ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾರಿ ಓವರ್ ಪದ್ಧತಿಗೆ ಒತ್ತಾಯಿಸಿ ಪ್ರತಿಭಟನೆ

Last Updated 20 ಜುಲೈ 2013, 8:17 IST
ಅಕ್ಷರ ಗಾತ್ರ

ಯಾದಗಿರಿ: ಕ್ಯಾರಿ ಓವರ್ ಪದ್ಧತಿ ಅಳವಡಿಸುವಂತೆ ಆಗ್ರಹಿಸಿ ನೂರಾರು ಡಿಪ್ಲೊಮಾ ವಿದ್ಯಾರ್ಥಿಗಳು, ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕ್ಯಾರಿ ಓವರ್ ಪದ್ಧತಿ ಕೈಬಿಡುವುದರಿಂದಾಗಿ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗುತ್ತದೆ. ಕ್ಯಾರಿ ಓವರ್ ಪದ್ಧತಿಯನ್ನು ಅಳವಡಿಸುವ ಮೂಲಕ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಡಿಪ್ಲೊಮಾ ಓದುತ್ತಿದ್ದು, ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡುತ್ತಾರೆ. ಹೆಚ್ಚಿನ ವಿದ್ಯಾರ್ಥಿಗಳು ಬಡ ಕುಟುಂಬದಿಂದ ಬಂದಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ನಿಯಮ ಮುಂದುವರಿಸಬೇಕು ಎಂದು ಒತ್ತಾಯಿಸಿದರು.

ಹತ್ತು ವಿಷಯಗಳಲ್ಲಿ ಅನುತ್ತೀರ್ಣರಾದರೂ ಮುಂದಿನ ತರಗತಿಗೆ ಪ್ರವೇಶ ಪಡೆಯುತ್ತಿದ್ದರು. ಆದರೆ ಸರ್ಕಾರದ ಆದೇಶದಿಂದಾಗಿ ಯಾವುದೇ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣರಾದರೆ, ಮುಂದಿನ ತರಗತಿಗೆ ಅವಕಾಶ ಇಲ್ಲದಂತಾಗಿದೆ ಎಂದರು.

ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತ ಕಾಯುವ ಬದಲು, ಅವರ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಲು ಮುಂದಾಗಿದೆ. ಕನ್ನಡ ಮಾಧ್ಯಮದಲ್ಲಿ ಓದುವ ವಿದ್ಯಾರ್ಥಿಗಳು ಕೂಡ ಡಿಪ್ಲೊಮಾ ಓದುತ್ತಿದ್ದು, ಅವರಿಗೆ ಇಂಗ್ಲಿಷ್ ಬರುವುದಿಲ್ಲ. ಇದರಿಂದಾಗಿ ಅನುತ್ತೀರ್ಣರಾಗುವ ಸಾಧ್ಯತೆಯಿದೆ.
ಆದರೆ ಇದನ್ನು ಪರಿಗಣಿಸದೇ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ಯಾರಿ ಓವರ್ ಪದ್ಧತಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು. ನಿರ್ಲಕ್ಷ್ಯ ತೋರಿದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದರು.

ಇಲ್ಲಿಯ ತಹಶೀಲ್ದಾರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು, ಹೆಚ್ಚುವರಿ ಜಿಲ್ಲಾಧಿಕಾರಿ ಜಹೀರಾ ನಸೀಮ್ ಮೂಲಕ ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಟೋಕರಿ ಕೋಲಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಉಮೇಶ ಮುದ್ನಾಳ, ಮುಸ್ಲಿಂ ಕೌನ್ಸಿಲ್ ಜಿಲ್ಲಾ ಘಟಕದ ಅಧ್ಯಕ್ಷ ಚಾಂದಪಾಷಾ ಸೌದಾಗರ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT