ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಣಿ ಅಕ್ರಮ : ಗಂಭೀರ ಕ್ರಮ?

Last Updated 16 ಏಪ್ರಿಲ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು:ಸುಪ್ರೀಂಕೋರ್ಟ್ ನೇಮಿಸಿರುವ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ಸಲ್ಲಿಸಿರುವ ಮಧ್ಯಂತರ ವರದಿಯಿಂದ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರ, ಬಳ್ಳಾರಿ ಜಿಲ್ಲೆಯ ವಿವಿಧೆಡೆ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವ ಗಣಿ ಕಂಪೆನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಂಬಂಧ ಸೋಮವಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಶನಿವಾರ ಬೆಳಿಗ್ಗೆಯೇ ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಉನ್ನತಮಟ್ಟದ ಸಭೆಯಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಸಿಇಸಿ ವರದಿಯಲ್ಲಿ ಪ್ರಸ್ತಾಪವಾಗಿರುವ ವಿಷಯಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ಗೆ ಉತ್ತರ ಸಲ್ಲಿಸುವ ಬಗ್ಗೆಯೂ ವಿಚಾರ ವಿನಿಮಯ ನಡೆದಿದೆ.

ಇದರ ಬೆನ್ನಲ್ಲೇ, ರಾಜ್ಯದ ಮುಖ್ಯ ಕಾರ್ಯದರ್ಶಿ ಎಸ್.ವಿ.ರಂಗನಾಥ್ ಅವರು ಭಾನುವಾರವೇ ಹಿರಿಯ ಅಧಿಕಾರಿಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲೂ ಸರ್ಕಾರ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ.

ಬಳ್ಳಾರಿಯಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಸಿಇಸಿ ಶುಕ್ರವಾರ ಸುಪ್ರೀಂಕೋರ್ಟ್‌ಗೆ ವರದಿ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಮುಜುಗರಕ್ಕೆ ಒಳಗಾಗಿದೆ. ಇದೇ 21ಕ್ಕೆ ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ. ಅಷ್ಟರೊಳಗೆ ಅಕ್ರಮ ಗಣಿಗಳ ವಿರುದ್ಧ ಚಾಟಿ ಬೀಸುವ ಮೂಲಕ ನ್ಯಾಯಾಲಯದ ಎದುರು ಮುಖ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಸರ್ಕಾರ ಕೈಹಾಕಿದೆ. ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದೂ ಸೇರಿದಂತೆ ಕಠಿಣ ಕ್ರಮ ಜರುಗಿಸುವ ಸಂಬಂಧ ಸೋಮವಾರವೇ ಆದೇಶ ಹೊರಬೀಳುವ ಸಾಧ್ಯತೆ ಇದೆ.

‘ಸಿಇಸಿ ವರದಿ ಸಂಬಂಧ ಸುಪ್ರೀಂಕೋರ್ಟ್‌ಗೆ ಏ. 20ರಂದು ಸರ್ಕಾರದಿಂದ ಪ್ರತಿಕ್ರಿಯೆ ಸಲ್ಲಿಸಬೇಕಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಅಕ್ರಮ ಗಣಿಗಾರಿಕೆ ನಡೆಸಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಲು ಸರ್ಕಾರ ಮುಂದಾಗಿದೆ, ಈ ಸಂಬಂಧ ಸೋಮವಾರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸರ್ಕಾರದ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಆದೇಶ ಪಾಲನೆಗೆ ಸಿದ್ಧ: ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ಸಿಇಸಿ ಸಲ್ಲಿಸಿರುವ ವರದಿ ಆಧರಿಸಿ ಸುಪ್ರೀಂಕೋರ್ಟ್ ನೀಡುವ ಎಲ್ಲ ಆದೇಶ ಮತ್ತು ನಿರ್ದೇಶನಗಳನ್ನು ಪಾಲಿಸಲು ನಮ್ಮ ಸರ್ಕಾರ ಸಿದ್ಧವಿದೆ. ಅದಿರು ರಫ್ತು ನಿಷೇಧಿಸುವ ಮೂಲಕ ಅಕ್ರಮ ಗಣಿಗಾರಿಕೆಯನ್ನು ಮಟ್ಟಹಾಕಲು ಸರ್ಕಾರ ಪ್ರಯತ್ನಿಸಿದೆ. ಈಗಲೂ ಅಕ್ರಮ ತಡೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನೂ ಕೈಗೊಳ್ಳುತ್ತೇವೆ’ ಎಂದರು.

‘ಸಿಇಸಿ ವರದಿಯಲ್ಲಿ ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಸರ್ಕಾರ ಶೀಘ್ರದಲ್ಲಿ ಸುಪ್ರೀಂಕೋರ್ಟ್‌ಗೆ ಉತ್ತರ ನೀಡಲಿದೆ. ವರದಿ ಪ್ರತಿ ಇನ್ನೂ ಅಧಿಕೃತವಾಗಿ ಸರ್ಕಾರಕ್ಕೆ ತಲುಪಿಲ್ಲ. ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಗಮನಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಅಕ್ರಮ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದೇನೆ’ ಎಂದರು.

‘ಅಕ್ರಮ ಗಣಿಗಾರಿಕೆ ಸಂಬಂಧ ಈಗಾಗಲೇ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ನಮ್ಮ ಸರ್ಕಾರ ಸಿದ್ಧವಿಲ್ಲ. ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಅದಿರು ರಫ್ತಿನ ಬಗ್ಗೆ ಲೋಕಾಯುಕ್ತರು ತನಿಖೆ ನಡೆಸುತ್ತಿದ್ದಾರೆ. ಆದಷ್ಟು ಬೇಗ ವರದಿ ನೀಡುವಂತೆ ಅವರಲ್ಲಿ ನಾನು ಮನವಿ ಮಾಡುತ್ತೇನೆ. ಅವರು ನೀಡುವ ವರದಿ ಆಧರಿಸಿ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ’ ಎಂದು ಯಡಿಯೂರಪ್ಪ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್; ಜೆಡಿಎಸ್ ಹೊಣೆ: ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ನೇರ ಹೊಣೆ. 2004ರಿಂದ ಅಕ್ರಮಗಳು ಹೆಚ್ಚಿವೆ ಎಂದು ಸಿಇಸಿ ಹೇಳಿದೆ. ಆಗ ಯಾವ ಸರ್ಕಾರ ಅಧಿಕಾರದಲ್ಲಿ ಇತ್ತು ಎಂಬುದು ಜನತೆಗೆ ಗೊತ್ತಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಕ್ರಮ ಗಣಿಗಾರಿಕೆ ನಿಯಂತ್ರಣಕ್ಕೆ ಶ್ರಮಿಸಿದೆ. ಅಕ್ರಮವನ್ನು ಬೆಂಬಲಿಸಿಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ವ್ಯವಹಾರವಿಲ್ಲ: ‘ಬಳ್ಳಾರಿಯ ರೆಡ್ಡಿ ಸಹೋದರರು ಕರ್ನಾಟಕದಲ್ಲಿ ಯಾವುದೇ ಗಣಿಗಾರಿಕೆ ನಡೆಸಿಲ್ಲ. ಈ ಬಗ್ಗೆ ಅವರು ಸ್ಪಷ್ಟವಾಗಿ ನನಗೆ ತಿಳಿಸಿದ್ದಾರೆ. ನೆರೆಯ ಆಂಧ್ರಪ್ರದೇಶದಲ್ಲಿ ಮಾತ್ರವೇ ಅವರು ಗಣಿಗಾರಿಕೆ ನಡೆಸುತ್ತಿದ್ದಾರೆ. ಆದರೆ ರಾಜ್ಯದಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ವಿಷಯದಲ್ಲಿ ರೆಡ್ಡಿ ಸಹೋದರರ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಯುತ್ತಿದೆ’ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT