ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಸಭೆಯಲ್ಲಿ ‘ಖಾತ್ರಿ’ ಕಾಮಗಾರಿ: ಸೂಚನೆ

Last Updated 13 ಸೆಪ್ಟೆಂಬರ್ 2013, 8:33 IST
ಅಕ್ಷರ ಗಾತ್ರ

ವಿಜಾಪುರ: ‘ಮಹಾತ್ಮ  ಗಾಂಧಿ ಉದ್ಯೋಗ ಖಾತ್ರಿ ಯೋಜನೆ ವ್ಯಾಪ್ತಿಗೊಳಪಡುವ ವಿವಿಧ ಕಾಮಗಾರಿಗಳಿಗೆ ವಿಶೇಷ ಗ್ರಾಮ ಸಭೆಗಳಲ್ಲಿ ಅನುಮೋದನೆ ಪಡೆದು ತ್ವರಿತವಾಗಿ ಅನುಷ್ಠಾನ­ಗೊಳಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಶಿವಕುಮಾರ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿಯ ಜಿಲ್ಲಾ ಪಂಚಾಯಿತಿಯಲ್ಲಿ ಬುಧವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರಿನ ಯೋಜನೆಗಳಿಗೆ ಬಾಕಿ ಇರುವ ವಿದ್ಯುತ್ ಸಂಪರ್ಕವನ್ನು ಶೀಘ್ರದಲ್ಲಿ ಕಲ್ಪಿಸಬೇಕು. ಚಡಚಣ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಪರಿಹಾರ ಕಾರ್ಯಗಳನ್ನು ಸಮಪರ್ಕವಾಗಿ ಅನುಷ್ಠಾನ­ಗೊಳಿಸಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಕಾರ್ಯ ಚಟುವಟಿಕೆ ಪರಿಶೀಲಿಸಬೇಕು. ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಸರ್ಕಾರಿ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕಾವ್ಯ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಕರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ಮಿಸುತ್ತಿರುವ ವಿದ್ಯಾರ್ಥಿ ವಸತಿ ನಿಲಯಗಳ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಉಪಾಧ್ಯಕ್ಷ ತಮ್ಮಣ್ಣ ಹಂಗರಗಿ ತಾಕೀತು ಮಾಡಿದರು.

ಆಡಳಿತದಲ್ಲಿ ಕನ್ನಡ ಅನುಷ್ಠಾನ ಕುರಿತು ಇನ್ನೂ ಕೆಲ ಇಲಾಖೆಯವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಮಾಹಿತಿ ಒದಗಿಸಿಲ್ಲ. ಮುಂದಿನ ತಿಂಗಳು 5ರೊಳಗಾಗಿ ವರದಿ ಸಲ್ಲಿಸಬೇಕು ಎಂದು ಸೂಚಿಸಲಾಯಿತು.

ನೋಟಿಸ್‌: ಜಿಲ್ಲಾ ಪಂಚಾಯಿತಿ ಸಭೆಗೆ ಹಾಜ­ರಾಗದ ನಿರ್ಮಿತಿ ಕೇಂದ್ರದ ಅಧಿಕಾರಿಗೆ ನೋಟಿಸ್‌ ಜಾರಿ ಮಾಡುವಂತೆ ಸಿಇಒ ಸೂಚಿಸಿದರು.

ಉಪ ಕಾರ್ಯದರ್ಶಿ ನಿಂಗಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಉಮೇಶ ಕೋಳಕೂರ, ಅನುಸೂಯಾ ಜಾಧವ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT