ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಪ್ರಿಲ್‌ನಲ್ಲಿ ಯಾದಗಿರಿ ಜಿಲ್ಲಾ ಉತ್ಸವ

Last Updated 20 ಫೆಬ್ರುವರಿ 2011, 13:50 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಉತ್ಸವ ಆಚರಿಸಲು ಈಗಾಗಲೇ ರೂ.9 ಲಕ್ಷ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಏಪ್ರಿಲ್ 10 ರಿಂದ 30 ರೊಳಗೆ ಜಿಲ್ಲಾ ಉತ್ಸವ ಆಯೋಜಿಸಲು ನಿರ್ಧರಿಸಲಾಯಿತು. ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಮಾತನಾಡಿ, ಇದೇ ಮೊದಲ ಬಾರಿಗೆ ಯಾದಗಿರಿ ಜಿಲ್ಲಾ ಉತ್ಸವ ಆಚರಿಸಲಾಗುತ್ತಿದ್ದು, ವಿಜೃಂಭಣೆಯಿಂದ ಆಚರಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ಜಿಲ್ಲೆಯ ಎಲ್ಲ ಸಂಘ-ಸಂಸ್ಥೆಗಳು, ನಾಗರಿಕರ ಸಹಕಾರ ಅಗತ್ಯ ಎಂದರು.

ಮೂರೂ ತಾಲ್ಲೂಕುಗಳ ಸಾಂಸ್ಕೃತಿಕ, ಐತಿಹಾಸಿಕ ಗರಿಮೆಯನ್ನು ಸಾರುವಂತಹ ಉತ್ಸವ ಇದಾಗಿರಬೇಕು. ಈಗಾಗಲೇ ಉತ್ಸವಕ್ಕಾಗಿ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ನಗರದ ಬೆಟ್ಟ, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ಹೇಳಿದರು. ನಾಡಿನ ಹೆಸರಾಂತ ಕಲಾವಿದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಸ್ತಬ್ಧ ಚಿತ್ರಗಳು, ಜಿಲ್ಲೆಯ ಐತಿಹಾಸಿಕ ತಾಣಗಳ ಬಗ್ಗೆ ಬೆಳಕು ಚೆಲ್ಲುವ ಲೇಸರ್ ಶೋ, ವಿಚಾರ ಸಂಕಿರಣದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಉತ್ಸವವು ಜಿಲ್ಲೆಯ ಐತಿಹಾಸಿಕ ತಾಣಗಳ ಪ್ರಚಾರದ ಜೊತೆಗೆ ಪ್ರವಾಸೋದ್ಯಮದ ಬೆಳವಣಿಗೆಗೆ ಪೂರಕವಾಗಿ ಇರುವಂತೆ ನೋಡಿಕೊಳ್ಳಲು ಉದ್ದೇಶಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಉತ್ಸವದ ಅಂತಿಮ ರೂಪರೇಷೆಗಳ ಕುರಿತು ಚರ್ಚೆ ಮಾಡಲಾಗುವುದು ಎಂದು ಹೇಳಿದರು. ಉತ್ಸವಕ್ಕಾಗಿ ಉಪಸಮಿತಿ ರಚನೆ ಸೇರಿದಂತೆ ಇನ್ನೂ ಹಲವಾರು ವಿಷಯಗಳ ಕುರಿತು ಚರ್ಚೆಸಲು ಮತ್ತೆ ಸಭೆ ಕರೆಯಲಾಗುವುದು ಎಂದು ಡಾ. ಕೆ.ಜಿ. ಜಗದೀಶ ತಿಳಿಸಿದರು.

ಕೋಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮೌಲಾಲಿ ಅನಪೂರ ಮಾತನಾಡಿ, ಉತ್ಸವದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಹಬ್ಬದ ವಾತಾವರಣ ಇರಬೇಕು. ಕಲಾ ತಂಡಗಳು, ಸ್ತಬ್ಧ ಚಿತ್ರಗಳನ್ನು ಪ್ರದರ್ಶಿಸಬೇಕು. ಕೃಷಿ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯುವಂತಾಗಬೇಕು ಎಂದು ಸಲಹೆ ಮಾಡಿದರು.

ನಗರಸಭೆ ಅಧ್ಯಕ್ಷೆ ನಾಗರತ್ನಾ ಅನಪೂರ ವೇದಿಕೆಯಲ್ಲಿದ್ದರು. ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ-ಕಾಲೇಜಿನ ಮುಖ್ಯಸ್ಥರು, ಡಿಡಿಪಿಐ ಬಸ್ಸಣ್ಣ ಮಹಾಂತಗೌಡ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಕಂಕನವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶಂಕರ ಸೋನಾರ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT