ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

`ಗ್ರಾಮೀಣ ಕ್ರೀಡಾಪಟುಗಳಿಗೂ ಪ್ರೋತ್ಸಾಹ ನೀಡಿ'

Last Updated 3 ಸೆಪ್ಟೆಂಬರ್ 2013, 6:27 IST
ಅಕ್ಷರ ಗಾತ್ರ

ಮಂಗಳೂರು: ಸರ್ಕಾರ ಹಾಗೂ ಸಂಘ ಸಂಸ್ಥೆಗಳು ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ಗೆದ್ದವರನ್ನು ಮಾತ್ರ ಸನ್ಮಾನಿಸುತ್ತವೆ. ಗ್ರಾಮೀಣ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಕೂಡ ಸಾಧನೆ ಮಾಡಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ರಿತೇಶ್ ಶೆಟ್ಟಿ ಹೇಳಿದರು.

ಸ್ವಾಮಿ ವಿವೇಕಾನಂದ ಅವರ 150ನೇ ಜನ್ಮದಿನದ ಸ್ಮರಣಾರ್ಥ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಂಗಳೂರು ತಾಲ್ಲೂಕು ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮಂಗಳ ಕ್ರೀಡಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಮಂಗಳೂರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಮತ್ತು ಬ್ಲಾಕ್ ಮಟ್ಟದ ಪೈಕಾ ಗ್ರಾಮೀಣ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಗ್ರಾಮೀಣ ಕ್ರೀಡಾಪಟುಗಳಿಗೆ ಸಿಗುವ ಪ್ರೋತ್ಸಾಹ ಕಡಿಮೆ. ಹಳ್ಳಿಗಳಲ್ಲಿ ಇರುವ ವಿದ್ಯಾರ್ಥಿಗಳಿಗೆ ಉತ್ತಮ ತರಬೇತಿ ಲಭ್ಯವಾದರೆ ಕ್ರೀಡಾ ಸಾಧನೆ ಮಾಡುವ ಸಾಮರ್ಥ್ಯ ಅವರಿಗೂ ಇರುತ್ತದೆ. ಆದರೆ ಸರ್ಕಾರ ಕ್ರೀಡೆಗೆ ನೀಡುವ ಅನುದಾನ ಕಡಿಮೆ. ಚಿನ್ನದ ಪದಕ ಗೆದ್ದವರಿಗೆ ಮಾತ್ರ ಸೈಟು, ಹಣ ನೀಡುತ್ತಿದೆ. ಇದು ಬೇಸರದ ಸಂಗತಿ ಎಂದು ಅವರು ಹೇಳಿದರು.

ಮಂಗಳೂರು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಪೈಕಾ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದಲ್ಲಿಯೂ ಜಿಲ್ಲೆಗೆ ಉತ್ತಮ ಹೆಸರು ತರಬೇಕು ಎಂದು ಹೇಳಿದರು.

ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಎನ್.ಎಸ್.ಅಂಗಡಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಪಿ.ಪಾರ್ಶ್ವನಾಥ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಯಶವಂತಿ ಆಳ್ವ, ಆಶಾ ಆರ್. ಸುವರ್ಣ, ಪಾಲಿಕೆ ಸದಸ್ಯೆ ಜಯಂತಿ ಆಚಾರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮಂಗಳೂರು ದಕ್ಷಿಣ ವಲಯದ ಅಧ್ಯಕ್ಷೆ ಸೇವಂತಿ ಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT