ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಕಾಮಗಾರಿ: ತಕ್ಷಣ ಅಂದಾಜು ಪಟ್ಟಿ ಸಲ್ಲಿಸಲು ತಾಕೀತು

Last Updated 21 ಏಪ್ರಿಲ್ 2011, 5:30 IST
ಅಕ್ಷರ ಗಾತ್ರ

ಬೀದರ್: ಕುಡಿಯುವ ನೀರಿನ ಕಾಮಗಾರಿಗಳಿಗೆ ಪ್ರತಿ ತಾಲೂಕಿಗೆ 15 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದ್ದು, ತಕ್ಷಣ ಕಾಮಗಾರಿಗಳ ಅಂದಾಜು ಪಟ್ಟಿ ಸಲ್ಲಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.
ಕುಡಿಯುವ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರಿಂದ ಬರುವ ದೂರುಗಳನ್ನು ತಕ್ಷಣ ಪರಿಹರಿಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಜಿಲ್ಲೆಯ ಹಲವು ಕಡೆಗಳಲ್ಲಿ ತೆರೆಯಲಾಗಿರುವ ನಿಯಂತ್ರಣ ಕೊಠಡಿಗಳು ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಲಭ್ಯ ಇರುವ ಅನುದಾನ ಸಮರ್ಪಕವಾಗಿ ಬಳಸಿಕೊಂಡು ಎಲ್ಲರಿಗೂ ಕುಡಿಯುವ ನೀರು ಪೂರೈಸಬೇಕು ಎಂದು ಹೇಳಿದರು.

ಕುಡಿಯುವ ನೀರು ಪೂರೈಕೆ ಕಾರ್ಯದಲ್ಲಿ ವಿಳಂಬ ಮಾಡಬಾರದು. ಎರಡು ದಿನಗಳ ಒಳಗಾಗಿ ಪೈಪ್‌ಲೈನ್ ಅಳವಡಿಕೆ ಸೇರಿದಂತೆ ಸಣ್ಣಪುಟ್ಟ ಕಾಮಗಾರಿಗಳ ಅಂದಾಜು ಪಟ್ಟಿ ಸಲ್ಲಿಸಬೇಕು. ಈಗಾಗಲೇ ಬೋರ್‌ವೆಲ್ ಕೊರೆದು ಮೋಟಾರು ಅಳವಡಿಕೆ ಬಾಕಿ ಇರುವ ಪ್ರಕರಣಗಳ ಪಟ್ಟಿ ಸಲ್ಲಿಸಬೇಕು ಎಂದು ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಜಿತೇಂದ್ರ ನಾಯಕ್ ತಿಳಿಸಿದರು.

ಅಂಗನವಾಡಿ: ಜಿಲ್ಲೆಯಲ್ಲಿ ಹೊಸದಾಗಿ ಮಂಜೂರಾಗಿರುವ ಅಂಗನವಾಡಿಗಳಿಗೆ ಕಾರ್ಯಕರ್ತೆಯರ ನೇಮಕ ಪ್ರಕ್ರಿಯೆ ನಡೆಯುತ್ತಿದೆ.
ಬೀದರ್ ತಾಲ್ಲೂಕಿನಲ್ಲಿ 48, ಭಾಲ್ಕಿಯಲ್ಲಿ 43, ಬಸವಕಲ್ಯಾಣದಲ್ಲಿ 55, ಹುಮನಾಬಾದ್‌ನಲ್ಲಿ 66 ಮತ್ತು ಔರಾದ್‌ನಲ್ಲಿ 71 ಅಂಗನವಾಡಿ ಕೇಂದ್ರಗಳು ಮಂಜೂರಾಗಿವೆ. ಬಹುತೇಕ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಹೇಳಿದರು.

ಜಿಲ್ಲೆಯಲ್ಲಿ 27 ಶಿಶುಪಾಲನಾ ಕೇಂದ್ರಗಳು ಇದ್ದು, 357 ಮಕ್ಕಳು ಇದ್ದಾರೆ. ಇವುಗಳ ಪೈಕಿ 23 ಕೇಂದ್ರಗಳಿಗೆ ಒಟ್ಟು 4.83 ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ. ಇದೇ ರೀತಿ ಸೂಕ್ತ ಮೂಲಸೌಕರ್ಯಗಳು ಇಲ್ಲದ ನಿರ್ಗತಿಕ ಕುಟೀರಗಳಿಗೆ ಅನುದಾನ ನಿಲ್ಲಿಸಲಾಗಿದೆ ಎಂದು ಹೇಳಿದರು.

ಸಾಕ್ಷರ ಭಾರತ ಯೋಜನೆ ಅಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ 4,646 ಕಲಿಕಾ ಕೇಂದ್ರಗಳನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆರಂಭಿಸಲಾಗಿದೆ. ಒಟ್ಟು 9 ಸಾವಿರ ಕಲಿಕಾ ಕೇಂದ್ರಗಳನ್ನು ಆರಂಭಿಸುವ ಗುರಿ ಇದ್ದು, ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ವಯಸ್ಕರ ಶಿಕ್ಷಣಾಧಿಕಾರಿ ಶಂಕರರಾವ್ ಶಿಂಧೆ ತಿಳಿಸಿದರು.

ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿರುವ ಹೆಚ್ಚುವರಿ ಶಿಕ್ಷಕರನ್ನು ಪುನರ್ ನಿಯೋಜನೆ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಹೆಚ್ಚುವರಿ ಶಿಕ್ಷಕರ ಪಟ್ಟಿ ಈಗಾಗಲೇ ಪ್ರಕಟಿಸಲಾಗಿದ್ದು, ಏಪ್ರಿಲ್ 27 ರಂದು ಕೌನ್ಸಿಲಿಂಗ್ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಹಮ್ಮದ್ ಬಶೀರ್ ಮಾಹಿತಿ ನೀಡಿದರು.

ಅಂಗವಿಕಲರಿಗೆ ಮೀಸಲು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಡಿಯಲ್ಲಿ ಬರುವ ಯೋಜನೆಗಳಲ್ಲಿ ಶೇ. 3 ರಷ್ಟು ನಿಧಿಯನ್ನು ಅಂಗವಿಕಲರ ಕಲ್ಯಾಣಕ್ಕಾಗಿ ಮೀಸಲಿರಿಸಬೇಕು. ಈ ಮೊತ್ತವನ್ನು ಅಂಗವಿಕಲರ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ವೈದ್ಯಕೀಯ ಪುನರ್ ವಸತಿ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಬಳಸಬೇಕು ಎಂದು ಜಿತೇಂದ್ರ ನಾಯಕ್ ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ತಾನಾಜಿ ಧನಸಿಂಗ್ ರಾಠೋಡ್, ಸ್ಥಾಯಿ ಸಮಿತಿ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT