ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 11 ಅಕ್ಟೋಬರ್ 2011, 9:45 IST
ಅಕ್ಷರ ಗಾತ್ರ

ಹೊಸದುರ್ಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅರಣ್ಯೀಕರಣ ಹಾಗೂ ರೈತರ ಜಮೀನುಗಳಲ್ಲಿ ಸಸಿ ನೆಡುವ ಕೆಲಸ ಕೈಗೊಂಡ ಕೂಲಿ ಕಾರ್ಮಿಕರಿಗೆ ವೇತನ ನೀಡಿಲ್ಲ ಎಂದು ಆರೋಪಿಸಿ ತಂಡಗ ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರು ಸೋಮವಾರ ಇಲ್ಲಿನ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.

ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಇರುವುದೇ ಇಲ್ಲ. ಸುಮಾರು ಮೂರು ತಿಂಗಳಿನಿಂದ ಅಧಿಕಾರಿ ಭೇಟಿಗಾಗಿ ಕಚೇರಿಗೆ ಆಗಮಿಸುತ್ತಿದ್ದರೂ ಒಂದು ದಿನವೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಮೊಬೈಲ್ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ತಂಡಗ ಗ್ರಾ.ಪಂ. ಅಧ್ಯಕ್ಷ ಗಣೇಶ್ ಮಾತನಾಡಿ, ಸಾಮಾಜಿಕ ಅರಣ್ಯಾಧಿಕಾರಿ 2010-11ನೇ ಸಾಲಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ವೇತನ ನೀಡಿಲ್ಲ. ಸುಮಾರು ರೂ 4 ಲಕ್ಷ ಪಾವತಿ  ಮಾಡಬೇಕಿದ್ದು, ಹಣ ನೀಡದೆ ಕೂಲಿಕಾರರಿಗೆ ತೊಂದರೆ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಕಾರ್ಮಿಕರಿಗೆ ಹಣ ಬಿಡುಗಡೆ ಮಾಡುವಂತೆ ಕೇಳಲು ಅಧಿಕಾರಿಯ ಭೇಟಿಗಾಗಿ ದಿನನಿತ್ಯ ಕಚೇರಿಗೆ ಒಂದು ಹೋಗುತ್ತಿದ್ದರೂ ಒಂದು ದಿನವೂ ಅಧಿಕಾರಿಯನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಒಬ್ಬ ಚುನಾಯಿತ ಪ್ರತಿನಿಧಿಗೆ ಅಧಿಕಾರಿಯ ಭೇಟಿ ಸಾಧ್ಯವಿಲ್ಲವಾದರೆ ಇನ್ನು ಜನಸಾಮಾನ್ಯರ ಸ್ಥಿತಿ ಏನಾಗಬೇಕು ಎಂದು ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು.

ಸಾಮಾಜಿಕ ಅರಣ್ಯಾಧಿಕಾರಿ ಕಚೇರಿಯಲ್ಲಿ ಭೇಟಿಗೆ ಸಿಗದ ಕಾರಣ ಸಾಂಕೇತಿಕವಾಗಿ ಬೀಗ ಹಾಕಿ ಪ್ರತಿಭಟನೆ ನಡೆಸಿದ್ದು, ಇದೇ ಸ್ಥಿತಿ ಮುಂದುವರಿದಲ್ಲಿ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಗ್ರಾಮಸ್ಥರಾದ ಶೇಖರ್, ಪ್ರದೀಪ್, ಉಮೇಶ್, ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಪೂಜಾರ್ ಮತ್ತಿತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT