು ಹೇಳಿದ್ದಾರೆ.

ಆದರೆ, ಶಾಸಕರ ಒತ್ತಾಯವನ್ನು ಸಿದ್ದರಾಮಯ್ಯ, ಪರಮೇಶ್ವರ್ ಮತ್ತಿತರರು ನಯವಾಗಿಯೇ ತಿರಸ್ಕಸಿದ್ದಾರೆ. `ರಾಜ್ಯ ಸರ್ಕಾರ ಈಗಾಗಲೇ ಪತನದ ಅಂಚಿನಲ್ಲಿದೆ. ಈ ಹಂತದಲ್ಲಿ ನಾವು ಅವಿಶ್ವಾಸ ಗೊತ್ತುವಳಿ ಮೂಲಕ ಸರ್ಕಾರವನ್ನು ಕೆಡವಿದರೆ ಸುಮ್ಮನೆ ಅಪವಾದಕ್ಕೆ ಗುರಿಯಾಗಬೇಕಾಗುತ್ತದೆ. ಈ ಹಂತದಲ್ಲಿ ಅಂತಹ ನಿಲುವು ತಾಳುವುದು ಬೇಡ' ಎಂಬುದಾಗಿ ಹೇಳಿದರು ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ. ಈ ಬಗ್ಗೆ ಗುರುವಾರವೂ ಮತ್ತೆ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT