ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಚಾಗದ ಹಣ: ಸಚಿವರ ಆಕ್ರೋಶ

Last Updated 8 ಫೆಬ್ರುವರಿ 2011, 8:55 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ನಗರ ಹಾಗೂ ಪಟ್ಟಣಗಳ ಅಭಿವೃದ್ಧಿಗಾಗಿ ಸರ್ಕಾರ ಸುಮಾರು ರೂ.70 ಕೋಟಿ ನೀಡಿದ್ದು, ಈ ಹಣವನ್ನು ಶೀಘ್ರ ಖರ್ಚು ಮಾಡಿ, ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಇಲ್ಲಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರಸಭೆ, ಪುರಸಭೆಗಳ ಆಯುಕ್ತರು, ಮುಖ್ಯಾಧಿಕಾರಿಗಳು, ಎಂಜಿನಿಯರ್‌ಗಳು ಹಾಗೂ ಭೂಸೇನಾ ನಿಗಮದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಆರ್ಥಿಕ ಪ್ರಗತಿ ಕುಂಠಿತವಾಗಿರುವುದು ಬೇಸರದ ಸಂಗತಿ. ಪ್ರಸಕ್ತ ಹಣಕಾಸು ವರ್ಷದ ಉಳಿದ ಒಂದೂವರೆ ತಿಂಗಳಲ್ಲಿ ಗಣನೀಯ ಪ್ರಗತಿ ಸಾಧಿಸುವುದು ಅತ್ಯವಶ್ಯಕ. ಬಿಡುಗಡೆ ಮಾಡಿದ ಅನುದಾನವನ್ನು ಮಾರ್ಚ್ ಅಂತ್ಯಕ್ಕೆ ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯ ಮಾಡಬೇಕು ಎಂದು ಸೂಚನೆ ನೀಡಿದರು.

ರಾಜ್ಯದ ಮುಖ್ಯಮಂತ್ರಿಗಳು ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿಗೆ ರೂ.44 ಕೋಟಿ ನೀಡಿದ್ದು, ಈ ಹಣ ಖರ್ಚು ಮಾಡದಿದ್ದಲ್ಲಿ ಮುಂದಿನ 2 ವರ್ಷಗಳಿಗೆ ನೀಡಲು ಉದ್ದೇಶಿಸಿರುವ ಹಣ ಬಿಡುಗಡೆ ಆಗುವುದಿಲ್ಲ. ಇದಕ್ಕೆ ಅಧಿಕಾರಿಗಳೇ ಹೊಣೆಯಾಗಬೇಕಾಗುತ್ತದೆ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ರಾಜ್ಯ ಹಣಕಾಸು ಆಯೋಗದ ಅನುದಾನ ಮತ್ತು 12 ನೇ ಹಣಕಾಸು ಯೋಜನೆಯ ಹಣವನ್ನೂ ಸಹ ಸಂಪೂರ್ಣವಾಗಿ ಬಳಸಬೇಕು. ನಗರದ ಸೌಂದರ್ಯವನ್ನು ಹೆಚ್ಚಿಸಲು ಪಾರ್ಕ್‌ಗಳ ಅಭಿವೃದ್ಧಿ, ರಸ್ತೆ ಮಧ್ಯೆ ವಿದ್ಯುತ್ ದೀಪಗಳ ಅಳವಡಿಕೆ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ನಗರದ ಕೆರೆಯನ್ನು ರೂ.2 ಕೋಟಿ ವೆಚ್ಚದಲ್ಲಿ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ, ಸಭೆಗೆ ವಿವರಿಸಿದರು. ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಸುಮಾರು ರೂ.6.74 ಕೋಟಿ ಮೀಸಲಿಡಲಾಗಿದೆ. ಅದರಲ್ಲಿ ಕೇವಲ ರೂ.66 ಲಕ್ಷ ಮಾತ್ರ ಖರ್ಚು ಮಾಡಲಾಗಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಸುರಪುರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನ ನಿರ್ಮಿಸಲು ತಮ್ಮ ಶಾಸಕರ ಅನುದಾನದಡಿ ರೂ.15 ಲಕ್ಷ ನೀಡುವುದಾಗಿ ತಿಳಿಸಿದ ಅವರು, ಪುರಸಭೆಯಿಂದ ರೂ.30 ಲಕ್ಷ ಭರಿಸಿ, ಒಟ್ಟು ರೂ.50 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು ಎಂದು ಪುರಸಭೆ ಅಧಿಕಾರಿಗಳು ಸೂಚನೆ ನೀಡಿದರು.

ಎಲ್ಲ ಇಲಾಖೆಗಳ ಪ್ರಗತಿಯನ್ನು ಹಂತಹಂತವಾಗಿ ಪರಿಶೀಲನೆ ಮಾಡಲಾಗುವುದು. ಯಾವುದೇ ಕಾರಣಕ್ಕೂ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಸಹಿಸಲಾಗದು ಎಂದು ಸಚಿವ ಪ್ರೊ. ಮುಮ್ತಾಜ್ ಅಲಿಖಾನ್ ಸ್ಪಷ್ಟವಾಗಿ ಹೇಳಿದರು.

ಸಚಿವರ ಆಪ್ತ ಕಾರ್ಯದರ್ಶಿ ಅಕ್ರಂ ಪಾಷಾ, ನಗರಸಭೆ ಆಯುಕ್ತ ಮುನಿಶ್ಯಾಮಪ್ಪ, ಡಿಯುಡಿಸಿ ಯೋಜನಾ ನಿರ್ದೇಶಕ ಜಿ.ಎಂ. ಚೌಧರಿ, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಬಂಡೆಪ್ಪ ಆಕಳ, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT