ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಹಣ ಠೇವಣಿ ತಡೆಗೆ ಕಾನೂನು

Last Updated 25 ಫೆಬ್ರುವರಿ 2011, 15:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ವಿದೇಶದಲ್ಲಿ ಕಪ್ಪು ಹಣ ಠೇವಣಿ ಇಡುವುದನ್ನು ತಡೆಗಟ್ಟಲು ಬೇಕಾದ ಅಗತ್ಯ ಕಾನೂನು ರಚಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಅವರು, ತೆರಿಗೆ ತಪ್ಪಿಸಿದ ಆರೋಪ ಹೊತ್ತಿರುವ ಹಸನ್ ಅಲಿ ಖಾನ್ ಅವರನ್ನು ದೇಶ ತೊರೆಯಲು ಬಿಡುವುದಿಲ್ಲ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಮುಂದುವರಿಯಲಾಗುವುದು ಎಂದು ಹೇಳಿದರು.

ಕೇವಲ ಆರೋಪದ ಆಧಾರದ ಮೇಲೆ ಅನಗತ್ಯವಾಗಿ ಯಾರಿಗೂ ತೊಂದರೆ ನೀಡುವುದಿಲ್ಲ. ಕಾನೂನಿನ ಅನ್ವಯವೇ ಕಪ್ಪು ಹಣದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು ಎಂದರು. ಆದರೆ, ಇದನ್ನು ಸ್ಪಷ್ಟವಾಗಿ ಕೇಳಿಸಿಕೊಳ್ಳದ ಬಿಜೆಪಿ ಮತ್ತು ಎಡಪಕ್ಷಗಳ ಸದಸ್ಯರು ಎದ್ದು ನಿಂತು ಹಣಕಾಸು ಸಚಿವರು ಕಪ್ಪು ಹಣದ ಕುರಿತು ಉತ್ತರಿಸಬೇಕೆಂದು ಪಟ್ಟು ಹಿಡಿದರು.

ವಿದೇಶಿ ಬ್ಯಾಂಕ್‌ಗಳಲ್ಲಿ ಕಪ್ಪು ಹಣ ಠೇವಣಿ ಇಟ್ಟಿರುವವರ ಹೆಸರನ್ನು ಬಹಿರಂಗಪಡಿಸಬೇಕೆಂದು ಸದಸ್ಯರು ಆಗ್ರಹಿಸಿದರು. ಇದರಿಂದ ತಾಳ್ಮೆ ಕಳೆದುಕೊಂಡ ಸಚಿವ ಮುಖರ್ಜಿ, ಹಣಕಾಸು ಇಲಾಖೆ ಅಧಿಕಾರಿಗಳು ಸಿಪಿಎಂ ಮುಖಂಡರ ಮನೆ ಮೇಲೆ ದಾಳಿ ನಡೆಸಿದೆ. ಆದರೆ, ಕಾನೂನು ರಚನೆ ಕಾರ್ಯ ಪ್ರಗತಿಯಲ್ಲಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದರು.

ಮುಖರ್ಜಿ ಅವರ ಈ ಮಾತಿನಿಂದ ಸಿಟ್ಟಿಗೆದ್ದ ಎಡಪಕ್ಷಗಳ ಸದಸ್ಯರು ಸಭಾಧ್ಯಕ್ಷರ ಪೀಠದ ಮುಂಭಾಗಕ್ಕೆ ಧಾವಿಸಿ, ಸಚಿವರು ಕ್ಷಮೆಯಾಚಿಸಬೇಕು ಎಂದು ಪಟ್ಟುಹಿಡಿದರು. ಈ ಸಂದರ್ಭದಲ್ಲಿ ಸಚಿವರು ಹಾಗೂ ಎಡಪಕ್ಷಗಳ ಸದಸ್ಯರ ನಡುವೆ ಪರಸ್ಪರ ಮಾತಿನ ಚಕಮಕಿ ನಡೆಯಿತು. ಸದನದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾದ್ದರಿಂದ ಸ್ಪೀಕರ್ ಮೀರಾ ಕುಮಾರ್ ಅವರು ಸದನವನ್ನು ಮುಂದೂಡಿದರು.

ರಾಜ್ಯಸಭೆ ಕಲಾಪ ಮುಂದಕ್ಕೆ
 ಪ್ರತ್ಯೇಕ ತೆಲಂಗಾಣ ರಾಜ್ಯ ಬೇಡಿಕೆಗೆ ಸಂಬಂಧಿಸಿದ ಗದ್ದಲದಿಂದಾಗಿ ರಾಜ್ಯಸಭೆಯಲ್ಲಿ ಕಲಾಪವನ್ನು ಶುಕ್ರವಾರ ಮಧ್ಯಾಹ್ನ ಮುಂದೂಡಲಾಲಾಗಿತ್ತು.

ಸದನ ಸೇರುತ್ತಿದ್ದಂತೆಯೇ, ತೆಲಂಗಾಣ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡುವಂತೆ ಬಿಜೆಪಿ ಮತ್ತು ಇತರ ವಿರೋಧ ಪಕ್ಷಗಳು ಒತ್ತಾಯಿಸಿದವು.

‘ರಾಜ್ಯದಲ್ಲಿ ಪರಿಸ್ಥಿತಿ ಹದಗೆಟ್ಟಿರುವುದರಿಂದ ಈ ವಿಷಯದ ಚರ್ಚೆಗೆ ಅವಕಾಶ ಮಾಡಿಕೊಡಬೇಕು’ ಎಂದು ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರು ಸಭಾಧ್ಯಕ್ಷ ಹಮೀದ್ ಅನ್ಸಾರಿ ಅವರನ್ನು ಕೋರಿದರು.

ನಿಯಮಾವಳಿ ಪ್ರಕಾರ ಹೋಗುವಂತೆ ತಿಳಿಸಿ ಸದಸ್ಯರನ್ನು ಸಮಾಧಾನಗೊಳಿಸಲು ಮಾಡಿದ ಅನ್ಸಾರಿ ಅವರ ಪ್ರಯತ್ನ ಫಲಿಸಲಿಲ್ಲ. ಆಗ ಕಲಾಪವನ್ನು ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT