ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮೀಣ ಕೆರೆ ಸಮರ್ಪಕ ನಿರ್ವಹಣೆ: ಸೂಚನೆ

Last Updated 13 ಅಕ್ಟೋಬರ್ 2011, 5:15 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಗ್ರಾಮೀಣ ಪ್ರದೇಶಗಳಲ್ಲಿರುವ ಎಲ್ಲ ಕೆರೆಗಳನ್ನು ಸುಸ್ಥಿತಿಯಲ್ಲಿಡುವುದು ಗ್ರಾಮ ಪಂಚಾಯಿತಿಗಳ ಹೊಣೆ. ಹಾಗೆಯೇ ಕೆರೆಗಳಿಂದ ಪಂಚಾಯಿತಿ ಆದಾಯ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಂಗೇಗೌಡ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಎಲ್ಲ ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿನ ಕೆರೆಗಳನ್ನು ಗುರುತಿಸಿ, ಅವುಗಳಲ್ಲಿ ಮೀನುಗಾರಿಕೆಗೆ ಗುತ್ತಿಗೆ ನೀಡಿದರೆ ಪಂಚಾಯಿತಿಗಳಿಗೆ ಆದಾಯ ದೊರಕುತ್ತದೆ. ಈ ಬಗ್ಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ವಿವಿಧ ಇಲಾಖೆಗಳು ಎಲ್ಲ ಆಸ್ತಿ, ಬಾಡಿಗೆ ಕಟ್ಟಡಗಳು, ಭೂಮಿ, ಶಾಲೆ ಮೈದಾನ ಸೇರಿದಂತೆ ಎಲ್ಲ ಸ್ವತ್ತುಗಳ ದಾಖಲೆಗಳನ್ನು ಸಮರ್ಪಕವಾಗಿಟ್ಟುಕೊಳ್ಳಬೇಕು. ದೀರ್ಘ ಕಾಲದಿಂದ ಕಡಿಮೆ ಬಾಡಿಗೆ ನೀಡುತ್ತಾ ವಾಣಿಜ್ಯ ಸಂಕೀರ್ಣ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡದಲ್ಲಿರುವವರನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ವಿವಿಧ ಇಲಾಖೆಗಳು ನೀಡಿದ ಮಾಹಿತಿಗೆ ಅಸಮಾಧಾನ ಸೂಚಿಸಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ವಸತಿ ಮತ್ತು ಉದ್ಯೋಗ ಖಾತರಿ ಯೋಜನೆಯಲ್ಲಿ ಗುರಿ ಸಾಧಿಸದಿದ್ದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪಂಚಾಯತ್‌ರಾಜ್ ಎಂಜಿನಿಯರಿಂಗ್ ಇಲಾಖೆ ಕಾರ್ಯನಿರ್ವಹಣೆಗೆ ಹಾಗೂ ವಿವಿಧ ಇಲಾಖೆಗಳಲ್ಲಿ ವಿಶೇಷ ಘಟಕ ಕಾರ್ಯಕ್ರಮಗಳ ಪ್ರಗತಿಯಲ್ಲಿ ಗುರಿ ಸಾಧಿಸದಿರುವುದಕ್ಕೂ ಅತೃಪ್ತಿ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಸತಿ ಫಲಾನುಭವಿಗಳ ಆಯ್ಕೆಯಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತರ ಫಲಾನುಭವಿಗಳು ದೊರಕದಿದ್ದರೆ ಆ ಕೋಟಾವನ್ನು ನೆರೆಯ ಗ್ರಾಮ ಪಂಚಾಯಿತಿಗಳಿಗೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ವಿವೇಚನೆಯಲ್ಲಿ ವರ್ಗಾಯಿಸಬಹುದು ಎಂದು ರಂಗೇಗೌಡ ತಿಳಿಸಿದರು.

ಜಿಲ್ಲೆಗೆ 4400 ಟನ್ ಪೊಟ್ಯಾಷ್ ಸರಬರಾಜಾಗಿದೆ. ಗೊಬ್ಬರದ ಕೊರತೆ ಬಹುತೇಕ ಪರಿಹಾರವಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪೌಷ್ಟಿಕ ಆಹಾರದ ಕೊರತೆಯಿಂದ ಜಿಲ್ಲೆಯಲ್ಲಿ 272 ಮಕ್ಕಳು ತೀವ್ರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಬೆಂಗಳೂರು ಮತ್ತು ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಸಭೆಗೆ ತಿಳಿಸಿದರು.

ಈ ಮಕ್ಕಳ ಆರೋಗ್ಯದ ಮೇಲೆ ಗಮನವಿಡುವಂತೆ ಮುಖ್ಯಕಾರ್ಯನಿರ್ವಹಣಾಧಿಕಾರಿ ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮರಳು ಕೊರತೆಯಿಂದ ತೀವ್ರ ತೊಂದರೆ ಎದುರಾಗಿದೆ. ಲೋಕೋಪಯೋಗಿ ಇಲಾಖೆ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಶಿವೇಗೌಡ ಸೂಚಿಸಿದರು.

ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಪದ್ಮಾ ಚಂದ್ರಪ್ಪ, ಮುಖ್ಯ ಯೋಜನಾಧಿಕಾರಿ ಸುಬ್ಬರಾವ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT