ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರೀಡಾನೀತಿಯಲ್ಲಿ ಬದಲಾವಣೆ ತರಲು ಸಲಹೆ

Last Updated 18 ಅಕ್ಟೋಬರ್ 2011, 6:15 IST
ಅಕ್ಷರ ಗಾತ್ರ

ಚಿತ್ರದುರ್ಗ: ರಾಷ್ಟ್ರ ಮತ್ತು ರಾಜ್ಯದ ಕ್ರೀಡಾನೀತಿಗಳಲ್ಲಿ ಬದಲಾವಣೆ ತರುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಜಿ.ಎಚ್. ತಿಪ್ಪಾರೆಡ್ಡಿ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯ್ತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಗರದ ತರಾಸು ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ 14 ಮತ್ತು 17ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜೂಡೋ ಸ್ಪರ್ಧೆ ಹಾಗೂ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಸ್ತುತ ಕ್ರೀಡಾನೀತಿಗಳು ಉತ್ತಮವಾಗಿದ್ದರೂ, ಸಹ ಇನ್ನೂ ಹೆಚ್ಚಿನ   ಬದಲಾವಣೆ ತರುವ ಮೂಲಕ ಯುವಜನರನ್ನು ಕ್ರೀಡೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸರ್ಕಾರ ಪ್ರೋತ್ಸಾಹಿಸಬೇಕು ಎಂದರು.

ಜೂಡೋ ಹಾಗೂ ಷಟಲ್ ಬ್ಯಾಡ್ಮಿಂಟನ್ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಾಮುಖ್ಯತೆ ಪಡೆದಿದ್ದರೂ, ಚಿತ್ರದುರ್ಗ ಜಿಲ್ಲೆಯಂತಹ ವಿವಿಧ ಜಿಲ್ಲೆಗಳಲ್ಲಿ ಕ್ರೀಡೆಗಳು ಹೆಚ್ಚು ಬೆಳೆಯಬೇಕಿದೆ. ಜಿಲ್ಲೆಯಲ್ಲಿ ರಾಜ್ಯಮಟ್ಟದ ಕ್ರೀಡೆಗಳು ನಡೆಯುತ್ತಿರುವುದರಿಂದ ಸ್ಥಳೀಯ ಕ್ರೀಡಾಪಟುಗಳ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ ಎಂದರು.

ಕ್ರೀಡೆಗಳಲ್ಲಿ ಸೂಕ್ತ ತರಬೇತುದಾರರು ಇಲ್ಲದಿರುವುದರಿಂದ ಉತ್ತಮ ಕ್ರೀಡಾಪಟುಗಳು ಹೊರಹೊಮ್ಮಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಕ್ರೀಡೆಗಳಿಗೆ ತರಬೇತುದಾರರನ್ನು ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ನಗರಸಭೆ ಅಧ್ಯಕ್ಷೆ ಸುನಿತಾ ಮಲ್ಲಿಕಾರ್ಜುನ್ ಮಾತನಾಡಿ, ಕ್ರೀಡೆಗಳಿಗೆ ಪ್ರೋತ್ಸಾಹ ನೀಡಲು ಜಿಲ್ಲೆಯಲ್ಲಿ ಕ್ರೀಡಾಕ್ಲಬ್ ರಚನೆ ಮಾಡುವ ಅಗತ್ಯವಿದೆ. ಶಾಲೆಗಳಲ್ಲಿ ಕ್ರೀಡೆಗಳಿಗಾಗಿ ಒಂದು ತರಗತಿ ನೀಡುವುದರಿಂದ ಮಕ್ಕಳು ಹೆಚ್ಚಿನ ಕ್ರೀಡಾಸಕ್ತಿ ಬೆಳೆಸಿಕೊಳ್ಳಲು ಸಾಧ್ಯವಾಗುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್ ಮತ್ತು ಷಟಲ್ ಬ್ಯಾಡ್ಮಿಂಟನ್ ವಿಜೇತ ಕ್ರೀಡಾ ಪಟುಗಳನ್ನು ಸನ್ಮಾನಿಸಲಾಯಿತು.

ರಾಜ್ಯದ ನಾಲ್ಕು ವಿಭಾಗಗಳಿಂದ ಪಂದ್ಯಾವಳಿಯಲ್ಲಿ ಸುಮಾರು 700 ಕ್ರೀಡಾಪಟುಗಳು ಭಾಗವಹಿಸಲಿದ್ದು, 100 ಅಧಿಕಾರಿಗಳು ಕ್ರೀಡೆಗಳ ಉಸ್ತುವಾರಿ ವಹಿಸಿದ್ದಾರೆ.  ಜಿ.ಪಂ. ಅಧ್ಯಕ್ಷ ಸಿ. ಮಹಾಲಿಂಗಪ್ಪ, ಡಯಟ್ ಪ್ರಾಂಶುಪಾಲ ಎಂ. ಮಲ್ಲಣ್ಣ, ಡಿಡಿಪಿಐ ಎಚ್. ಮಂಜುನಾಥ್ ಇತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT