ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ತರಾಟೆಗೆ

Last Updated 2 ಜುಲೈ 2012, 8:15 IST
ಅಕ್ಷರ ಗಾತ್ರ

ಜಗಳೂರು: ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳಿಗೆ ಸಂಬಂಧಿಸಿದಂತೆ ತಾಲ್ಲೂಕಿನಲ್ಲಿ ಸಮರ್ಪಕವಾದ ಗಣಕೀಕರಣ ಕಾರ್ಯ ಕೈಗೊಳ್ಳದಿರುವ  ಬಗ್ಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಮೆಳ್ಳೆಕಟ್ಟೆ ಚಿದಾನಂದ ಐಗೂರು ಗ್ರಾಮ ಪಂಚಾಯ್ತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪಟ್ಟಣದಲ್ಲಿ ಗುರುವಾರ ನಡೆದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಕೈಗೊಳ್ಳಲಾದ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ವಿವರಗಳನ್ನು ನಿಯಮಿತವಾಗಿ ಎಂಐಎಸ್ ಮಾಡಿಲ್ಲ. ತಾಲ್ಲೂಕಿಗೆ ಖಾತ್ರಿ ಯೋಜನೆಯಡಿ ಇತ್ತೀಚೆಗೆ ರೂ. 24 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಪಂಚಾಯ್ತಿವಾರು ಕಾಮಗಾರಿ ನಿರ್ವಹಿಸಿದ ಬಗ್ಗೆ ಇನ್ನು ಮೂರು ದಿನಗಳ ಒಳಗಾಗಿ ಎಂಐಎಸ್ ಕಾರ್ಯ ಅಂತಿಮವಾಗಬೇಕು ಎಂದು ಅವರು ತಾಕೀತು ಮಾಡಿದರು.

ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೈಗೊಳ್ಳುವ ಯೋಜನೆಗಳ ಬಗ್ಗೆ ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಸದಸ್ಯರಿಗೆ ಪಂಚಾಯ್ತಿ ಅಬಿವೃದ್ಧಿ ಅಧಿಕಾರಿಗಳು ಸರಿಯಾದ ಮಾಹಿತಿ ನೀಡುವುದಿಲ್ಲ. ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೆಲವು ಪಂಚಾಯ್ತಿಗಳಲ್ಲಿ ಅಧಿಕಾರಿ ಯಾರು, ಸಿಬ್ಬಂದಿ ಯಾರು ಎನ್ನುವುದೇ ತಿಳಿಯದಷ್ಟು ಅಯೋಮಯವಾದ ಪರಿಸ್ಥಿತಿ ಇದ್ದು, ಅವರನ್ನು ಕೇಳುವವರೇ ಇಲ್ಲವಾಗಿದೆ ಎಂದು  ಜಿಲ್ಲಾ ಪಂಚಾಯ್ತಿ  ಸದಸ್ಯರಾದ ಕೆ.ಪಿ. ಪಾಲಯ್ಯ ಮತ್ತು ಎಚ್. ನಾಗರಾಜ್ ಆಕ್ಷೇಪ ವ್ಯಕ್ತಪಡಿಸಿದರು.

ನೀರುಗಂಟಿ ಸೇರಿದಂತೆ ದಿನಗೂಲಿ ನೌಕರರಿಗೆ ಗ್ರಾಮ ಪಂಚಾಯ್ತಿಯಲ್ಲಿ ಸರಿಯಾದ ವೇತನ ನೀಡುತ್ತಿಲ್ಲ. 6 ತಿಂಗಳವರೆಗೆ ವೇತನ ಬಾಕಿ ಇದೆ ಎಂಬ ಆರೋಪಗಳು ಸಾಕಷ್ಟಿವೆ.ಇದು ಸರಿಯಲ್ಲ. ಕೂಡಲೇ, ದಿನಗೂಲಿ ನೌಕರರಿಗೆ ವೇತನ ಬಿಡುಗಡೆ ಮಾಡಬೇಕು ಎಂದು ಅಧ್ಯಕ್ಷ ಚಿದಾನಂದ ಐಗೂರು ಅಧಿಕಾರಿಗಳಿಗೆ ಆದೇಶಿಸಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಶಾಂತವೀರಪ್ಪ, ಉಪಾಧ್ಯಕ್ಷೆ ಲಕ್ಷ್ಮಮ್ಮ ಅಮರೇಂದ್ರಪ್ರ, ಜಿಲ್ಲಾ ಪಂಚಾಯ್ತಿ ಸದಸ್ಯೆ ಜಯಲಕ್ಷ್ಮೀ ಮಹೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಕಾರ್ಯ ನಿರ್ವಾಹಕ ಅಧಿಕಾರಿ ಪ್ರಭುಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT