ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲೂಗಡ್ಡೆ ನಷ್ಟಕ್ಕೆ ಪರಿಹಾರ: ಸಚಿವ ಭರವಸೆ

ಹಾಸನ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಸಭೆ
Last Updated 12 ಸೆಪ್ಟೆಂಬರ್ 2013, 6:49 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿಯ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ನಡೆದ 2013–14ನೇ ಸಾಲಿನ ಜೂನ್‌ ಮಾಹೆಯ ಅಂತ್ಯದ 1ನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಮಣ್ಣಿನ ಫಲವತ್ತತೆ ವೃದ್ಧಿಗೊಳಿಸಬೇಕು. ಮಣ್ಣಿನ ಲಕ್ಷಣದ ಬಗೆಗೆ ಕೃಷಿ ಅಧಿಕಾರಿ ಅಧ್ಯಯನ ನಡೆಸಿ ರೈತರಿಗೆ ಮಾರ್ಗದರ್ಶನ ನೀಡಬೇಕು ಹಾಗೂ ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳುವಂತೆ ರೈತರಿಗೆ ಸಲಹೆ ನೀಡಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ನಕಲಿ ರಸಗೊಬ್ಬರ ಉತ್ಪಾದಿಸುವ ಜಾಲ ಇರುವ ಬಗ್ಗೆ ಮಾತುಗಳು ಕೇಳಿ ಬಂದಿದ್ದು, ಇಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಪ್ರಮುಖ ಬೆಳೆ ಆಲೂಗೆಡ್ಡೆ ಕಳೆದ ನಾಲ್ಕೈದು ವರ್ಷಗಳಿಂದ ಅಂಗಮಾರಿ ರೋಗಕ್ಕೆ ತುತ್ತಾಗುತ್ತಿದ್ದು, ರೂ 400 ಕೋಟಿ ನಷ್ಟ ಸಂಭವಿಸಿದ್ದರೂ ಸರ್ಕಾರ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿದ ಶಾಸಕ ಎಚ್‌.ಡಿ. ರೇವಣ್ಣ ಅವರ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು ರೈತರಿಗೆ ಪ್ರಮಾಣಿಕೃತ ಆಲೂಗೆಡ್ಡೆ ಬಿತ್ತನೆ ಬೀಜ ನೀಡಲಾಗುವುದು. ಬೆಳೆ ಹಾನಿ ಸಂಭವಿಸಿದಲ್ಲಿ ಅದಕ್ಕೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಕೆ.ಎಂ. ಶಿವಲಿಂಗೇಗೌಡ ಮಾತನಾಡಿ, ಅರಸೀಕೆರೆ ತಾಲ್ಲೂಕಿನ ಕೊಬ್ಬರಿ ಕೇಂದ್ರದಲ್ಲಿ ಕೊಬ್ಬರಿ ಖರೀದಿಗೆ ಸೆ.16 ರಂದು ಕಡೆಯ ದಿನ ನಿಗದಿ ಮಾಡಲಾಗಿದ್ದು, ಖರೀದಿ ಪ್ರಕ್ರಿಯಲ್ಲಿ  ಅನೇಕ ರೈತರು ಹೆಸರು ನೋಂದಾಯಿಸಿ ಕೊಂಡಿರುವುದರಿಂದ ಜಿಲ್ಲಾಡಳಿತ ನಿಗದಿ ಪಡಿಸಿರುವ ದಿನಾಂಕವನ್ನು ವಿಸ್ತರಿಸಬೇಕು ಎಂದು ಸಚಿವರನ್ನು ಮನವಿ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು ಸರ್ಕಾರದ ಸುತ್ತೋಲೆಗೆ ಅನುಸಾರವಾಗಿ ಕ್ರಮ ಕೈಗೊಂಡಿದ್ದು, ಈ ಕುರಿತು ತೋಟಗಾರಿಕಾ ಇಲಾಖೆ ಸಚಿವರೊಂದಿಗೆ ಮಾತನಾಡಿ ನೋಂದಣಿ ಮಾಡಿಸಿದ ರೈತರ ಕೊಬ್ಬರಿ ಖರೀದಿಗೆ ಅನುವು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಶಾಸಕ ಸಿ.ಎನ್‌. ಬಾಲಕೃಷ್ಣ ಮಾತನಾಡಿ ಚನ್ನರಾಯಪಟ್ಟಣ ತಾಲ್ಲೂಕಿನ ಕೆಲವು ಭಾಗದಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ತೇವಾಂಶದ ಕೊರತೆಯಿಂದಾಗಿ ಶೇ. 90 ರಷ್ಟು ತೆಂಗು ಬೆಳೆ ಹಾನಿಯಾಗಿದೆ ಎಂದರು.

ತಾಲ್ಲೂಕಿನಲ್ಲಿ ತೆಂಗು ಬೆಳೆ ಪ್ರಮುಖವಾಗಿದ್ದು ಬೆಳೆ ಹಾನಿಯಿಂದಾಗಿ  ರೈತರು ಗುಳೆ ಹೋಗಬೇಕಾದ ಸ್ಥಿತಿ ನಿಮಾರ್ಣವಾಗಿದೆ. ಹಾಗಾಗಿ ನದಿಗಳಿಂದ ತಾಲ್ಲೂಕಿನ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಹದೇವಪ್ಪ, ‘ತೆಂಗು ಬೆಳೆ ನಾಶವಾಗಿರುವುದರ ಕುರಿತು ಈಗಾಗಲೇ ಕೇಂದ್ರ ತಂಡ ಅಧ್ಯಯನ ನಡೆಸಿದ್ದು, ಜಿಲ್ಲಾಧಿಕಾರಿಗಳೂ ಈ ಬಗ್ಗೆ ವರದಿ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸಮಸ್ಯೆ ಬಗೆ ಹರಿಸಲಾಗುವುದು. ಅಲ್ಲದೇ ರೈತರಿಗೆ ನುಸಿ ರೋಗದ ಬಗ್ಗೆ ತೋಟಗಾರಿಕಾ ಇಲಾಖೆ ಅಧಿಕಾರಿಗಳು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ರೈತರ ಜೀವನ ಮಟ್ಟ ಸುಧಾರಿಸಲು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಧ್ಯಯನ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ಪ್ರಮುಖ ಸಮಸ್ಯೆಯಾಗಿರುವ ಕಾಡಾನೆ ಹಾವಳಿ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವರು ಆನೆಗಳನ್ನು ಹಿಡಿಯುವಂತೆ ಹೈಕೋರ್ಟ್ ಆದೇಶ ನೀಡಿ ಎರಡು ತಿಂಗಳು ಕಳೆದಿದೆ, ಕೂಡಲೇ ಈ ಆದೇಶವನ್ನು ಕಾರ್ಯಗತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಶಾಸಕ ಎಚ್‌.ಕೆ. ಕುಮಾರಸ್ವಾಮಿ ಮಾತನಾಡಿ, ಸಕಲೇಶಪುರ ಭಾಗದಲ್ಲಿ ಜನ ಸಾಮಾನ್ಯರು ಜೀವನ ನಡೆಸಲು ಭಯ ಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ ಹಾಗಾಗಿ ಸರ್ಕಾರಕ್ಕೆ ಈ ಕುರಿತು ಮಾಹಿತಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಚಿವರನ್ನು ಒತ್ತಾಯಿಸಿದರು. ಕುಮಾರಸ್ವಾಮಿ ಮಾತಿಗೆ ಪ್ರತಿಕ್ರಿಯಿಸಿದ ಸಚಿವರು ಕಾಡಾನೆ ಹಿಡಿಯಲು ವಿಶೇಷ ಕಾರ್ಯಪಡೆ ನೇಮಕ ಮಾಡುವ  ಮೂಲಕ ಸಕಲೇಶಪುರ ಭಾಗಕ್ಕೆ ಕಾಡಾನೆ ಹಿಡಿಯಲು ವಿಶೇಷ ಅರಣ್ಯ ವಲಯ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ತದನಂತರ ಸಚಿವರು ರೇಷ್ಮೆ ಇಲಾಖೆ, ಜಲಾನಯನ ಅಭಿವೃದ್ಧಿ, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವೆ, ಹಾಸನ ಹಾಲು ಒಕ್ಕೂಟ, ಮೀನುಗಾರಿಕೆ ಇಲಾಖೆ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗಣಿ ಮತ್ತು ಭೂ ವಿಜ್ಞಾನ ಹಾಗೂ ಅಂತರ್ಜಲ ಇಲಾಖೆ ಸೇರಿದಂತೆ ಇನ್ನಿತರ ಎಲ್ಲ ಇಲಾಖೆಗಳ ಬಗ್ಗೆ ಸಮಗ್ರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಶಾಸಕ ವೈ.ಎನ್‌. ರುದ್ರೇಶ್‌ಗೌಡ, ಎಚ್‌.ಎಸ್‌. ಪ್ರಕಾಶ್‌, ಜಿಲ್ಲಾಧಿಕಾರಿ ವಿ. ಅನ್ಭುಕುಮಾರ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣವರ್‌, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಂಬಿಕಾ ರಾಮಕೃಷ್ಣ, ಉಪಾಧ್ಯಕ್ಷ ಬಿಳಿಚೌಡಯ್ಯ, ಸಿಇಒ ಯು.ಪಿ. ಸಿಂಗ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT