ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರು ಮಂದಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಸಭೆ; ಕೈಬಲಪಡಿಸಲು ನಿರ್ಧಾರ

Last Updated 3 ಜುಲೈ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಾಗೂ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಒತ್ತು ನೀಡುವ ಉದ್ದೇಶದಿಂದ ಆರು ಮಂದಿ ಮಾಜಿ ಮುಖ್ಯಮಂತ್ರಿಗಳ ಪುತ್ರಿ-ಪುತ್ರರು ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸಭೆ ನಡೆಸಿದರು.

ಆರ್. ಗುಂಡೂರಾವ್ ಪುತ್ರ ದಿನೇಶ್ ಗುಂಡೂರಾವ್, ವೀರೇಂದ್ರ ಪಾಟೀಲ (ಕೈಲಾಸನಾಥ ಪಾಟೀಲ), ಎಸ್. ಬಂಗಾರಪ್ಪ (ಕುಮಾರ್ ಬಂಗಾರಪ್ಪ), ಎನ್. ಧರ್ಮಸಿಂಗ್ (ಅಜಯ್ ಸಿಂಗ್) ಮಂಗಳವಾರ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ನಾಲ್ವರು ಮಾಜಿ ಮುಖ್ಯಮಂತ್ರಿಗಳು ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿ, ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದರು.

ಜನತಾ ಪರಿವಾರದ ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಪುತ್ರಿ ಮಮತಾ ನಿಚ್ಚಾನಿ ಹಾಗೂ ಜೆ.ಎಚ್. ಪಟೇಲ್ ಪುತ್ರ ಮಹಿಮಾ ಪಟೇಲ್ ಕೂಡ ಸಭೆಯಲ್ಲಿದ್ದರು. ಮಮತಾ, ಮಹಿಮಾ ಕಾಂಗ್ರೆಸ್‌ನಲ್ಲಿದ್ದಾರೆ.

ಮಾಜಿ ಮುಖ್ಯಮಂತ್ರಿಗಳ ಪುತ್ರಿ-ಪುತ್ರರನ್ನು ಕಾಂಗ್ರೆಸ್‌ನಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ, ಬೆಂಬಲಿಗರನ್ನು ಪಕ್ಷದತ್ತ ಸೆಳೆಯುವ ಯೋಜನೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

`ಕಾಂಗ್ರೆಸ್‌ನ ಕೆಲವು ಮಾಜಿ ಮುಖ್ಯಮಂತ್ರಿಗಳು ಹಾಗೂ ಅವರ ಕುಟುಂಬವನ್ನು ರಾಜಕೀಯವಾಗಿ ಕಡೆಗಣಿಸಲಾಗಿದೆ ಎಂಬ ಅಪಪ್ರಚಾರ ಕೆಲವರಿಂದ ನಡೆದಿದೆ. ಮಾಜಿ ಮುಖ್ಯಮಂತ್ರಿಗಳ ಕುಟುಂಬ ಹೊಂದಿರುವ ರಾಜಕೀಯ ಪ್ರಭಾವವನ್ನು ಪಕ್ಷದ ಸಂಘಟನೆಗೆ ಬಳಸಿಕೊಳ್ಳುವ ಬಗ್ಗೆ ಚರ್ಚಿಸಲಾಯಿತು~ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಕೆಪಿಸಿಸಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ವಿವರಿಸಿದರು.

ಕೆಪಿಸಿಸಿ ವತಿಯಿಂದಲೇ ಈ ಸಭೆ ಆಯೋಜಿಸಲಾಗಿತ್ತು. ಇದು ಪ್ರತ್ಯೇಕ ರಾಜಕೀಯ ವೇದಿಕೆಯಲ್ಲ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT