ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣರಾಜ್ಯೋತ್ಸವ: ಪೂರ್ವಭಾವಿ ಸಿದ್ಧತೆಗೆ ಸೂಚನೆ

Last Updated 24 ಜನವರಿ 2011, 9:45 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ಹಾಗೂ ನಗರಸಭೆ ಸಂಯುಕ್ತ  ಆಶ್ರಯದಲ್ಲಿ ಜ. 26ರಂದು ಗಣರಾಜ್ಯೋತ್ಸವವನ್ನು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಆಚರಣೆ ಮಾಡಲು ತೀರ್ಮಾನಿಸಿದ್ದು, ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಈಚೆಗೆ ನಡೆದ ಪೂರ್ವಭಾವಿ ಸಿದ್ಧಾತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಿನ ಕಾರ್ಯಕ್ರಮ ಸರ್ಕಾರಿ ವಿಜ್ಞಾನ ಕಾಲೇಜಿನ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಸಂಜೆ ಕಾರ್ಯಕ್ರಮ ತರಾಸು ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿವೆ. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ನೌಕರರು, ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಕಡ್ಡಾಯವಾಗಿ 8.30ರ ಒಳಗೆ ಕಾರ್ಯಕ್ರಮ ಸ್ಥಳದಲ್ಲಿ ಹಾಜರಿರಬೇಕು ಎಂದು ತಿಳಿಸಿದರು.

ಆಚರಣೆಯ ಸಿದ್ಧತೆಗಳನ್ನು ಕೈಗೊಳ್ಳಲು ಉಪ ಸಮಿತಿಗಳನ್ನು ರಚಿಸಲಾಗಿದೆ. ಅದರಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯ ಸ್ವಾಗತ ಸಮಿತಿ,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಧ್ಯಕ್ಷತೆಯಲ್ಲಿ ಪರೇಡ್ ಸಮಿತಿ ಹಾಗೂ  ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉಪ ಸಮಿತಿಗಳನ್ನು ರಚಿಸಲಾಗಿದ್ದು, ಈ ಎಲ್ಲ ಸಿದ್ದತೆಗಳನ್ನು ಕೈಗೊಂಡು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರಸಭೆಯಿಂದ ಕಾರ್ಯಕ್ರಮದ ಸ್ಥಳದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ ಮಾಡಲು ಮತ್ತು ಸ್ವಚ್ಛತೆ ಕಾಪಾಡುವಂತೆ ಪೌರಾಯುಕ್ತರಿಗೆ ಸೂಚಿಸಿದರು. ಗಣರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲೆಯ 10 ಸಾಧಕರಿಗೆ ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಾಭೂರಾಮ್, ಹೆಚ್ಚುವರಿ ಜಿಲ್ಲಾಧಿಕಾರಿ ನಿರ್ವಾಣಪ್ಪ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಂಗೇಗೌಡ, ಉಪ ವಿಭಾಗಾಧಿಕಾರಿ ಟಿ. ವೆಂಕಟೇಶ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಜನ್ಮದಿನಾಚರಣೆ
ನೇತಾಜಿ ಸುಭಾಷ್ ಚಂದ್ರಬೋಸ್‌ರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಂಡು ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಬಿ. ಕೊಳ್ಳಪ್ಪ ಸಲಹೆ ನೀಡಿದರು. ಹಿಂದೂ ಯುವಸೇನೆ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಗರದ ಆನೆಬಾಗಿಲು ಬಳಿ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 114ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಿಂದೂ ಯುವಸೇನೆ ಜಿಲ್ಲಾ ಘಟಕದ ಬಿ.ಆರ್. ಜಗನ್ನಾಥಶೆಟ್ಟಿ,
ಎನ್.ಇ. ನಾಗರಾಜ್, ಎಚ್.ಆರ್. ರಾಜಚಾರಿ, ಕೆ. ಕೃಷ್ಣ ಮತ್ತಿತರರು ಹಾಜರಿದ್ದರು.

ಸಂಸದರ ಭೇಟಿ
ಬಂಜಾರ ಬಾಲಕಿಯರ ವಿದ್ಯಾರ್ಥಿನಿಲಯದ ಕಟ್ಟಡ ನಿರ್ಮಾಣಕ್ಕೆ ಸಂಸದರ ನಿಧಿಯಿಂದ ್ಙ 5ಲಕ್ಷ ನೀಡಲಾಗುವುದು ಎಂದು ಸಂಸದ ಜನಾರ್ದನಸ್ವಾಮಿ ಭರವಸೆ ನೀಡಿದ್ದಾರೆ.  ಈಚೆಗೆ ನಗರದಲ್ಲಿ ಬಂಜಾರ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಕಟ್ಟಡ ವೀಕ್ಷಿಸಿದ ನಂತರ ರೂ ಲಕ್ಷ ನೆರವು ನೀಡಲಾಗುವುದು ಹಾಗೂ ಸರ್ಕಾರದಿಂದ ಹೆಚ್ಚಿನ ನೆರವು ಕೋಡಿಸಲಾಗುವುದು ಎಂದು ಹೇಳಿದ್ದಾರೆ.  ಈ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದ ಕಾರ್ಯದರ್ಶಿ ಕಮಲಾಬಾಯಿ, ವೆಂಕಟಪ್ಪ, ಆರ್. ನಿಂಗಾನಾಯ್ಕ, ಎಚ್. ಲಕ್ಷ್ಮಣ್ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT