ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರದ ಮೇಲೆ ಒತ್ತಡ ಹೇರಿ

Last Updated 6 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಬಂದ್‌ಗೆ ಬೆಂಬಲ ಸೂಚಿಸಿ ವಿವಿಧ ಕನ್ನಡಪರ ಸಂಘಟನೆಗಳ ಸದಸ್ಯರು ಹಾಗೂ ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ ಪುರಭವನದ ಎದುರು ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, `ಕಾವೇರಿ ನದಿ ನೀರಿಗಾಗಿ ರಾಜ್ಯದಾದ್ಯಂತ ನಡೆಯುತ್ತಿರುವ ಹೋರಾಟಕ್ಕೆ ಕೊನೆಯಿಲ್ಲ. ವಿವಾದಕ್ಕೆ ಶಾಶ್ವತ ಪರಿಹಾರ ಸಿಗುವವರೆಗೂ ಹೋರಾಟ ಮುಂದುವರಿಸಬೇಕು. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಚಳವಳಿ ಮೂಲಕವೇ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು~ ಎಂದು ಅವರು ತಿಳಿಸಿದರು.

ಸಾಹಿತಿ ಚಂದ್ರಶೇಖರ ಪಾಟೀಲ ಮಾತನಾಡಿ, `ಪ್ರಸಕ್ತ ವರ್ಷದಲ್ಲಿ ತಮಿಳುನಾಡಿನ ರೈತರು ಮೂರು ಬೆಳೆಗಳನ್ನು ಬೆಳೆದಿದ್ದಾರೆ. ನಮ್ಮ ರಾಜ್ಯದ ರೈತರು ಕೇವಲ ಒಂದು ಬೆಳೆ ಬೆಳೆದಿದ್ದಾರೆ. ಅಕಾಲಿಕ ಮಳೆ, ಭೀಕರ ಬರಗಾಲದ ಜತೆಗೆ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ರೈತರು ತತ್ತರಿಸಿ ಹೋಗಿದ್ದಾರೆ. ಕಾವೇರಿ ವಿವಾದದಲ್ಲಿ ತಮಿಳುನಾಡಿಗೆ ಅನ್ಯಾಯವಾಗಿದ್ದರೆ, ಆ ರಾಜ್ಯದ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುತ್ತಿದ್ದರು. ಆದರೆ, ನಮ್ಮ ರಾಜ್ಯದಿಂದ ಚುನಾಯಿತರಾಗಿರುವ ಕೇಂದ್ರ ಸಚಿವರು ಮೌನಕ್ಕೆ ಶರಣಾಗಿರುವುದು ಖಂಡನೀಯ~ ಎಂದು ಆಕ್ರೋಶ ವ್ಯಕ್ತಪಡಿಸಿದರು.

`ಕಾವೇರಿ ನೀರು ರಾಜ್ಯದಲ್ಲಿ ಸರಿಯಾಗಿ ಹರಿಯದಿದ್ದರೆ ಒಣಗುವುದು ರೈತರ ಹೊಲ-ಗದ್ದೆಗಳು ಮಾತ್ರವಲ್ಲ, ನಮ್ಮ ಗಂಟಲೂ ಸಹ ಒಣಗಲಿದೆ. ಇದನ್ನು ನಗರದ ಬಹುತೇಕ ಮಂದಿ ಮರೆತಿದ್ದಾರೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಹಣ ಕೊಟ್ಟರೂ ನೀರು ಸಿಗದ ಪರಿಸ್ಥಿತಿ ಎದುರಾಗುತ್ತದೆ ~ ಎಂದು ಒಕ್ಕೂಟದ ಅಧ್ಯಕ್ಷ ಕೆ.ಪ್ರಭಾಕರ ರೆಡ್ಡಿ ಹೇಳಿದರು.

ಅಖಿಲ ಕರ್ನಾಟಕ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಅನಂತ ಸುಬ್ಬರಾವ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನಗರದ ಹಲವು ಕಡೆಗಳಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಟೈರ್‌ಗಳಿಗೆ ಬೆಂಕಿಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT