ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೊಬ್ಬರ ದರ: ಕ್ರಮಕ್ಕೆ ಸೂಚನೆ

Last Updated 14 ಜೂನ್ 2011, 8:15 IST
ಅಕ್ಷರ ಗಾತ್ರ

ವಿಜಾಪುರ: ನಿಗದಿಗಿಂತ ಹೆಚ್ಚಿನ ದರಕ್ಕೆ ರಸಗೊಬ್ಬರ ಮಾರಾಟ ಮಾಡುವ ವಿತರಕರು ಹಾಗೂ ವಿದ್ಯಾರ್ಥಿಗಳಿಂದ ಡೊನೇಷನ್ ಪಡೆಯುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ನಡೆದ ಮಾಸಿಕ ಜಿಲ್ಲಾ ಮಟ್ಟದ ಕೆ.ಡಿ.ಪಿ. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಜಿಲ್ಲೆಯ ಖಾಸಗಿ ಗೊಬ್ಬರ ಮಾರಾಟಗಾರರು ನಿಗದಿಗಿಂತ ಹೆಚ್ಚಿನ ದರ ಪಡೆದು ಗೊಬ್ಬರ ಮಾರಾಟ ಮಾಡುತ್ತಿದ್ದಾರೆ. ಕೆಲವೆಡೆ ರಸಗೊಬ್ಬರದ ಅಭಾವ ಎದುರಾಗಿದೆ ಎಂದು ಸದಸ್ಯರೊಬ್ಬರು ದೂರಿದರು.ಅಗತ್ಯ ಗೊಬ್ಬರ-ಬೀಜ ದಾಸ್ತಾನು ಮಾಡಲಾಗಿದೆ ಕಾಳಸಂತೆಯಲ್ಲಿ ಮಾರಾಟ ಮಾಡುವವರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಡಾ.ಸಿ. ಭೈರಪ್ಪ ಹೇಳಿದರು.

ವಿದ್ಯಾರ್ಥಿಗಳಿಂದ ಖಾಸಗಿ ಶಾಲೆಗಳು ದುಬಾರಿ ಡೊನೇಷನ್ ವಸೂಲಿ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಬರುತ್ತಿವೆ. ಸರ್ಕಾರಿ ಮತ್ತು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಖಾಸಗಿ ಶಾಲೆಗಳು ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ಶುಲ್ಕ ವಸೂಲಿ ಮಾಡುವುದು ನಿಯಮ ಬಾಹಿರ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಡಿಡಿಪಿಐಗೆ ತಾಕೀತು ಮಾಡಿದರು.

ಕರ್ತವ್ಯಲೋಪ ಎಸಗಿರುವ ಮುದ್ದೇಬಿಹಾಳ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಮುರಳಿ ಅವರನ್ನು ಅಮಾನತು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಅವರನ್ನು ಕರ್ತವ್ಯಕ್ಕೆ ಹಾಜರು ಮಾಡಿಸಿಕೊಳ್ಳಬಾರದು ಎಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ನಾರಾಯಣಪುರ ಅವರಿಗೆ ಸಿಇಒ ಎ.ಎನ್ ಪಾಟೀಲ ಸೂಚಿಸಿದರು.

ಪಶು ಇಲಾಖೆಯಲ್ಲಿ ಖಾಲಿ ಇರುವ 18 ಪಶು ವೈದ್ಯಾಧಿಕಾರಿಗಳ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಸೂಚಿಸಲಾಯಿತು. ಹೈನುಗಾರಿಕೆಗೆ ಉತ್ತೇಜನ, ಅರಣ್ಯ ಬೆಳೆಸುವುದು, ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸೂಚಿಸಲಾಯಿತು.


ಜಿ.ಪಂ. ಸದಸ್ಯರಾದ ಗಂಗಾಧರ ನಾಡಗೌಡ, ಶಿವಾನಂದ ಆವಟಿ, ನಿಂಗನಗೌಡ ಪಾಟೀಲ,  ಯೋಜನಾಧಿಕಾರಿ ನಿಂಗಪ್ಪ, ಉಪ ಕಾರ್ಯದರ್ಶಿ ಅಮರೇಶ ನಾಯಕ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT