ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಿಷನ್ ಹೆಚ್ಚಳಕ್ಕೆ ಸಂಘ ಆಗ್ರಹ

Last Updated 24 ಫೆಬ್ರುವರಿ 2011, 8:20 IST
ಅಕ್ಷರ ಗಾತ್ರ

ಚಿತ್ರದುರ್ಗ: ನ್ಯಾಯ ಬೆಲೆ ಅಂಗಡಿಗಳ ವಿತರಕರ ಕಮಿಷನ್ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.
2009ರ ಅಗಸ್ಟ್ 4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಜತೆ ಸಂಘದ ಪದಾಧಿಕಾರಿಗಳು ನಡೆಸಿದ ಸಭೆಯಲ್ಲಿ ಕಮಿಷನ್ ಹೆಚ್ಚಿಸುವುದು  ಮತ್ತು ಪ್ರತಿ ನ್ಯಾಯ ಬೆಲೆ ಅಂಗಡಿಗೆ 500ರಿಂದ 700 ಬಿಪಿಎಲ್ ಕಾರ್ಡ್‌ಗಳನ್ನು ನೀಡುವ ಬಗ್ಗೆ ಚರ್ಚಿಸಿ ಅನುಮೋದನೆ ನೀಡಲಾಗಿತ್ತು. ಆದರೂ, ಇದುವರೆಗೆ ಸಂಘದ ಬೇಡಿಕೆಗಳು ಈಡೇರಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಟಿ. ಕೃಷ್ಣಪ್ಪ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರ ಪ್ರಸಕ್ತ ಹಣಕಾಸು ವರ್ಷದ ಬಜೆಟ್‌ನಲ್ಲಿ ಸಂಘದ ಮನವಿಯನ್ನು ಪರಿಗಣಿಸಿ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.ಈ ವಿಷಯದ ಬಗ್ಗೆ ಚರ್ಚಿಸಲು ಮಾರ್ಚ್ 1ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಸ್ವಾತಿ ಹೋಟೆಲ್ ಸಭಾಂಗಣದಲ್ಲಿ ರಾಜ್ಯದ ಎಲ್ಲ ಪಡಿತರ ವಿತರಕರ ಸಂಘದ ಪದಾಧಿಕಾರಿಗಳ, ಜಿಲ್ಲಾ ಘಟಕದ ಅಧ್ಯಕ್ಷರ ಮತ್ತು ತಾಲ್ಲೂಕು ಅಧ್ಯಕ್ಷರ ಸಭೆ ಕರೆಯಲಾಗಿದೆ. ಎಲ್ಲ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕೋರಿದರು.

ನ್ಯಾಯ ಬೆಲೆ ಅಂಗಡಿಗಳಲ್ಲಿ ಲೋಪದೋಷಗಳಿವೆ. ತಪ್ಪು ಮಾಡಿದವರಿಗೆ ನಿರ್ದಾಕ್ಷಿಣ್ಯವಾಗಿ ಸರ್ಕಾರ ಕ್ರಮ ಕೈಗೊಳ್ಳಲಿ. ಆಹಾರ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಕ್ರಮ ಕೈಗೊಂಡರೆ ಲೋಪದೋಷಗಳು ತಪ್ಪುತ್ತವೆ. ಉಗ್ರಾಣದ ಉಸ್ತುವಾರಿ, ಆಹಾರ ಇಲಾಖೆ ನಿರೀಕ್ಷಕರು, ಆಹಾರ ಇಲಾಖೆ ಉಪ ನಿರ್ದೇಶಕರು ಶಾಮೀಲಾದರೆ ಅಕ್ರಮಗಳು ನಡೆಯಲು ಸಾಧ್ಯ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನ್ಯಾಯ ಬೆಲೆ ಅಂಗಡಿಗಳಿಗೆ ಆಹಾರ ಧಾನ್ಯ ಪೂರೈಸುವ ವ್ಯವಸ್ಥೆಯನ್ನು ಈಗಿರುವ ಮಾದರಿಯನ್ನೇ ಮುಂದುವರಿಸಬೇಕು. ಸರ್ಕಾರ ಈ ವ್ಯವಸ್ಥೆಯನ್ನು ಬದಲಾಯಿಸಲು ಹೊರಟಿದೆ. ಇದರಿಂದ ಉಗ್ರಾಣಗಳಲ್ಲಿ ನಡೆಯುವ ಅವ್ಯವಹಾರಗಳು ಮುಚ್ಚಿಹೋಗುತ್ತವೆ. ಪ್ರತಿಯೊಂದು ಉಗ್ರಾಣಗಳಲ್ಲಿ ಎಲೆಕ್ಟ್ರಾನಿಕ್ ಸ್ಕೇಲ್ ಅಳವಡಿಸಬೇಕು. ಇದರ ಮೂಲಕವೇ ತೂಕ ಮಾಡಿ ನ್ಯಾಯಬೆಲೆ ಅಂಗಡಿಗಳಿಗೆ ಆಹಾರ ಧಾನ್ಯಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.ಸಂಘದ ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷ ನಟರಾಜ್, ಎಂ. ಓಬಣ್ಣ, ಪ್ರಕಾಶ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT