ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಟ್ಕಾ ನಿಷೇಧ: ರಾಜಕೀಯ ಲಾಭಕ್ಕೆ ಚಿಂತನೆ

8 ಹಾಗೂ 9ರಂದು ಗೋವಾದಲ್ಲಿ ಬಿಜೆಪಿ `ರಾಷ್ಟ್ರೀಯ ಕಾರ್ಯಕಾರಿಣಿ'
Last Updated 1 ಜೂನ್ 2013, 19:59 IST
ಅಕ್ಷರ ಗಾತ್ರ

ನವದೆಹಲಿ: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ರಾಜಕೀಯವಾಗಿ ವಿರೋಧಿಸಲು ಬಿಜೆಪಿ ವರಿಷ್ಠರು ಆಲೋಚಿಸಿದ್ದು, ಇದೇ 8 ಹಾಗೂ 9ರಂದು ಗೋವಾದಲ್ಲಿ ನಡೆಯಲಿರುವ `ರಾಷ್ಟ್ರೀಯ ಕಾರ್ಯಕಾರಿಣಿ'ಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆ ಕುರಿತು ಚರ್ಚಿಸಲಿದ್ದಾರೆ.

ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಮಾಡಿರುವುದರಿಂದ ಅಡಿಕೆ ದರ ಕುಸಿದಿದ್ದು ಬೆಳೆಗಾರರು ಕಂಗಾಲಾಗಿದ್ದಾರೆ. ಸಮಸ್ಯೆಗೆ ಸೂಕ್ತವಾಗಿ ಸ್ಪಂದಿಸುವ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳಬೇಕೆಂದು ಬಿಜೆಪಿ ವರಿಷ್ಠರು ರಾಜ್ಯದ ಮುಖಂಡರಿಗೆ ಕಿವಿಮಾತು ಹೇಳಿದ್ದಾರೆ.

ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಲೆನಾಡು, ಕರಾವಳಿ ಮತ್ತು ಮಧ್ಯ ಕರ್ನಾಟಕ ಒಳಗೊಂಡಂತೆ ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ಪಕ್ಷ ಹಿನ್ನಡೆ ಅನುಭವಿಸಿದ್ದು, ಕಳೆದುಕೊಂಡಿರುವ ನೆಲೆಯನ್ನು ಪುನಃ ಕಂಡುಕೊಳ್ಳುವಂತೆ ಸಲಹೆ ಮಾಡಿದ್ದಾರೆ.

ಅಡಿಕೆ ಬೆಳೆಗಾರರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಹಳದಿ ರೋಗ ಮತ್ತು ಬೆಲೆ ಸಮಸ್ಯೆಯಿಂದ ಸೊರಗಿದ್ದ ಅಡಿಕೆ ಬೆಳೆಗಾರರಿಗೆ ಪ್ಯಾಕೇಜ್ ಕೊಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಮುಖಂಡರು ಗುಟ್ಕಾ ನಿಷೇಧಿಸುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆಂದು ಹಿರಿಯ ಬಿಜೆಪಿ ಮುಖಂಡರು ಹೇಳಿದ್ದಾರೆ.

ಮುಂದಿನ ವರ್ಷದ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವ ಕಾರ್ಯಕ್ರಮ ಹಾಕಿಕೊಳ್ಳುವಂತೆ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಹೇಳಿದೆ. ಗುಟ್ಕಾ ನಿಷೇಧವನ್ನು ಬಿಜೆಪಿ ವಿರೋಧಿಸುವುದಿಲ್ಲ. ಆದರೆ, ಈ ಮಹತ್ವದ ತೀರ್ಮಾನ ಮಾಡುವ ಮೊದಲು ಅಡಿಕೆ ಬೆಳೆಗಾರರು, ಜನಪ್ರತಿನಿಧಿಗಳು ಮತ್ತು ವರ್ತಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಅಡಿಕೆ ಬೆಳೆಗಾರರ ಸಮಸ್ಯೆ ಕುರಿತು ಅಧ್ಯಯನ ನಡೆಸಲು ನೇಮಿಸಿದ್ದ ಗೋರಖ್‌ಸಿಂಗ್ ಸಮಿತಿ ವರದಿ ಜಾರಿಗೆ ಒತ್ತಡ ಹೇರುವ ಬದಲು ರಾಜ್ಯ ಸರ್ಕಾರ ಗುಟ್ಕಾ ನಿಷೇಧ ಮಾಡಿದೆ. ರಾಜ್ಯದ 1.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 2.58ಲಕ್ಷ ಟನ್ ಅಡಿಕೆ ಬೆಳೆಯಲಾಗುತ್ತಿದೆ. ಕರ್ನಾಟಕ ಶೇ 50ರಷ್ಟು ಅಡಿಕೆ ಉತ್ಪಾದಿಸುತ್ತಿದ್ದು, ಅರ್ಧದಷ್ಟು ಗುಟ್ಕಾ ತಯಾರಿಕೆಗೆ ಹೋಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT