ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೃಷ್ಣಾ: ಕಾನೂನು ಹೋರಾಟಕ್ಕೆ ನಿರ್ಧಾರ

Last Updated 25 ಫೆಬ್ರುವರಿ 2011, 16:20 IST
ಅಕ್ಷರ ಗಾತ್ರ

ಬೆಂಗಳೂರು: ಕೃಷ್ಣಾ ನ್ಯಾಯಮಂಡಳಿಯ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಕರೆದಿದ್ದ ವಿಧಾನಮಂಡಲದ ಸರ್ವಪಕ್ಷಗಳ ಮುಖಂಡರ ಸಭೆಯಲ್ಲಿ ರಾಜ್ಯದ ಪಾಲಿನ ನೀರು ಬಳಕೆಗೆ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಯಿತು.

ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಯಾವ ರೀತಿಯ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎನ್ನುವುದರ ಬಗ್ಗೆ ಚರ್ಚಿಸಲು ಸರ್ವಪಕ್ಷ ಮುಖಂಡರ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ತಿನ ಜೆಡಿಎಸ್ ಮುಖಂಡ ಎಂ.ಸಿ.ನಾಣಯ್ಯ, ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಸುರೇಶ್‌ಕುಮಾರ್, ಉನ್ನತ ಶಿಕ್ಷಣ ಸಚಿವ ಡಾ.ವಿ.ಎಸ್.ಆಚಾರ್ಯ ಅವರು ಹಾಜರಿದ್ದರು.

ಕರ್ನಾಟಕ ತನ್ನ ಪಾಲಿನ ನೀರು ಪಡೆಯಲು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಸಚಿವ ಬಸವರಾಜ ಬೊಮ್ಮಾಯಿ ನಂತರ ಸುದ್ದಿಗಾರರಿಗೆ ತಿಳಿಸಿದರು.

ಈ ಸಂಬಂಧ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಅಗತ್ಯವಾದ ಕರಡು ಸಿದ್ಧಪಡಿಸುವಂತೆಯೂ ಮುಖ್ಯಮಂತ್ರಿ ಕಾನೂನು ವಿಭಾಗಕ್ಕೆ ಸೂಚಿಸಿದ್ದು, ಆ ಪ್ರಕಾರ ಮಾಡಲಾಗುವುದು. ಇದರ ಜತೆಗೆ ಅಗತ್ಯ ಬಿದ್ದರೆ ಕೃಷ್ಣಾ ನ್ಯಾಯಮಂಡಳಿಯ ಮುಂದೆಯೂ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ತೆಗೆದುಕೊಳ್ಳಲಾಯಿತು ಎಂದು ಹೇಳಿದರು.

ಪೂರ್ಣ ಬೆಂಬಲ: ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿದ್ದರಾಮಯ್ಯ ಮತ್ತು ಎಂ.ಸಿ.ನಾಣಯ್ಯ ಅವರು ‘ನೀರಿನ ವಿಚಾರದಲ್ಲಿ ರಾಜಕೀಯ ಇಲ್ಲ. ನ್ಯಾಯಮಂಡಳಿಯ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್‌ಗೆ ಹೋಗಲು ನಮ್ಮ ಪೂರ್ಣ ಬೆಂಬಲ ಇದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT