ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌರವಧನ ಹೆಚ್ಚಳಕ್ಕೆ ಆಗ್ರಹ

Last Updated 2 ಫೆಬ್ರುವರಿ 2011, 6:05 IST
ಅಕ್ಷರ ಗಾತ್ರ

ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಒತ್ತಾಯ
ಚಿಕ್ಕಬಳ್ಳಾಪುರ: ಗೌರವ ಧನ ಹೆಚ್ಚಳ, ಸರ್ಕಾರಿ ನೌಕರರ ಸ್ಥಾನಮಾನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಿಐಟಿಯು ರಾಜ್ಯ ಅಂಗನವಾಡಿ ನೌಕರರ ಸಂಘದ ಸದಸ್ಯರು ಬುಧವಾರ (ಫೆ.2) ಪ್ರತಿಭಟನೆ ನಡೆಸಲಿದ್ದಾರೆ. ಜಿಲ್ಲೆಯ ಆರು ತಾಲ್ಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದು, ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೆರವಣಿಗೆ ಮಾಡಲಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಎಲ್ಲ ರೀತಿಯ ಸೌಕರ್ಯಗಳನ್ನು ನೀಡಲಾಗುವುದು ಎಂದು ಹೇಳಿರುವ ರಾಜ್ಯ ಸರ್ಕಾರ ನಿರೀಕ್ಷಿತ ಮಟ್ಟದಲ್ಲಿ ಯಾವುದೇ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿರುವ ಸಂಘದ ಸದಸ್ಯರು ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಕೈಗೊಳ್ಳಲು ನಿರ್ಧರಿಸಿದ್ದಾರೆ. ಹಲವು ವರ್ಷಗಳಿಂದ ಆಗಿರುವ ಅನ್ಯಾಯವನ್ನು ಸರಿಪಡಿಸಿಕೊಳ್ಳಲು ಹೋರಾಟ ಅನಿರ್ವಾರ್ಯ ಎನ್ನುವ ಸದಸ್ಯರು ಹಂತಹಂತವಾಗಿ ಹೋರಾಟ ರೂಪಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

‘ಕಳೆದ ತಿಂಗಳು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನೆ ಕೈಗೊಂಡಾಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮೊಂದಿಗೆ ಮಾತನಾಡಿ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿದ್ದರು. ಮಾತುಕತೆ ವೇಳೆ ಎಲ್ಲ ಮನವಿಗಳಿಗೆ ಸ್ಪಂದಿಸಲಾಗುವುದು ಎಂದು ತಿಳಿಸಿದ್ದರು. ಆದರೆ ಈಗ ಅವರು ಮಾತಿಗೆ ತಪ್ಪಿದಲ್ಲದೇ ಅಲ್ಪಸೌಲಭ್ಯಗಳಿಗೆ ಮಾತ್ರವೇ ತಮ್ಮ ಭರವಸೆಯನ್ನು ಮೀಸಲಿಟ್ಟಿದ್ದಾರೆ. ಅಲ್ಪಪ್ರಮಾಣದಲ್ಲಿ ಗೌರವ ಧನವನ್ನು ಹೆಚ್ಚಳ ಮಾಡಿದ್ದಾರೆ. ಆದರೆ ಅದರಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗುವುದಿಲ್ಲ’ ಎಂದು ಸಿಐಟಿಯು ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಲಕ್ಷ್ಮಿದೇಮ್ಮ ‘ಪ್ರಜಾವಾಣಿ’ಗೆ ತಿಳಿಸಿದರು.

‘ಅಂಗನವಾಡಿ ಕಾರ್ಯಕರ್ತೆರಿಗೆ ಗೌರವ ಧನದಲ್ಲಿ 500 ರೂಪಾಯಿ ಮತ್ತು ಸಹಾಯಕಿಯರಿಗೆ 250 ರೂಪಾಯಿ ಹೆಚ್ಚಳ ಮಾಡುವುದಾಗಿ ಸರ್ಕಾರ ಹೇಳಿದೆ. ಆದರೆ ಗೌರವ ಧನದ ರೂಪದಲ್ಲಿ ಮೂರು ಸಾವಿರ ರೂಪಾಯಿ ಮಾತ್ರ. ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಮೂರು ಸಾವಿರ ರೂಪಾಯಿಯಲ್ಲಿ ಕುಟುಂಬ ನಿರ್ವಹಿಸಲು ಆಗುವುದಿಲ್ಲ. ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಕೂಡ ಆಗುವುದಿಲ್ಲ’ ಎಂದು ಅವರು ತಿಳಿಸಿದರು.

‘ಸರ್ಕಾರಿ ನೌಕರರಿಗೆ ನೀಡಲಾಗುವ ಸೌಲಭ್ಯಗಳ ಜೊತೆಗೆ ವೇತನದ ರೂಪದಲ್ಲಿ ತಿಂಗಳಿಗೆ ಆರು ಸಾವಿರ ರೂಪಾಯಿ ನೀಡುವಂತೆ ಮನವಿ ಮಾಡಿದ್ದೆವು. ಮಾತುಕತೆ ವೇಳೆ ಇದಕ್ಕೆ ಸಮರ್ಪಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಬಳಿಕ ತಮ್ಮ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಇದರ ಬಗ್ಗೆ ಹಲವು ವರ್ಷಗಳಿಂದ ಪ್ರತಿಭಟನೆಗಳನ್ನು ನಡೆಸಿ, ಮನವಿಪತ್ರಗಳು ಸಲ್ಲಿಸಿದಾಗಲೆಲ್ಲ ಕೇವಲ ಭರವಸೆಗಳು ಸಿಕ್ಕಿವೆ ಹೊರತು ಮತ್ತೇನೂ ಇಲ್ಲ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

‘ಎಲ್‌ಐಸಿ ಸಂಸ್ಥೆಯ ಮೂಲಕ ಪಿಂಚಣಿ ಸೌಲಭ್ಯ ನೀಡುವಂತೆ ಮನವಿ ಮಾಡಿದ್ದೆವು. ಆದರೆ ಖಾಸಗಿ ಕಂಪೆನಿಗಳ ಮೂಲಕ ಪಿಂಚಣಿ ಸೌಲಭ್ಯ ಕೊಡುವುದಾಗಿ ಸರ್ಕಾರ ತಿಳಿಸಿದೆ. ಆದರೆ ಖಾಸಗಿ ಕಂಪೆನಿಗಳು ಪಿಂಚಣಿ ಹಣವನ್ನು ಶೇರು ಮಾರುಕಟ್ಟೆಯಲ್ಲಿ ಹಾಕಿಬಿಟ್ಟರೆ, ನಮಗೆ ಪಿಂಚಣಿ ಹಣವು ಸಿಗುವುದಿಲ್ಲ. ಎಲ್‌ಐಸಿ ಸಂಸ್ಥೆಯ ಮೂಲಕ ಪಿಂಚಣಿ ಸೌಲಭ್ಯ ನೀಡಿದರೆ ಉತ್ತಮ’ ಎಂದು ಲಕ್ಷಿದೇವಮ್ಮ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT