ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಸಮನ್ವಯ ಸಮಿತಿ ಸಭೆ ಇಂದು

Last Updated 13 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್‌ ಸಿಂಗ್‌ ನೇತೃತ್ವದಲ್ಲಿ ಶನಿವಾರ ಕೆಪಿಸಿಸಿ ಸಮನ್ವಯ ಸಮಿತಿ ಮತ್ತು ಚುನಾವಣಾ ಸಮಿತಿಗಳ ಸಭೆ ನಡೆಯಲಿದೆ.

ನಗರದ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‌ ಒಂದರಲ್ಲಿ ಸಭೆಗಳು ನಿಗದಿಯಾಗಿವೆ. ಮಧ್ಯಾಹ್ನ 3 ಗಂಟೆಗೆ ಸಮನ್ವಯ ಸಮಿತಿ ಸಭೆ ಆರಂಭವಾಗಲಿದೆ. ಸಂಜೆ 5 ಗಂಟೆಗೆ ಚುನಾವಣಾ ಸಮಿತಿ ಸಭೆ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್, ಎಐಸಿಸಿ ಕಾರ್ಯದರ್ಶಿಗಳಾದ ಶಾಂತಾರಾಂ ನಾಯ್ಕ್, ಡಾ.ಚೆಲ್ಲಕುಮಾರ್‌ ಮತ್ತು ಶಾಸಕ ಡಿ.ಕೆ.ಶಿವ­ಕುಮಾರ್ ಸಮನ್ವಯ ಸಮಿತಿ ಸಭೆಯಲ್ಲಿ ಭಾಗವಹಿಸು­ವರು. ಸರ್ಕಾರ ಮತ್ತು ಪಕ್ಷದ ನಡುವಿನ ಸಮನ್ವಯಕ್ಕೆ ಸಂಬಂಧಿಸಿದ ವಿಷಯ­ಗಳು ಚರ್ಚೆಗೆ ಬರುವ ಸಾಧ್ಯತೆ ಇದೆ.

ನಿಗಮ, ಮಂಡಳಿ ನೇಮಕ ಚರ್ಚೆ: ನಿಗಮ ಮತ್ತು ಮಂಡಳಿಗಳ ಸ್ಥಾನಗಳ ನೇಮಕಾತಿ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಷಯ ಸಭೆಯ ಕಾರ್ಯಸೂಚಿಯಲ್ಲಿದೆ. ಎಷ್ಟು ದಿನಗಳೊಳಗೆ ನೇಮಕ ಮಾಡಬೇಕು? ಎಲ್ಲ ಹುದ್ದೆಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕೇ ಅಥವಾ ಒಂದಷ್ಟು ಹುದ್ದೆಗಳನ್ನು ಲೋಕಸಭಾ ಚುನಾವಣೆ ಮುಗಿಯುವವರೆಗೂ ಖಾಲಿ ಇರಿಸಬೇಕೆ ಎಂಬ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ.

ಶಾಸಕರು ಮತ್ತು ಪಕ್ಷದ ಕಾರ್ಯಕರ್ತರ ನಡುವೆ ನಿಗಮ, ಮಂಡಳಿಗಳ ಹುದ್ದೆಗಳ ಹಂಚಿಕೆ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ. ಹೆಚ್ಚಿನ ಹುದ್ದೆಗಳನ್ನು ಕಾರ್ಯಕರ್ತರಿಗೆ ನೀಡುವಂತೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರು ಕೆಪಿಸಿಸಿ ಪ್ರಮುಖರಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆಯೂ ಸಮಾಲೋಚನೆ ನಡೆಯುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

ಸಿದ್ದರಾಮಯ್ಯ ಅವರ ಸಂಪುಟದಲ್ಲಿನ ಕೆಲವು ಸಚಿವರು ಸಮರ್ಥವಾಗಿ ಕೆಲಸ ಮಾಡುತ್ತಿಲ್ಲ ಎಂದು ರಾಜ್ಯಪಾಲ ಎಚ್‌.ಆರ್‌.ಭಾರದ್ವಾಜ್‌ ಅವರು ಇತ್ತೀಚೆಗೆ ಹಲವು ಬಾರಿ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ. ಈ ವಿಷಯವೂ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪವಾಗುವ ಸಂಭವವಿದೆ.

ಚುನಾವಣಾ ಸಿದ್ಧತೆ: ಲೋಕಸಭಾ ಚುನಾವಣೆಗೆ ಸಿದ್ಧತೆ, ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ ಮತ್ತಿತರ ವಿಚಾರಗಳ ಕುರಿತು ಕೆಪಿಸಿಸಿ ಚುನಾವಣಾ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರಚಾರ ಸಮಿತಿ ಅಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವರು ಈ ಸಭೆಯಲ್ಲಿ ಭಾಗವಹಿಸುವರು.

ಸಂಭವನೀಯ ಅಭ್ಯರ್ಥಿಗಳ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಲು ಕೆಪಿಸಿಸಿ ವತಿಯಿಂದ ನಿಯೋಜಿಸಿದ್ದ ವೀಕ್ಷಕರು ಸಲ್ಲಿಸಿರುವ ವರದಿ, ಜಿಲ್ಲಾ ಕಾಂಗ್ರೆಸ್‌ ಸಮಿತಿಗಳು ಕಳುಹಿಸಿರುವ ವರದಿ ಮತ್ತು ಕೆಪಿಸಿಸಿ ಪದಾಧಿಕಾರಿಗಳು ಸಿದ್ಧಪಡಿಸಿರುವ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT